ಸಾರಾಂಶ
ಕನ್ನಡಪ್ರಭ ವಾರ್ತೆ ಮೈಸೂರುಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆಯಲ್ಲಿನ ಅಕ್ರಮ ಆರೋಪಕ್ಕೆ ಸಂಬಂಧಿಸಿ ಬುಧವಾರ ವಿಚಾರಣೆಗೆ ಹಾಜರಾಗುವಂತೆ ಮೈಸೂರು ಲೋಕಾಯುಕ್ತ ಎಸ್ಪಿ ಉದೇಶ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿದ್ದಾರೆ.
ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತದಿಂದ ನೋಟಿಸ್ ನೀಡಲಾಗಿದೆ. ವಿಚಾರಣೆಗೆ ಹಾಜರಾಗುವುದಾಗಿ ಸ್ವತಃ ಸಿದ್ದರಾಮಯ್ಯ ಅವರೇ ಖಚಿತಪಡಿಸಿದ್ದಾರೆ. ಈ ಮೂಲಕ ರಾಜ್ಯದ ಇತಿಹಾಸದಲ್ಲೇ ಲೋಕಾಯುಕ್ತ ವಿಚಾರಣೆ ಎದುರಿಸಲಿರುವ ಮೊದಲ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಾಗಲಿದ್ದಾರೆ.ಪ್ರಕರಣದಲ್ಲಿ ಸಿದ್ದರಾಮಯ್ಯ ಅವರು ಮೊದಲ ಆರೋಪಿಯಾಗಿದ್ದಾರೆ. ಉಳಿದ ಮೂವರು ಆರೋಪಿಗಳಾದ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ.ಪಾರ್ವತಿ ಹಾಗೂ ಅವರ ಸಹೋದರ ಮಲ್ಲಿಕಾರ್ಜುನ ಸ್ವಾಮಿ ಮತ್ತು ಜಮೀನು ಮಾಲೀಕ ದೇವರಾಜು ಅವರ ವಿಚಾರಣೆ ಈಗಾಗಲೇ ಪೂರ್ಣಗೊಂಡಿದೆ. ನಿರೀಕ್ಷೆಯಂತೆ ಇದೀಗ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿ ಲೋಕಾಯುಕ್ತ ವಿಚಾರಣೆಗೆ ಕರೆದಿದೆ.
ಮುಡಾದ 50:50 ಅನುಪಾತದಲ್ಲಿ ಸೈಟು ಹಂಚಿಕೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಸೂಚನೆಯಂತೆ ಲೋಕಾಯುಕ್ತ ಪೊಲೀಸರು ಸಿದ್ದರಾಮಯ್ಯ ಸೇರಿ ನಾಲ್ವರ ವಿರುದ್ಧ ಎಫ್ಐಆರ್ ದಾಖಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿ 3 ತಿಂಗಳ ಒಳಗೆ ವರದಿ ಸಲ್ಲಿಸುವಂತೆ ನ್ಯಾಯಾಲಯ ಸೂಚಿಸಿರುವ ಹಿನ್ನೆಲೆಯಲ್ಲಿ ಆರಂಭದಲ್ಲೇ ದೂರುದಾರ ಸ್ನೇಹಮಯಿ ಕೃಷ್ಣ ಅವರ ವಿಚಾರಣೆಯನ್ನು ಲೋಕಾಯುಕ್ತ ಪೊಲೀಸರು ನಡೆಸಿ, ಸ್ಥಳ ಪರಿಶೀಲನೆಯನ್ನೂ ನಡೆಸಿದ್ದರು. ಇದೀಗ ಪ್ರಕರಣ ಪ್ರಮುಖ ಆರೋಪಿ ಆಗಿರುವ ಸಿದ್ದರಾಮಯ್ಯ ಅವರ ವಿಚಾರಣೆಯನ್ನು ಲೋಕಾಯುಕ್ತ ಕೈಗೆತ್ತಿಕೊಂಡಿದೆ.ಮುಡಾ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದ ಆದೇಶ ಹೊರಬಿದ್ದು, ಡಿಸೆಂಬರ್ ಅಂತ್ಯಕ್ಕೆ ಮೂರು ತಿಂಗಳ ಅವಧಿ ಪೂರ್ಣಗೊಳ್ಳಲಿದೆ. ಹೀಗಾಗಿ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಲೋಕಾಯುಕ್ತವು ತೀವ್ರಗೊಳಿಸಿದೆ. ದಸರಾಗೆ ಮುನ್ನ ಸಿದ್ದರಾಮಯ್ಯ ಅವರ ಬಾಮೈದ ಮಲ್ಲಿಕಾರ್ಜುನ ಹಾಗೂ ಜಮೀನು ಮಾರಾಟ ಮಾಡಿದ ದೇವರಾಜು ಅವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ದಸರಾ ಬಳಿಕ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರನ್ನು ಗೌಪ್ಯವಾಗಿ ವಿಚಾರಣೆ ನಡೆಸಲಾಗಿತ್ತು. ಇದೀಗ ದೀಪಾವಳಿ ಬಳಿಕ ಸಿದ್ದರಾಮಯ್ಯ ವಿಚಾರಣೆಗ ದಿನಾಂಕ ನಿಗದಿಯಾಗಿದೆ.
ಮುಖ್ಯಮಂತ್ರಿಯೊಬ್ಬರು ಪ್ರಕರಣವೊಂದರಲ್ಲಿ ಲೋಕಾಯುಕ್ತದ ಮುಂದೆ ವಿಚಾರಣೆಗೆ ಹಾಜರಾಗುತ್ತಿರುವುದು ರಾಜ್ಯದ ಇತಿಹಾಸದಲ್ಲಿ ಇದೇ ಮೊದಲಾಗಿದೆ. ಈ ಹಿಂದೆ ಹ್ಯೂಬ್ಲೊಟ್ ವಾಚ್ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಳಿ ಬಂದಿದ್ದ ಆರೋಪಕ್ಕೆ ಸಂಬಂಧಿಸಿ ಲೋಕಾಯುಕ್ತವು ಪ್ರಾಥಮಿಕ ತನಿಖೆ ನಡೆಸಿತ್ತಾದರೂ ಲೋಕಾಯುಕ್ತದ ತನಿಖಾಧಿಕಾರ ಕಿತ್ತುಕೊಂಡಿದ್ದ ಹಿನ್ನೆಲೆಯಲ್ಲಿ ಸಂಸ್ಥೆಯು ಯಾವುದೇ ಎಫ್ಐಆರ್ ದಾಖಲಿಸಿರಲಿಲ್ಲ.