ಆಧುನಿಕತೆ ಹಾಗೂ ಪಾಶ್ಚಾತ್ಯ ಸಂಸ್ಕೃತಿಯ ಪ್ರಭಾವದಿಂದ ಭಾರತೀಯ ಮೂಲ ಸಂಸ್ಕೃತಿ, ಆಚಾರ-ವಿಚಾರಗಳು ಮತ್ತು ಜೀವನಮೌಲ್ಯಗಳು ಯುವಜನರಿಂದ ದೂರವಾಗುತ್ತಿರುವ ಇಂದಿನ ಸಂದರ್ಭದಲ್ಲಿ, ಪೌರಾಣಿಕ ನಾಟಕಗಳ ಮೂಲಕ ನಮ್ಮ ಸಾಂಸ್ಕೃತಿಕ ಪರಂಪರೆಯನ್ನು ಪರಿಚಯಿಸುವ ಉದ್ದೇಶದಿಂದ ಪೌರಾಣಿಕ ನಾಟಕೋತ್ಸವ ಆಯೋಜಿಸಲಾಗಿದೆ ಎಂದು ಸಂಘದ ಗೌರವಾಧ್ಯಕ್ಷ ಮಧುಸೂದನ್ ಬೆಕ್ಕ ಹೇಳಿದರು.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ಆಧುನಿಕತೆ ಹಾಗೂ ಪಾಶ್ಚಾತ್ಯ ಸಂಸ್ಕೃತಿಯ ಪ್ರಭಾವದಿಂದ ಭಾರತೀಯ ಮೂಲ ಸಂಸ್ಕೃತಿ, ಆಚಾರ-ವಿಚಾರಗಳು ಮತ್ತು ಜೀವನಮೌಲ್ಯಗಳು ಯುವಜನರಿಂದ ದೂರವಾಗುತ್ತಿರುವ ಇಂದಿನ ಸಂದರ್ಭದಲ್ಲಿ, ಪೌರಾಣಿಕ ನಾಟಕಗಳ ಮೂಲಕ ನಮ್ಮ ಸಾಂಸ್ಕೃತಿಕ ಪರಂಪರೆಯನ್ನು ಪರಿಚಯಿಸುವ ಉದ್ದೇಶದಿಂದ ಪೌರಾಣಿಕ ನಾಟಕೋತ್ಸವ ಆಯೋಜಿಸಲಾಗಿದೆ ಎಂದು ಸಂಘದ ಗೌರವಾಧ್ಯಕ್ಷ ಮಧುಸೂದನ್ ಬೆಕ್ಕ ಹೇಳಿದರು.

ಪಟ್ಟಣದ ಪತ್ರಕರ್ತರ ಭವನದಲ್ಲಿ ಗುರುವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರಸ್ವತಿ ಕಲಾ ಸಂಘದ ವತಿಯಿಂದ ಚನ್ನರಾಯಪಟ್ಟಣದ ಧನಲಕ್ಷ್ಮೀ ಚಿತ್ರಮಂದಿರದಲ್ಲಿ ಅ.೨೪ರಿಂದ ನಾಟಕೋತ್ಸವಕ್ಕೆ ಚಾಲನೆ ದೊರೆಯಲಿದ್ದು, ನ.೧ರವರೆಗೆ ಒಂಬತ್ತು ದಿನಗಳು ಪೌರಾಣಿಕ ನಾಟಕಗಳು ಪ್ರದರ್ಶನಗೊಳ್ಳಲಿವೆ. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸುವ ಪ್ರತಿಭಾವಂತ ಹಾಗೂ ಅನುಭವಿ ರಂಗಕಲಾವಿದರು, ಮಹಿಳಾ ಕಲಾವಿದರು ನಾಟಕೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ರಾಮಾಯಣ, ಮಹಾಭಾರತ ಸೇರಿದಂತೆ ಭಾರತೀಯ ಪುರಾಣಗಳಲ್ಲಿ ಅಡಕವಾಗಿರುವ ಮೌಲ್ಯಗಳನ್ನು ನಾಟಕಗಳ ಮೂಲಕ ಜನರಿಗೆ ತಲುಪಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಪೌರಾಣಿಕ ಕಥೆಗಳು ಕೇವಲ ಮನರಂಜನೆಗೆ ಸೀಮಿತವಾಗದೆ, ಬದುಕಿನ ಆದರ್ಶಗಳನ್ನು ಕಲಿಸುವ ಶಕ್ತಿಯನ್ನು ಹೊಂದಿವೆ. ಇಂತಹ ಕಥನಗಳನ್ನು ರಂಗಭೂಮಿಯ ಮೂಲಕ ಪ್ರಸ್ತುತಪಡಿಸುವುದರಿಂದ ಯುವಜನರು ನಮ್ಮ ಇತಿಹಾಸ, ಪರಂಪರೆ ಹಾಗೂ ಸಂಸ್ಕೃತಿಯ ಮಹತ್ವವನ್ನು ಅರಿಯಲು ಸಾಧ್ಯವಾಗುತ್ತದೆ ಎಂದರು.ಸಾಂಸ್ಕೃತಿಕ ಕಾರ್ಯದರ್ಶಿ ರಘು ಕದಂಬ ಮಾತನಾಡಿ, ಹಿಂದಿನ ಕಾಲದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಪೌರಾಣಿಕ ನಾಟಕಗಳು ಜನಜೀವನದ ಅವಿಭಾಜ್ಯ ಅಂಗವಾಗಿದ್ದವು. ಹಬ್ಬಹರಿದಿನಗಳು, ಜಾತ್ರೆ ಹಾಗೂ ವಿಶೇಷ ಸಂದರ್ಭಗಳಲ್ಲಿ ರಾತ್ರಿಯಿಡೀ ನಡೆಯುತ್ತಿದ್ದ ನಾಟಕಗಳನ್ನು ಜನರು ಆಸಕ್ತಿಯಿಂದ ವೀಕ್ಷಿಸುತ್ತಿದ್ದರು. ಪೌರಾಣಿಕ ಪಾತ್ರಗಳ ಮೂಲಕ ಕಲಾವಿದರು ನೀಡುತ್ತಿದ್ದ ಸಂದೇಶಗಳು ಜನರ ಮನಸ್ಸಿನಲ್ಲಿ ಆಳವಾಗಿ ನೆಲೆಯೂರುತ್ತಿದ್ದವು. ಆದರೆ ಬದಲಾದ ಜೀವನಶೈಲಿ, ಆಧುನಿಕ ಮನರಂಜನಾ ಮಾಧ್ಯಮಗಳ ಪ್ರಭಾವದಿಂದ ಇಂತಹ ರಂಗಕಲೆಯ ಮೇಲಿನ ಆಸಕ್ತಿ ಕಡಿಮೆಯಾಗುತ್ತಿರುವುದು ಆತಂಕದ ಸಂಗತಿಯಾಗಿದೆ ಎಂದು ಅಭಿಪ್ರಾಯಪಟ್ಟರು.

ಸಂಘದ ತಾಲೂಕು ಅಧ್ಯಕ್ಷ ದ್ವಾರಕೀಶ್ ಬದ್ದಿಕೆರೆ ಮಾತನಾಡಿ, ಪೌರಾಣಿಕ ನಾಟಕಗಳ ಪರಂಪರೆಯನ್ನು ಉಳಿಸಿ ಬೆಳೆಸುವುದರ ಜತೆಗೆ ರಂಗಭೂಮಿಯನ್ನೇ ಬದುಕಾಗಿಸಿಕೊಂಡಿರುವ ಕಲಾವಿದರಿಗೆ ವೇದಿಕೆ ಕಲ್ಪಿಸುವುದು ಇಂತಹ ಉತ್ಸವಗಳ ಉದ್ದೇಶವಾಗಿದೆ. ಒಂಬತ್ತು ದಿನಗಳ ಕಾಲ ನಡೆಯುವ ನಾಟಕೋತ್ಸವದಲ್ಲಿ ವಿವಿಧ ಭಾಗಗಳ ಕಲಾವಿದರು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲಿದ್ದು, ಚನ್ನರಾಯಪಟ್ಟಣ ತಾಲೂಕು ಮಾತ್ರವಲ್ಲದೆ ಜಿಲ್ಲೆಯ ವಿವಿಧೆಡೆಯಿಂದಲೂ ಕಲಾಭಿಮಾನಿಗಳು ಆಗಮಿಸುವ ನಿರೀಕ್ಷೆಯಿದೆ. ಸಾರ್ವಜನಿಕರು ಕುಟುಂಬ ಸಮೇತರಾಗಿ ಆಗಮಿಸಿ ನಾಟಕಗಳನ್ನು ವೀಕ್ಷಿಸುವ ಮೂಲಕ ಕಲಾವಿದರನ್ನು ಪ್ರೋತ್ಸಾಹಿಸಬೇಕು. ಸಂಘಟಕರು ಹಮ್ಮಿಕೊಂಡಿರುವ ಈ ಸಾಂಸ್ಕೃತಿಕ ಪ್ರಯತ್ನಕ್ಕೆ ಎಲ್ಲರೂ ಕೈಜೋಡಿಸಿ ನಾಟಕೋತ್ಸವವನ್ನು ಯಶಸ್ವಿಗೊಳಿಸಬೇಕು. ಹೀಗಾಗಿ ಕಲಾಭಿಮಾನಿಗಳು ನಾಟಕೋತ್ಸವಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದು ಮನವಿ ಮಾಡಿದರು.ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ದೀಪು ಸೋಸಲಗೆರೆ, ಕಾರ್ಯದರ್ಶಿ ಮಂಜುನಾಥ್, ಸಹ ಕಾರ್ಯದರ್ಶಿ ದಿನೇಶ್, ಬನವಾಸೆ ಕರಿಯಪ್ಪ ಹಾಗೂ ಸುವರ್ಣ ಕರ್ನಾಟಕ ಸಂಘದ ಅಧ್ಯಕ್ಷ ಪ್ರದೀಪ್ ಬಡಕನಹಳ್ಳಿ ಉಪಸ್ಥಿತರಿದ್ದರು.