ಡಿಸಿಸಿ ಬ್ಯಾಂಕ್ ವತಿಯಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಉದ್ದೇಶಿಸಲಾಗಿದ್ದು, ಬ್ಯಾಂಕ್ ನಿರ್ದೇಶಕರು ಹಾಗೂ ಸ್ಥಳೀಯ ಶಾಸಕರು ಸಂಪೂರ್ಣ ಸಹಕಾರ ನೀಡಬೇಕು ಎಂದರು.

ಕನ್ನಡಪ್ರಭ ವಾರ್ತೆ ಗುಡಿಬಂಡೆ

ಕೋಲಾರ- ಚಿಕ್ಕಬಳ್ಳಾಪುರ ಭಾಗದಲ್ಲಿನ ರೈತರಿಗೆ ಹಾಗೂ ಮಹಿಳಾ ಸ್ವ- ಸಹಾಯ ಸಂಘಗಳ ಮೂಲಕ ಮಹಿಳೆಯರ ಆರ್ಥಿಕಾಭಿವೃದ್ಧಿಗೆ ಸಾಲ ಒದಗಿಸುವುದೇ ನನ್ನ ಗುರಿಯಾಗಿದ್ದು, ಇದಕ್ಕೆ ಡಿಸಿಸಿ ಬ್ಯಾಂಕ್ ನಿರ್ದೇಶಕರು ಹಾಗೂ ಸ್ಥಳೀಯ ಶಾಸಕರು ಬೆಂಬಲಿಸಬೇಕು ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.

ಪಟ್ಟಣದ ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಚೇರಿಯಲ್ಲಿ ನಡೆದ ಡಿಸಿಸಿ ಬ್ಯಾಂಕ್ ನಿರ್ದೇಶಕರ ಜೊತೆಗಿನ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರು ಮತ್ತು ಮಹಿಳೆಯರ ಆರ್ಥಿಕ ಪ್ರಗತಿಗೆ ಸಹಕಾರ ಕ್ಷೇತ್ರ ಮಹತ್ವದ ಪಾತ್ರ ವಹಿಸಬೇಕಿದೆ. ಈ ನಿಟ್ಟಿನಲ್ಲಿ ಡಿಸಿಸಿ ಬ್ಯಾಂಕ್ ವತಿಯಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಉದ್ದೇಶಿಸಲಾಗಿದ್ದು, ಬ್ಯಾಂಕ್ ನಿರ್ದೇಶಕರು ಹಾಗೂ ಸ್ಥಳೀಯ ಶಾಸಕರು ಸಂಪೂರ್ಣ ಸಹಕಾರ ನೀಡಬೇಕು ಎಂದರು.

ತಾನು ಎರಡು ತಿಂಗಳ ಹಿಂದಷ್ಟೇ ಡಿಸಿಸಿ ಬ್ಯಾಂಕ್ ಅಧ್ಯಕ್ಷನಾಗಿ ಆಯ್ಕೆಯಾಗಿದ್ದು, ಅಧಿಕಾರ ವಹಿಸಿಕೊಂಡ ನಂತರ ಬ್ಯಾಂಕಿನ ಕಾರ್ಯಚಟುವಟಿಕೆಗಳು ಹಾಗೂ ಪ್ರಗತಿಯ ಕುರಿತು ಪರಿಶೀಲನೆ ನಡೆಸಿದ್ದೇನೆ. ವಿಶೇಷವಾಗಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಗ್ರಾಮೀಣ ಭಾಗದ ರೈತರಿಗೆ ಸಕಾಲದಲ್ಲಿ ಸಾಲ ಸೌಲಭ್ಯ ದೊರೆಯಬೇಕು. ಕೃಷಿ ಚಟುವಟಿಕೆಗಳಿಗೆ ಹಣಕಾಸಿನ ನೆರವು ಸಿಗುವುದರಿಂದ ರೈತರು ಕೃಷಿಯನ್ನು ಮುಂದುವರಿಸಲು ಹಾಗೂ ಆರ್ಥಿಕ ಸಂಕಷ್ಟಗಳನ್ನು ಎದುರಿಸಲು ಸಹಕಾರಿಯಾಗಲಿದೆ ಎಂದರು.

ರೈತ ಸಂಘದ ಜಿಲ್ಲಾಧ್ಯಕ್ಷ ಎಚ್.ಪಿ.ರಾಮನಾಥ್ ಮಾತನಾಡಿ, ರೈತರಿಗೆ ಸಾಲ ನೀಡಲು ಹೆಚ್ಚು ಹಣ ನೀಡುವಂತೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಕೊತ್ತೂರು ಮಂಜುನಾಥ್ ರವರಿಗೆ ಮನವಿ ಮಾಡಿದ್ದೇವೆ. ಜೊತೆಗೆ ಈಗಾಗಲೇ ಬರಗಾಲದ ಹಿನ್ನೆಲೆ ರೈತರು ಪಡೆದ ಸಾಲದ ಮರುಪಾವತಿಗೆ ಗಡುವು ನೀಡಬೇಕು. ಈ ಸಂಬಂಧ ಸದನದಲ್ಲಿ ಮಾತನಾಡಬೇಕು. ತಾಲೂಕಿನ ಡಿಸಿಸಿ ಬ್ಯಾಂಕ್ ಗೆ ಕೇವಲ ₹15 ಕೋಟಿ ಮಾತ್ರ ಸಾಲ ನೀಡಲಾಗಿದೆ. ಇದನ್ನು ಹೆಚ್ಚು ಮಾಡಬೇಕು. ಸುಮಾರು ₹30 ಕೋಟಿ ಹಣ ನೀಡಬೇಕು ಎಂದರು.

ಡಿಸಿಸಿ ಬ್ಯಾಂಕ್ ಗುಡಿಬಂಡೆ ನಿರ್ದೇಶಕ ಎಚ್.ಮಂಜುನಾಥರೆಡ್ಡಿ ಸೇರಿ ರೈತ ಸಂಘದ ಮುಖಂಡರು ಹಾಜರಿದ್ದರು.

-------

17ಜಿಯುಡಿ1:

ಗುಡಿಬಂಡೆ ಪಟ್ಟಣದ ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಚೇರಿಗೆ ಭೇಟಿ ನೀಡಿದ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೊತ್ತೂರು ಮಂಜುನಾಥ್ ಸುದ್ದಿಗಾರರೊಂದಿಗೆ ಮಾತನಾಡಿದರು.