ಮೈಸೂರು ಸೈಟ್‌ ಅಕ್ರಮ: ಮುಡಾ ಕಚೇರಿಗೆ ಬಿಜೆಪಿ ಮುತ್ತಿಗೆ ಯತ್ನ

| Published : Jul 05 2024, 12:53 AM IST / Updated: Jul 05 2024, 12:54 AM IST

ಸಾರಾಂಶ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿನ ಹಗರಣ ಖಂಡಿಸಿ ಬಿಜೆಪಿ ಕಾರ್ಯಕರ್ತರು ಮೈಸೂರಿನಲ್ಲಿ ಪ್ರತಿಭಟಿಸಿದರು.

ಕನ್ನಡಪ್ರಭ ವಾರ್ತೆ ಮೈಸೂರು

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಅವ್ಯವಹಾರ ಖಂಡಿಸಿ ಬಿಜೆಪಿ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು. ಎಂಡಿಎ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದಾಗ ಪೊಲೀಸರು ನಡು ರಸ್ತೆಯಲ್ಲಿಯೇ ತಡೆದು ವಶಕ್ಕೆ ಪಡೆದರು.

ಎಂಡಿಎನಲ್ಲಿ ನಡೆದಿರುವ 50:50 ನಿವೇಶನ ಹಂಚಿಕೆ ಹಗರಣದಲ್ಲಿ ಶಾಮೀಲಾದ ರಾಜಕೀಯ ನಾಯಕರು ಮತ್ತು ಅಧಿಕಾರಿಗಳ ಮೇಲೆ ಕೂಡಲೇ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಮತ್ತು ಯುವ ಮೋರ್ಚಾ ಕಾರ್ಯಕರ್ತರು ನಡೆಸಿದ ಹೋರಾಟ ತೀವ್ರರೂಪ ಪಡೆಯಿತು.

ಬಿಜೆಪಿ ಕಾರ್ಯಕರ್ತರು ಪೊಲೀಸರ ಮಧ್ಯೆ ವಾಗ್ವಾದ ನಡೆದು ರಸ್ತೆಯಲ್ಲಿಯೇ ಕುಳಿತು ಕೆಲಕಾಲ ಪ್ರತಿಭಟಿಸಿದರು. ಕಡೆಗೆ ಎಲ್ಲರನ್ನೂ ಪೊಲೀಸರು ವಶಕ್ಕೆ ಪಡೆದರು.

ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ ಪ್ರತಿಭಟನಾಕಾರರು ಡಿಸಿಎಂ ಡಿ.ಕೆ.ಶಿವಕುಮಾರ್‌, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ವಿರುದ್ಧವೂ ಧಿಕ್ಕಾರ ಕೂಗಿದರು.

ಈ ವೇಳೆ ಮಾಜಿ ಮೇಯರ್‌ ಶಿವಕುಮಾರ್‌ ಮಾತನಾಡಿ, ಎಂಡಿಎ ಅವ್ಯವಹಾರವನ್ನು ತನಿಖೆಗೆ ಒಳಪಡಿಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.