ಕನ್ನಡಪ್ರಭ ವಾರ್ತೆ ಮದ್ದೂರು
ಆದಿಚುಂಚನಗಿರಿ ಕ್ಷೇತ್ರದ ಬಿಜಿಎಸ್ ಆಸ್ಪತ್ರೆಯನ್ನು ಮತ್ತಷ್ಟು ಉನ್ನತ ದರ್ಜೆಗೆ ಏರಿಸುವ ಮೂಲಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನಾಗಿ ಅಭಿವೃದ್ಧಿ ಪಡಿಸಲು ಕ್ಷೇತ್ರದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಶ್ರೀಗಳು ಚಿಂತನೆ ನಡೆಸಿದ್ದಾರೆ ಎಂದು ಕಿರಿಯ ಸ್ವಾಮೀಜಿ ಸತ್ಕೀರ್ತಿನಾಥ ಶ್ರೀಗಳು ಸೋಮವಾರ ಹೇಳಿದರು.ತಾಲೂಕಿನ ಕೊಪ್ಪ ಗ್ರಾಮದ ಪಟ್ಟಲದಮ್ಮ ದೇವಸ್ಥಾನದ ಆವರಣದಲ್ಲಿ ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ಅವರ 66ನೇ ಹುಟ್ಟುಹಬ್ಬದ ಅಂಗವಾಗಿ 1 ನೇ ಮತ್ತು 2 ನೇ ವೃತ್ತದ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳು ಆಯೋಜಿಸಿದ್ದ ಬೃಹತ್ ಆರೋಗ್ಯ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.
ಆದಿಚುಂಚನಗಿರಿ ಮಠವು ಕೇವಲ ಧಾರ್ಮಿಕ ಕೇಂದ್ರವಷ್ಟೇ ಅಲ್ಲ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೂ ಅಪಾರ ಕೊಡುಗೆ ನೀಡಿದೆ. ಗ್ರಾಮೀಣ ಭಾಗದಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗದ ಜನರು ನಗರ ಪ್ರದೇಶಗಳಿಗೆ ತೆರಳಿ ಆರೋಗ್ಯ ಸೇವೆ ಪಡೆಯಲು ಸಾಧ್ಯವಾಗದ ಇಂದಿನ ದಿನಗಳಲ್ಲಿ ಕೀರ್ತಿ ಶೇಷರಾದ ಬಾಲಗಂಗಾಧರನಾಥ ಶ್ರೀಗಳು ಬೀಜಿಎಸ್ ಆಸ್ಪತ್ರೆ ತೆರೆದು ಜನರಿಗೆ ಆರೋಗ್ಯ ಸೇವೆ ನೀಡುತ್ತಿದ್ದಾರೆ ಎಂದರು.ಆಸ್ಪತ್ರೆಯನ್ನು ಮತ್ತಷ್ಟು ಅಭಿವೃದ್ಧಿಪಡಿಸಿ ಹೃದಯ ಸಂಬಂಧಿ, ಕ್ಯಾನ್ಸರ್ ಸೇರಿದಂತೆ ಎಲ್ಲಾ ರೀತಿಯ ಆರೋಗ್ಯ ಸೇವೆಗಳು ಒಂದೇ ಸೂರಿನಡಿ ದೊರಕಬೇಕೆಂಬ ಉದ್ದೇಶದಿಂದ ಬಿಜಿಎಸ್ ಆಸ್ಪತ್ರೆಯನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಅಭಿವೃದ್ಧಿಪಡಿಸಲು ನಿರ್ಮಲಾನಂದನಾಥ ಶ್ರೀಗಳು ಆಲೋಚನೆ ಹೊಂದಿದ್ದಾರೆ ಎಂದರು.
ಜಿಲ್ಲಾ ಸಹಕಾರ ಬ್ಯಾಂಕ್ ಅಧ್ಯಕ್ಷ ಸಚ್ಚಿನ್ ಚಲುವರಾಯಸ್ವಾಮಿ ಮಾತನಾಡಿ, ರಾಜಕಾರಣಿಗಳ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸುತ್ತಿರುವ ಇಂದಿನ ದಿನಗಳಲ್ಲಿ ತಂದೆ ಚಲುವರಾಯಸ್ವಾಮಿ ರಾಜಕಾರಣಿಯಾಗಿದ್ದರೂ ಅವರ ಹುಟ್ಟುಹಬ್ಬವನ್ನು ಸಮಾಜಮುಖಿ ಕಾರ್ಯಗಳ ಮೂಲಕ ಕಾರ್ಯಕರ್ತರು ಮತ್ತು ಅಭಿಮಾನಿಗಳು ಆಚರಿಸುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ವೈದ್ಯಕೀಯ ಕಾಲೇಜಿನ ಸಾರ್ವಜನಿಕ ಸಂಪರ್ಕ ಅಧಿಕಾರಿ ಧರ್ಮೇಂದ್ರ, ಡಿಸಿಸಿ ಬ್ಯಾಂಕ್ ನಿರ್ದೇಶಕ ಕೆ.ಸಿ.ಜೋಗೀಗೌಡ, ಕೊಪ್ಪ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್.ದಿವಾಕರ್, ಪುತಿನ ಟ್ರಸ್ಟ್ ಸದಸ್ಯ ಕುಮಾರ್ ಕೊಪ್ಪ, ಜಿಪಂ ಮಾಜಿ ಸದಸ್ಯೆ ಉಮಾ ಗಂಗಾಧರ ಗೌಡ, ತಾಪಂ ಮಾಜಿ ಸದಸ್ಯರಾದ ಬಿ.ಎಂ.ರಘು, ಕೌಡ್ಲೆ ಶ್ರೀನಿವಾಸ್, ಮುಖಂಡರಾದ ಸುಧಾರಾಮು, ಗಟ್ಟಹಳ್ಳಿ ಹರೀಶ್, ಅಪ್ಪಾಜಿ, ಬೋರಯ್ಯ ಮತ್ತಿತರರು ಭಾಗವಹಿಸಿದ್ದರು.