ಪ್ರಧಾನಿ ಮೋದಿ ಭೇಟಿಯಾದ ಸಂಸದೆ ಸುಮಲತಾ

| Published : Feb 10 2024, 01:47 AM IST

ಸಾರಾಂಶ

ಹಾಲಿ ಸಂಸದೆಯಾಗಿರುವ ತಮ್ಮನ್ನು ಗುರುತಿಸಿ ಟಿಕೆಟ್ ನೀಡಬೇಕು. ಮಂಡ್ಯ ಕ್ಷೇತ್ರವನ್ನು ಬಿಜೆಪಿಯಲ್ಲೇ ಉಳಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಮಂಡ್ಯ ಲೋಕಸಭೆ ಟಿಕೆಟ್‌ಗಾಗಿ ನಿಲ್ಲದ ಸಂಸದೆಯ ಸರ್ಕಸ್ । ಮತ್ತೊಮ್ಮೆ ಮೋದಿ ಜೊತೆ ಕೆಲಸ ಮಾಡುವ ಇಚ್ಛೆ

ಕನ್ನಡಪ್ರಭ ವಾರ್ತೆ ಮಂಡ್ಯ

ಮಂಡ್ಯ ಲೋಕಸಭೆ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿರುವ ಬಿಜೆಪಿ ಬೆಂಬಲಿತ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಎರಡನೇ ದಿನವೂ ದೆಹಲಿಯಲ್ಲಿ ಸರ್ಕಸ್ ಮುಂದುವರೆಸಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಸಾಧಿಸಿದ್ದು, ಮಂಡ್ಯ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವ ಸಾಧ್ಯತೆಗಳ ಕುರಿತು ವ್ಯಾಪಕ ಚರ್ಚೆಯಾಗುತ್ತಿದೆ. ಹಾಲಿ ಸಂಸದೆಯಾಗಿರುವ ತಮ್ಮನ್ನು ಗುರುತಿಸಿ ಟಿಕೆಟ್ ನೀಡಬೇಕು. ಮಂಡ್ಯ ಕ್ಷೇತ್ರವನ್ನು ಬಿಜೆಪಿಯಲ್ಲೇ ಉಳಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿದ ಸಮಯದಲ್ಲಿ ಅವರು ನೀಡಿದ ಮಾರ್ಗದರ್ಶನ ಹಾಗೂ ಮಾತುಗಳು ಅತ್ಯಂತ ಸ್ಫೂರ್ತಿದಾಯಕವಾಗಿವೆ. ಮುಂದಿನ ದಿನಗಳಲ್ಲಿ ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರೆಸೋಣ ಎಂದಿದ್ದಾರೆ. ಜನರ ಸೇವೆ ಮಾಡಲು ಮತ್ತು ಭಾರತವನ್ನು ಮುಂದುವರೆದ ದೇಶಗಳ ಸಾಲಿನಲ್ಲಿ ನೋಡುವುದಕ್ಕೆ ಸುಮಲತಾ ಉತ್ಸುಕರಾಗಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದೇ ವೇಳೆ ಸಂಸದೆ ಸುಮಲತಾ, ಮಂಡ್ಯ ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಆಸಕ್ತಿ ವಹಿಸಿ, ಉತ್ತಮ ಯೋಜನೆಗಳನ್ನು ಕಾರ್ಯಗತಗೊಳಿಸಲು ಅನುದಾನವನ್ನು ಒದಗಿಸಿದ್ದಕ್ಕಾಗಿ ಪ್ರಧಾನಮಂತ್ರಿಗಳಿಗೆ ಧನ್ಯವಾದ ಸಮರ್ಪಿಸಿದ್ದಾರೆ. ಮುಂದಿನ ಅವಧಿಯಲ್ಲೂ ರಾಷ್ಟ್ರ ಮತ್ತು ರಾಜ್ಯ ಸೇವೆಯಲ್ಲಿ ನರೇಂದ್ರ ಮೋದಿ ಅವರೊಂದಿಗೆ ಕೆಲಸ ಮಾಡುವುದಕ್ಕೆ ಎದುರು ನೋಡುತ್ತಿದ್ದೇನೆ.ಮೋದಿಯವರ ನಮ್ರತೆ ಮತ್ತು ಗೌರವಕ್ಕೆ ಕೃತಜ್ಞಳಾಗಿದ್ದೇನೆ ಎಂದು ಹೇಳಿದ್ದಾರೆ.

ಭಾರತದಂತಹ ಬೃಹತ್ ದೇಶವನ್ನು ಕಳೆದ ಹತ್ತು ವರ್ಷಗಳಿಂದ ಯಶಸ್ವಿಯಾಗಿ ಮುನ್ನಡೆಸುತ್ತಿರುವ ಮೋದಿಯವರು ಮುಂದುವರೆದ ರಾಷ್ಟ್ರಗಳ ಸಾಲಿಗೆ ಭಾರತವನ್ನು ಸೇರಿಸಲು ಪಡುತ್ತಿರುವ ಶ್ರಮ ಶ್ಲಾಘನೀಯ. ದೇಶದ ಅಭಿವೃದ್ಧಿ ಹಾಗೂ ಭವಿಷ್ಯದ ಬಗ್ಗೆ ದೂರದೃಷ್ಟಿ ಹೊಂದಿದ್ದು, ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸೇರಿ ಎಲ್ಲಾ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಲು ಮೋದಿಯವರ ನಾಯಕತ್ವವೇ ಕಾರಣ ಎಂದು ಕೊಂಡಾಡಿದ್ದಾರೆ.