ಮುಂದಿನ ಬಜೆಟ್‌ನಲ್ಲಿ ಜಿಲ್ಲೆಗೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಮಂಕಾಳ ಎಸ್. ವೈದ್ಯ

| Published : Nov 02 2025, 03:30 AM IST

ಮುಂದಿನ ಬಜೆಟ್‌ನಲ್ಲಿ ಜಿಲ್ಲೆಗೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಮಂಕಾಳ ಎಸ್. ವೈದ್ಯ
Share this Article
  • FB
  • TW
  • Linkdin
  • Email

ಸಾರಾಂಶ

ಬರುವ ಬಜೆಟ್‌ನಲ್ಲಿ ಜಿಲ್ಲೆಗೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಘೋಷಣೆಯಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಹೇಳಿದರು.

ಕಾರವಾರ: ಬರುವ ಬಜೆಟ್‌ನಲ್ಲಿ ಜಿಲ್ಲೆಗೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಘೋಷಣೆಯಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಹೇಳಿದರು.

ಕಾರವಾರದ ಪೊಲೀಸ್ ಪರೇಡ್ ಮೈದಾನದಲ್ಲಿ ಶನಿವಾರ ಜಿಲ್ಲಾಡಳಿತದಿಂದ ನಡೆದ ಕನ್ನಡ ರಾಜ್ಯೋತ್ಸವ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 450 ಹಾಸಿಗೆ ಹೊಸ ಆಸ್ಪತ್ರೆಯ ಕಟ್ಟಡ ಕಾಮಗಾರಿ ಮುಕ್ತಾಯಗೊಂಡಿದ್ದು, ಜಿಲ್ಲೆಯ ಜನರ ಬೇಡಿಕೆಯಂತೆ ಮುಂಬರುವ ಬಜೆಟ್‌ನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಘೋಷಣೆಯಾಗುತ್ತದೆ ಮತ್ತು ಜಿಲ್ಲೆಯಲ್ಲಿ ಮಲ್ಪಿ ಸ್ಪೆಷಾಲಿಟಿ ಆಸ್ಪತ್ರೆ ಆರಂಭವಾಗಲಿದೆ ಎಂದು ಸ್ಪಷ್ಟಪಡಿಸಿದರು.

ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ಐದು ಗ್ಯಾರಂಟಿ ಯೋಜನೆಗಳನ್ನು ಯಥಾವತ್ತಾಗಿ ಜಾರಿಗೊಳಿಸುವ ಮೂಲಕ ರಾಜ್ಯದ ಸಮಸ್ತ ಜನರ ಬದುಕಿಗೆ ಆರ್ಥಿಕ ಭದ್ರತೆಯನ್ನ ಒದಗಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದ್ದು, ಈ ಯೋಜನೆಗಳಿಂದ ರಾಜ್ಯದ ಜನತೆ ನೆಮ್ಮದಿ ಮತ್ತು ಸಂತೋಷದ ಜೀವನ ನಡೆಸಲು ಸಾಧ್ಯವಾಗಿದೆ ಎಂದರು.

ಜಿಲ್ಲೆಯಲ್ಲಿ ಶಿಕ್ಷಣಕ್ಕೆ ಪ್ರಥಮಾದ್ಯತೆಯನ್ನು ನೀಡಿದ್ದು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಶಿರಸಿ ಮತ್ತು ಭಟ್ಕಳದಲ್ಲಿ ಹಾಸ್ಟೆಲ್‌ಗಳನ್ನು ನಿರ್ಮಿಸಲಾಗುತ್ತಿದೆ. ಕಾರ್ಮಿಕ ಇಲಾಖೆಯಿಂದ ವಿಶೇಷವಾಗಿ ಕಾರ್ಮಿಕರ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ₹55 ಕೋಟಿ ವೆಚ್ಚದಲ್ಲಿ ವಸತಿ ಶಾಲೆಯನ್ನು ಭಟ್ಕಳದಲ್ಲಿ ನಿರ್ಮಿಸಲಾಗುತ್ತಿದೆ. ಕಾರ್ಮಿಕರು, ಸಾಮಾನ್ಯ ವರ್ಗದ ಮಕ್ಕಳು ಶಿಕ್ಷಣವಂತರಾದರೇ ದೇಶ, ರಾಜ್ಯ, ಜಿಲ್ಲೆ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ ಎಂದರು.

ರಾಜ್ಯದ ಕರಾವಳಿ ಪ್ರದೇಶವನ್ನು ಅಭಿವೃದ್ಧಿಪಡಿಸಲು ನೀಲನಕ್ಷೆಯನ್ನು ತಯಾರಿಸಿ ₹23 ಸಾವಿರ ಕೋಟಿ ವೆಚ್ಚದಲ್ಲಿ 126 ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಯೋಜನೆಗಳಿಂದ ಪ್ರವಾಸೋದ್ಯಮ, ವಾಣಿಜ್ಯ ಬಂದರು, ಮೀನುಗಾರಿಕೆ ಬಂದರು ಮತ್ತು ಮೀನುಗಾರಿಕೆಗೆ ಅಭಿವೃದ್ಧಿಯ ಜೊತೆಯಲ್ಲಿ ನಿರುದ್ಯೋಗ ಸಮಸ್ಯೆ, ಕಡಲ ಕೊರೆತ ಸಮಸ್ಯೆಗಳನ್ನು ನಿವಾರಿಸಲು ಸಹಕಾರಿಯಾಗಲಿದೆ ಎಂದರು.

ವೇದಿಕೆ ಕಾರ್ಯಕ್ರಮದ ಪೂರ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಸ್ತಬ್ಧ ಚಿತ್ರ ಮೆರವಣಿಗೆಗೆ ಚಾಲನೆ ನೀಡಿದರು.

ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್, ನಗರಸಭೆ ಅಧ್ಯಕ್ಷ ರವಿರಾಜ ಅಂಕೋಲೆಕರ್, ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿಲೀಷ್ ಶಶಿ, ಅಪರ ಜಿಲ್ಲಾ ಅಧಿಕಾರಿ ಸಾಜಿದ್ ಮುಲ್ಲಾ, ತರಬೇತಿ ನಿರತ ಐಎಎಸ್ ಅಧಿಕಾರಿ ಝೂಪೀಶನ್ ಹಕ್ ಮತ್ತಿತರರು ಇದ್ದರು.

ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಲಾಯಿತು ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ಬುಡಕಟ್ಟು ಸಮುದಾಯದರರಿಗೆ ಪೌಷ್ಠಿಕ ಆಹಾರದ ಕಿಟ್ ವಿತರಣೆ ಮಾಡಲಾಯಿತು. ಪೊಲೀಸ್, ಅರಣ್ಯ, ಗೃಹ ರಕ್ಷಕ ದಳ, ಎನ್.ಸಿ.ಸಿ, ಸ್ಕೌಟ್ಸ್ ಆ್ಯಂಡ್ ಗೈಡ್ಸ್, ಸೇವಾದಳ ತಂಡಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಶಾಲಾ ವಿದ್ಯಾರ್ಥಿಗಳಿಂದ ನಾಡಿನ ಕಲೆ ಸಾಹಿತ್ಯ ಸಂಸ್ಕೃತಿ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.