ನಾಳೆ ಬಿಜೆಪಿ, ಜೆಡಿಎಸ್‌ ನಿಂದ ಬೃಹತ್ ಸಮಾವೇಶ

| Published : Aug 09 2024, 12:32 AM IST

ಸಾರಾಂಶ

ಮೈಸೂರಿನ ಪ್ರತಿಷ್ಠಿತ ಬಡಾವಣೆಯಲ್ಲಿ ಸಿದ್ದರಾಮಯ್ಯ ನಿವೇಶನ ಪಡೆದಿದ್ದಾರೆ. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹಿಸಿದ್ದೇವೆ.

ಕನ್ನಡಪ್ರಭ ವಾರ್ತೆ ಮೈಸೂರು

ಎಂಡಿಎ ಹಗರಣ ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ರೂವಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಹಾಗೂ ಪ್ರಕರಣದ ತನಿಖೆಯನ್ನು ಸಿಬಿಐ ವಹಿಸುವಂತೆ ಆಗ್ರಹಿಸಿ ನಡೆಸುತ್ತಿರುವ ಹೋರಾಟ ಶನಿವಾರ ಮೈಸೂರು ತಲುಪಲಿದ್ದು, ಇಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್‌ ಹೇಳಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಿಂದ ಮೈಸೂರಿಗೆ ಹಮ್ಮಿಕೊಂಡಿದ್ದ ಪಾದಯಾತ್ರೆ ನಾಳಿದ್ದು ಶನಿವಾರ ಅಂತ್ಯಗೊಳ್ಳಲಿದೆ. ಇದರ ಅಂಗವಾಗಿ ಮೈಸೂರಿನಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಎಂಡಿಎ ನಲ್ಲಿ ಅಕ್ರಮವಾಗಿ 14 ಸೈಟ್ ಪಡೆದಿರುವುದರ ವಿರುದ್ದ ಹೋರಾಟ ನಡೆಸಲಾಗುತ್ತಿದೆ ಎಂದರು.

ಮೈಸೂರಿನ ಪ್ರತಿಷ್ಠಿತ ಬಡಾವಣೆಯಲ್ಲಿ ಸಿದ್ದರಾಮಯ್ಯ ನಿವೇಶನ ಪಡೆದಿದ್ದಾರೆ. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹಿಸಿದ್ದೇವೆ. ರಾಜ್ಯ ಸರ್ಕಾರ ಸೂಚಿಸುವ ತನಿಖೆಯಿಂದ ನಿಷ್ಪಕ್ಷಪಾತ ತನಿಖೆ ಸಾಧ್ಯವಿಲ್ಲ. ಹಾಗಾಗಿ ನಿಷ್ಪಕ್ಷಪಾತ ತನಿಖೆಗಾಗಿ ಸಿಬಿಐಗೆ ವಹಿಸುವಂತೆ ಆಗ್ರಹಿಸಿದರೂ ಒಪ್ಪುತ್ತಿಲ್ಲ. ವಿಧಾನ ಮಂಡಲ ಅಧಿವೇಶನದಲ್ಲೂ ಚರ್ಚೆಗೆ ಅವಕಾಶ ನೀಡಲಿಲ್ಲ ಎಂದು ಅವರು ಹೇಳಿದರು.

ಎಂಡಿಎ ಜತೆಗೆ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿಯೂ ಅಕ್ರಮ ನಡೆದಿದೆ. ಇದನ್ನು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಒಪ್ಪಿಕೊಂಡಿದ್ದಾರೆ. ಬ್ರಹ್ಮಾಂಡ ಭ್ರಷ್ಟಾಚಾರ ಮಾಡಿರುವ ಸಿದ್ದರಾಮಯ್ಯ ಏನು ತಪ್ಪು ಮಾಡಿಲ್ಲ ಎಂದು ಹೇಳಿಕೊಳ್ಳಲು ಶುಕ್ರವಾರ ಜನಾಂದೋಲನ ಸಮಾವೇಶ ಮಾಡಲು ಮುಂದಾಗಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಡೆಸುತ್ತಿರುವ ಪಾದಯಾತ್ರೆ ಅಂತಿಮ ಹಂತದಲ್ಲಿದೆ. ಪಾದಯಾತ್ರೆಗೆ ಜೆಡಿಎಸ್ ಕೂಡ ಸಾಥ್ ನೀಡಿದೆ ಎಂದು ಅವರು ತಿಳಿಸಿದರು.

ಶನಿವಾರ ಮೈಸೂರಿನಲ್ಲಿ ನಡೆಯುವ ಸಮಾವೇಶದಲ್ಲಿ ಒಂದೂವರೆ ಲಕ್ಷ ಜನರು ಪಾಲ್ಗೊಳ್ಳುವರು. ಮಜಾವಾದಿ ಸಿದ್ದರಾಮಯ್ಯ ಎರಡು ಪ್ರಕರಣಗಳನ್ನು ಸಿಬಿಐಗೆ ವಹಿಸಲು ಒಪ್ಪುತ್ತಿಲ್ಲ. ಈ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡಲು ಪಾದಯಾತ್ರೆ ನಡೆಸುತ್ತಿದ್ದೇವೆ ಎಂದು ಅವರು ಹೇಳಿದರು.

ಶಾಸಕ ಟಿ.ಎಸ್. ಶ್ರೀವತ್ಸ, ನಗರ ಬಿಜೆಪಿ ಅಧ್ಯಕ್ಷ ಎಲ್. ನಾಗೇಂದ್ರ, ಜಿಲ್ಲಾಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ, ರಾಜ್ಯ ಕಾರ್ಯದರ್ಶಿ ತಮ್ಮೇಶ್ ಗೌಡ ಮೊದಲಾದವರು ಇದ್ದರು.