ಆದಿಚುಂಚನಗಿರಿಗೆ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಒಡೆಯರ್ ಭೇಟಿ

| Published : Mar 18 2024, 01:52 AM IST

ಆದಿಚುಂಚನಗಿರಿಗೆ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಒಡೆಯರ್ ಭೇಟಿ
Share this Article
  • FB
  • TW
  • Linkdin
  • Email

ಸಾರಾಂಶ

ಬಿಜೆಪಿಯಿಂದ ಮೈಸೂರು-ಕೊಡಗು ಕ್ಷೇತ್ರದ ಅಭ್ಯರ್ಥಿ ಎಂದು ತಮ್ಮನ್ನು ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕೊಡಗು ಮತ್ತು ಮೈಸೂರಿನಲ್ಲಿ ಆಯೋಜಿಸಿದ್ದ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ಇಂದು ಶ್ರೀಕಾಲಭೈರವೇಶ್ವರ ಸ್ವಾಮಿ ಮತ್ತು ನಿರ್ಮಲಾನಂದನಾಥ ಸ್ವಾಮೀಜಿ ಅವರ ದರ್ಶನ ಪಡೆದು ಎಲ್ಲವೂ ಯಶಸ್ವಿಯಾಗಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದೇನೆ.

ಕನ್ನಡಪ್ರಭ ವಾರ್ತೆ ನಾಗಮಂಗಲತಾಲೂಕಿನ ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಒಡೆಯರ್ ಭಾನುವಾರ ಭೇಟಿ ನೀಡಿ ಕ್ಷೇತ್ರಾಧಿದೇವತೆಗಳಿಗೆ ಪೂಜೆ ಸಲ್ಲಿಸಿದ ಬಳಿಕ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಶ್ರೀಗಳೊಂದಿಗೆ ಕೆಲ ಕಾಲ ಚರ್ಚಿಸಿ ಆಶೀರ್ವಾದ ಪಡೆದುಕೊಂಡರು.

ಕ್ಷೇತ್ರಕ್ಕೆ ಆಗಮಿಸಿದ ರಾಜವಂಶಸ್ಥ ಯದುವೀರ್‌ ಅವರಿಗೆ ಮಠದಿಂದ ಮಂಗಳವಾದ್ಯ ಮತ್ತು ಪೂರ್ಣಕುಂಭ ಸ್ವಾಗತ ಕೋರಿ ಬರಮಾಡಿ ಕೊಳ್ಳಲಾಯಿತು. ಈ ವೇಳೆ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಶ್ರೀಗಳು ಕ್ಷೇತ್ರಪಾಲಕ ಶ್ರೀ ಕಾಲಭೈರವೇಶ್ವರಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜಾ ಕೈಂಕರ್ಯ ನೆರವೇರಿಸಿದರು.

ದೇವರದರ್ಶನದ ಬಳಿಕ ಭೈರವೈಕ್ಯ ಡಾ.ಬಾಲಗಂಗಾಧರನಾಥ ಶ್ರೀಗಳ ಮಹಾಗದ್ದುಗೆ ನಮಸ್ಕರಿಸಿ ಆಶೀರ್ವಾದ ಪಡೆದರು. ನಂತರ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಶ್ರೀಗಳೊಂದಿಗೆ ಕೆಲ ಕಾಲ ಮಾತುಕತೆ ನಡೆಸಿದ ಯದುವೀರ್ ಶ್ರೀಗಳ ಆಶೀರ್ವಾದ ಪಡೆದುಕೊಂಡರು. ಈ ವೇಳೆ ಶ್ರೀಮಠದ ಸಂಪ್ರದಾಯದಂತೆ ಶಾಲುಹೊದಿಸಿ, ಹಾರ ಹಾಕಿ ಹಣ್ಣಿನ ಬುಟ್ಟಿ ಮತ್ತು ನೆನಪಿನ ಕಾಣಿಕೆ ನೀಡಿ ಶ್ರೀಗಳು ಗೌರವಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಯದವೀರ್, ಬಿಜೆಪಿಯಿಂದ ಮೈಸೂರು-ಕೊಡಗು ಕ್ಷೇತ್ರದ ಅಭ್ಯರ್ಥಿ ಎಂದು ತಮ್ಮನ್ನು ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕೊಡಗು ಮತ್ತು ಮೈಸೂರಿನಲ್ಲಿ ಆಯೋಜಿಸಿದ್ದ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ಇಂದು ಶ್ರೀಕಾಲಭೈರವೇಶ್ವರಸ್ವಾಮಿ ಮತ್ತು ನಿರ್ಮಲಾನಂದನಾಥ ಸ್ವಾಮೀಜಿ ಅವರ ದರ್ಶನ ಪಡೆದು ಎಲ್ಲವೂ ಯಶಸ್ವಿಯಾಗಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದೇನೆ ಎಂದರು.

ಮೈಸೂರು ಮತ್ತುಕೊಡಗು ಕ್ಷೇತ್ರವು ಉತ್ತಮ ಪರಿಸರದಿಂದ ಕೂಡಿರುವ ಕ್ಷೇತ್ರವಾಗಿದೆ. ಈ ಕ್ಷೇತ್ರಗಳು ಪ್ರವಾಸೋದ್ಯಮದಲ್ಲಿ ಒಂದನ್ನೊಂದು ಅವಲಂಬಿಸಿವೆ. ಇವುಗಳನ್ನು ಸರಿಯಾದ ರೀತಿಯಲ್ಲಿ ಅಭಿವೃದ್ಧಿ ಮಾಡಿದರೆ ಆರ್ಥಿಕ ಪರಿಸ್ಥಿತಿಯನ್ನು ಉತ್ತಮಗೊಳಿಸಲು ಸಾಧ್ಯವಿದೆ ಎಂದರು.

ಈ ಬಾರಿ ನಮಗೆ ಟಿಕೆಟ್ ಸಿಕ್ಕಿರುವುದರಿಂದ ಮೈಸೂರು ಮತ್ತು ಕೊಡಗಿನ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮುಂದಿನ ದಿನಗಳಲ್ಲಿ ಕ್ಷೇತ್ರದಾದ್ಯಂತ ಭೇಟಿ ನೀಡುತ್ತೇನೆ. ಜೊತೆಗೆ ಹಾಲಿ ಸಂಸದ ಪ್ರತಾಪ್‌ಸಿಂಹ ಅವರೂ ಕೂಡ ಬೆಂಬಲ ನೀಡುವ ಭರವಸೆ ನೀಡಿ ಮಾತನಾಡಿದ್ದಾರೆ. ಅವರ ಸಲಹೆ ಸಹಕಾರವನ್ನೂ ಸಹ ಪಡೆದುಕೊಳ್ಳುತ್ತೇನೆ ಎಂದರು.

ಈ ವೇಳೆ ಆದಿಚುಂಚನಗಿರಿ ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ, ಮೈಸೂರು ಶಾಖಾ ಮಠದ ಕಾರ್ಯದರ್ಶಿ ಸೋಮೇಶ್ವರನಾಥ ಸ್ವಾಮೀಜಿ ಸೇರಿದಂತೆ ಹಲವರಿದ್ದರು.