ಸಾರಾಂಶ
ಕನ್ನಡಪ್ರಭವಾರ್ತೆ ಮೂಲ್ಕಿ
ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆಗಳು ಮತ್ತು ಬೇಡಿಕೆಗಳ ಈಡೇರಿಕೆಗಾಗಿ ಎರಡನೇ ಹಂತದ ಅನಿರ್ದಿಷ್ಟಾವಧಿ ಮುಷ್ಕರ ಹಾಗೂ ಮೌನ ಪ್ರತಿಭಟನೆಯು ಸೋಮವಾರ ಮೂಲ್ಕಿ ತಾಲೂಕು ವ್ಯಾಪ್ತಿಯಲ್ಲಿ ಮೂಲ್ಕಿ ತಾಲೂಕು ಕಚೇರಿಯ ಮುಂಭಾಗ ನಡೆಯಿತು.ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ವತಿಯಿಂದ 2024ನೇ ಆ. 26 ರಿಂದ ಸ. 3ರವರೆಗೆ ಮುಷ್ಕರ ನಡೆದಿದ್ದು ಬಳಿಕ ಸರ್ಕಾರದ ಪ್ರಧಾನ ಕಾರ್ಯದರ್ಶಿ, ಕಂದಾಯ ಇಲಾಖೆಯ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಎಲ್ಲ ಬೇಡಿಕೆಗಳನ್ನು ಈಡೇರಿಸುವಂತೆ ಭರವಸೆ ನೀಡಿದ್ದರಿಂದ ಮುಷ್ಕರವನ್ನು ಹಿಂಪಡೆಯಲಾಗಿತ್ತು . ಬಳಿಕ ಇವರೆಗೆ ಸರ್ಕಾರವು ನೌಕರರ ಬೇಡಿಕೆಯ ವಿಚಾರವಾಗಿ ಯಾವುದೇ ತೃಪ್ತಿಕರ ಕ್ರಮಗಳನ್ನು ಕೈಗೊಳ್ಳದೆ ಬೇಡಿಕೆಗಳನ್ನು ಈಡೇರಿಸದಿರುವುದರಿಂದ ಮುಷ್ಕರದ ಪೂರ್ವದ ಅವಧಿಗಿಂತಲೂ ಹೆಚ್ಚಿನ ಕಾರ್ಯದ ಒತ್ತಡ ಉಂಟಾಗಿದೆ. ಗ್ರಾಮ ಆಡಳಿತ ಅಧಿಕಾರಿಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಬೇಕು, ಅಧಿಕಾರಿಗಳ ಹುದ್ದೆಯನ್ನು ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿ ನಿಗದಿಪಡಿಸಿ ಆದೇಶ ನೀಡಬೇಕು, ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಸೌಲಭ್ಯ ಗಳನ್ನು ಕಲ್ಪಿಸಬೇಕೆಂಬ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ವ್ಯಾಪಿ, ಅನಿರ್ದಿಷ್ಟಾವಧಿ ಎಲ್ಲ ಕೆಲಸಗಳನ್ನು ಸ್ಥಗಿತಗೊಳಿಸಿ ಮುಷ್ಕರ ನಡೆಸಲು ತೀರ್ಮಾನಿಸಲಾಗಿದೆ ಎಂದು ಮೂಲ್ಕಿ ತಾಲೂಕು ವ್ಯಾಪ್ತಿಯ ಬಪ್ಪನಾಡು, ಪಡುಪಣಂಬೂರು, ಹಳೆಯಂಗಡಿ, ಅತಿಕಾರಿಬೆಟ್ಟು, ತಾಳಿಪಾಡಿ, ಕಿಲ್ಪಾಡಿ ಎಳತ್ತೂರು-ಶಿಮಂತೂರು, ಐಕಳ ಗ್ರಾಮ ಆಡಳಿತ ಅಧಿಕಾರಿಗಳ ಅಧ್ಯಕ್ಷ ಸುಜಿತ್ ತಿಳಿಸಿದ್ದಾರೆ.