ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವ ಉದ್ದೇಶದಿಂದ ತಾಲೂಕು ಆಡಳಿತದ ವತಿಯಿಂದ ಪಟ್ಟಣದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಪ್ರಜಾಸೇವೆ ಆಂದೋಲನ ಕಾರ್ಯಕ್ರಮವನ್ನು ಪುರಸಭೆ ಅಧ್ಯಕ್ಷ ಸುರೇಶ ಹರಸೂರು ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಮಸ್ಕಿ

ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವ ಉದ್ದೇಶದಿಂದ ತಾಲೂಕು ಆಡಳಿತದ ವತಿಯಿಂದ ಪಟ್ಟಣದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಪ್ರಜಾಸೇವೆ ಆಂದೋಲನ ಕಾರ್ಯಕ್ರಮವನ್ನು ಪುರಸಭೆ ಅಧ್ಯಕ್ಷ ಸುರೇಶ ಹರಸೂರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ತಹಸೀಲ್ದಾರ್ ಮಂಜುನಾಥ ಭೋಗಾವತಿ, ಸಾರ್ವಜನಿಕರ ವಿವಿಧ ಕಾರಣಗಳಿಂದ ಸ್ಥಗಿತಗೊಂಡಿದ್ದ ಸುಮಾರು 7,800 ಪಿಂಚಣಿಗಳ ಪೈಕಿ ಪರಿಶೀಲನೆ ನಡೆಸಿ 6 ಸಾವಿರಕ್ಕೂ ಅಧಿಕ ಅರ್ಹ ಫಲಾನುಭವಿಗಳಿಗೆ ಪಿಂಚಣಿ ಸೌಲಭ್ಯ ಮರು ಕಲ್ಪಿಸಲಾಗಿದೆ. ಇನ್ನು ಸುಮಾರು 800 ಅರ್ಜಿಗಳನ್ನು ತಿರಸ್ಕರಿಸಲಾಗಿದೆ ಎಂದು ತಿಳಿಸಿದರು.

ಪ್ರಜಾಸೇವೆ ಆಂದೋಲನದಲ್ಲಿ ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿಗಳಿಗೆ ಖಂಡಿತ ಪರಿಹಾರ ದೊರೆಯಲಿದೆ. ಕಂದಾಯ, ಪಂಚಾಯತ್ ರಾಜ್ ಸೇರಿದಂತೆ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ಬಾಕಿ ಉಳಿದಿರುವ ಸಾರ್ವಜನಿಕರ ಕೆಲಸಗಳನ್ನು ಇತ್ಯರ್ಥಪಡಿಸಲು ಈ ಅಭಿಯಾನ ಅನುಕೂಲವಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು. ನಿವೇಶನ ರಹಿತ ಕುಟುಂಬಗಳಿಗೆ ಹಕ್ಕು ಪತ್ರ ನೀಡಲು ಭೂಮಿಯನ್ನು ನಿಗದಿ ಮಾಡಲಾಗಿದೆ.

ಪುರಸಭೆ ಅಧ್ಯಕ್ಷ ಸುರೇಶ ಹರಸೂರು ಮಾತನಾಡಿ, ಜನರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಅಧಿಕಾರಿ ಗಳೇ ಜನರ ಬಳಿಗೆ ತೆರಳಿ ಸಮಸ್ಯೆಗಳನ್ನು ಆಲಿಸಿ ಇತ್ಯರ್ಥಪಡಿಸುವುದೇ ಪ್ರಜಾಸೇವೆ ಅಭಿಯಾನದ ಮುಖ್ಯ ಉದ್ದೇಶವಾಗಿದೆ. ಸಾರ್ವಜನಿಕರು ತಮ್ಮ ಕುಂದು ಕೊರತೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳಬೇಕು ಎಂದರು.

40 ವರ್ಷಗಳಿಂದ ವಾಸ, ಆರು ವರ್ಷಗಳಿಂದ ಹಕ್ಕುಪತ್ರಕ್ಕಾಗಿ ಹೋರಾಟ: ಸೋಮನಾಥ ನಗರದ ನಿವಾಸಿಗಳ ಪರವಾಗಿ ಮಾತನಾಡಿದ ದಲಿತ ಮುಖಂಡ ಹನುಮಂತಪ್ಪ ವೆಂಕಟಪುರ, ಸೋಮನಾಥ ನಗರದಲ್ಲಿ ಕಳೆದ 40 ವರ್ಷಗಳಿಂದ ಜನರು ವಾಸವಾಗಿದ್ದು, ಈ ಪ್ರದೇಶ 2 ಮತ್ತು 12ನೇ ವಾರ್ಡ್ಗಳ ವ್ಯಾಪ್ತಿಗೆ ಬರುತ್ತದೆ. ನಿವಾಸಿಗಳಿಗೆ ಹಕ್ಕುಪತ್ರ ನೀಡುವಂತೆ ಕಳೆದ ಆರು ವರ್ಷಗಳಿಂದ ನಿರಂತರ ಹೋರಾಟ ನಡೆಸುತ್ತಿದ್ದರೂ ನ್ಯಾಯ ದೊರೆತಿಲ್ಲ. ನಮಗೆ ಯಾಕೆ ನ್ಯಾಯ ಸಿಗುತ್ತಿಲ್ಲ ಎಂದು ಪ್ರಶ್ನಿಸಿದರು.

ಸರ್ಕಾರ ಈಗಾಗಲೇ ಇಲ್ಲಿನ ನಿವಾಸಿಗಳಿಗೆ ಜನತಾ ಮನೆ ಸೇರಿದಂತೆ ವಿವಿಧ ಮೂಲಭೂತ ಸೌಲಭ್ಯಗಳನ್ನು ಒದಗಿಸಿದೆ. ಆದರೆ ಹಕ್ಕುಪತ್ರ ನೀಡಲು ಹಿಂದೇಟು ಹಾಕುತ್ತಿರುವುದೇಕೆ ಎಂದು ಪ್ರಶ್ನಿಸಿದರು. ನಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಹಲವು ಬಾರಿ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ. ಪ್ರಜಾಸೇವೆ ಆಂದೋಲನದ ಮೂಲಕವಾದರೂ ಅಧಿಕಾರಿಗಳು ನಮ್ಮ ಸಮಸ್ಯೆಗೆ ಸ್ಪಂದಿಸಿ ಹಕ್ಕುಪತ್ರ ವಿತರಿಸಬೇಕು ಎಂದು ಆಗ್ರಹಿಸಿದರು.

ನಿವಾಸಿಗಳ ಮನವಿಗೆ ಸ್ಪಂದಿಸಿದ ತಹಸೀಲ್ದಾರ್ ಮಂಜುನಾಥ ಭೋಗಾವತಿ ಮಾತನಾಡಿ, ಸೋಮನಾಥ ನಗರದ ಹಕ್ಕುಪತ್ರ ಸಮಸ್ಯೆ ಇಷ್ಟು ದಿನಗಳ ಕಾಲ ವಿವಿಧ ಇಲಾಖೆಗಳ ನಡುವಿನ ಹೊಂದಾಣಿಕೆ ಕೊರತೆಯಿಂದ ವಿಳಂಬವಾಗಿದೆ. ಆದರೆ ಇನ್ನು ಮುಂದೆ ವಿಳಂಬವಾಗದಂತೆ ಕ್ರಮ ಕೈಗೊಂಡು ಆದಷ್ಟು ಬೇಗ ಸಮಸ್ಯೆಗೆ ಪರಿಹಾರ ಒದಗಿಸಲಾಗುವುದು. ಈ ಸಂಬಂಧ ತಾವು ಕೂಡ ನಾಲ್ಕು ಬಾರಿ ಪತ್ರ ವ್ಯವಹಾರ ನಡೆಸಿದ್ದೇನೆ. ನಿವಾಸಿಗಳಿಗೆ ಹಕ್ಕುಪತ್ರ ನೀಡುವ ಭರವಸೆ ಈಡೇರಿಸಲಾಗುವುದು. ಈ ವಿಚಾರದಲ್ಲಿ ಶಾಸಕರು ಕೂಡ ಮುತುವರ್ಜಿ ವಹಿಸಿದ್ದಾರೆ. ಆದ್ದರಿಂದ ಸಾರ್ವಜನಿಕರು ಸ್ವಲ್ಪ ತಾಳ್ಮೆಯಿಂದ ಇರಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಇಒ ಶಿವಾನಂದ ರೆಡ್ಡಿ, ಪುರಸಭೆ ಮುಖ್ಯಾಧಿಕಾರಿ ನರಸರೆಡ್ಡಿ, ಸರ್ವೇ ಇಲಾಖೆಯ ಹಜರತ್ ಅಲಿ, ಜೆಸ್ಕಾಂ ಇಲಾಖೆಯ ನಯನಾ, ಪಶುಸಂಗೋಪನಾ ಇಲಾಖೆಯ ಡಾ. ರಾಚಪ್ಪ, ಸತ್ಯನಾರಾಯಣ, ಗ್ರೇಡ್-2 ತಹಸೀಲ್ದಾರ್ ನಾಗಲಿಂಗ ಪತ್ತಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಸೋಮನಾಥನಗರದ 40 ವರ್ಷಗಳ ಹೋರಾಟಕ್ಕೆ ಪ್ರತಿಫಲ ಸಿಗಲಿದೆ ನಿಮಗೆ ಹಕ್ಕು ಪತ್ರದ ಜೊತೆಗೆ ಫಾರ್ಮ್ -3 ಅನ್ನು ಸಹ ನೀಡಲಾಗುವುದು ನನ್ನ ಮೇಲೆ ವಿಶ್ವಾಸವಿಡಿ ಎಂದು ತಹಸೀಲ್ದಾರ್ ಮಂಜುನಾಥ ಭೋಗಾವತಿ ಹೇಳಿದರು.