ಜಾತಿ ಭೇದವಿಲ್ಲದ ನಾಡಹಬ್ಬ ವಿಶ್ವಕ್ಕೆ ಮಾದರಿ: ಹೆಬ್ಬಂಡಿ ವೀರಪ್ಪ

| Published : Sep 23 2025, 01:03 AM IST

ಜಾತಿ ಭೇದವಿಲ್ಲದ ನಾಡಹಬ್ಬ ವಿಶ್ವಕ್ಕೆ ಮಾದರಿ: ಹೆಬ್ಬಂಡಿ ವೀರಪ್ಪ
Share this Article
  • FB
  • TW
  • Linkdin
  • Email

ಸಾರಾಂಶ

ನಾಡಹಬ್ಬ ದಸರಾ ಆಚರಣೆ ಜಾತಿ, ಮತ, ಧರ್ಮ, ಜನಾಂಗ, ಲಿಂಗಭೇದಗಳಿಲ್ಲದೆ ಸರ್ವರನ್ನು ಒಳ್ಳಗೊಳ್ಳುವ ಮೂಲಕ ಜಗತ್ತಿಗೆ ಮಾದರಿಯಾಗಿದೆ ಎಂದು ಹಿರಿಯ ಸಮಾಜ ಸೇವಕ ಹೆಬ್ಬಂಡಿ ವೀರಪ್ಪ ಶಿವರುದ್ರಪ್ಪ ಹೇಳಿದರು.

ಕನ್ನಡಪ್ರಭ ವಾರ್ತೆ ಭದ್ರಾವತಿ

ನಾಡಹಬ್ಬ ದಸರಾ ಆಚರಣೆ ಜಾತಿ, ಮತ, ಧರ್ಮ, ಜನಾಂಗ, ಲಿಂಗಭೇದಗಳಿಲ್ಲದೆ ಸರ್ವರನ್ನು ಒಳ್ಳಗೊಳ್ಳುವ ಮೂಲಕ ಜಗತ್ತಿಗೆ ಮಾದರಿಯಾಗಿದೆ ಎಂದು ಹಿರಿಯ ಸಮಾಜ ಸೇವಕ ಹೆಬ್ಬಂಡಿ ವೀರಪ್ಪ ಶಿವರುದ್ರಪ್ಪ ಹೇಳಿದರು.

ತಾಲೂಕಿನ ನಗರಸಭೆ ಹಮ್ಮಿಕೊಂಡ ದಸರಾ ಆಚರಣೆಗೆ ಸೋಮವಾರ ಚಾಲನೆ ನೀಡಿ ಮಾತನಾಡಿದರು. 11 ದಿನಗಳ ದಸರಾ ಮಹೋತ್ಸವ ಆಚರಣೆಗೆ ಒಂದು ಮಹತ್ವವಿದೆ. ರಾಜಮಹಾರಾಜರ ಕಾಲದಿಂದಲೂ ಅಂದರೆ 15ನೇ ಶತಮಾನದಿಂದಲೂ ವೈಭವಯುತವಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಈ ಮಹೋತ್ಸವ ಹಲವು ವಿಶಿಷ್ಟತೆಗಳಿಂದ ಕೂಡಿದ್ದು, ನಾಡಿನ ಸರ್ವರನ್ನು ಭಾವನಾತ್ಮಕವಾಗಿ ಒಂದುಗೂಡಿಸಿದೆ ಎಂದರು.

ವೇದಿಕೆ ಕಾರ್ಯಕ್ರಮಕ್ಕೂ ಮೊದಲು ಬೆಳಿಗ್ಗೆ 11.30ರ ಸಮಯದಲ್ಲಿ ನಗರದ ರಂಗಪ್ಪ ವೃತ್ತಕ್ಕೆ ಆಗಮಿಸಿದ ಶಿವರುದ್ರಪ್ಪರವರನ್ನು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್, ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾರಾಜ್‌ಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್, ಪೌರಾಯುಕ್ತ ಎನ್.ಕೆ ಹೇಮಂತ್, ನಾಡಹಬ್ಬ ದಸರಾ ಆಚರಣೆ ವಿವಿಧ ಸಮಿತಿಗಳ ಅಧ್ಯಕ್ಷರು, ಸದಸ್ಯರು, ಪೌರ ಸೇವಾ ನೌಕರರ ಸೇವಾ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ನಗರಸಭೆ ಅಧಿಕಾರಿಗಳು, ಸಿಬ್ಬಂದಿಗಳು, ಪೌರ ಕಾರ್ಮಿಕರು, ವಿವಿಧ ಮಹಿಳಾ ಸ್ವಸಹಾಯ ಸಂಘಗಳ ಮಹಿಳೆಯರಿಗೆ ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ ಸ್ವಾಗತಿಸಲಾಯಿತು.

ಇದೇ ವೇಳೆ ರಂಗಪ್ಪ ವೃತ್ತದಲ್ಲಿ ಅಳವಡಿಸಲಾದ ಶ್ರೀ ಚಾಮುಂಡೇಶ್ವರಿ ದೇವಿಯ ಬೃಹತ್ ಫ್ಲೆಕ್ಸ್‌ಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ನಂತರ ಶಿವರುದ್ರಪ್ಪರವರನ್ನು ಸಾರೋಟ ಮೂಲಕ ನಗರಸಭೆ ಆವರಣದವರೆಗೂ ಮೆರವಣಿಗೆಯಲ್ಲಿ ಕರೆ ತರಲಾಯಿತು. ನಂತರ ಶ್ರೀ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಜಿಲ್ಲಾ ಧಾರ್ಮಿಕ ಪರಿಷತ್ ನಿರ್ದೇಶಕ ರಮಾಕಾಂತ್ ಮತ್ತು ಕಂಚಿನಬಾಗಿಲು ಶ್ರೀ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕ ಪವನ್ ಕುಮಾರ್ ಉಡುಪ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು. ಶ್ರೇಯಸ್ ರಾವ್ ಭರತನಾಟ್ಯ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜ್‌ಕುಮಾರ್, ಹಿರಿಯ ಸದಸ್ಯ ಬಿ.ಟಿ ನಾಗರಾಜ್, ಹಿರಿಯ ಸದಸ್ಯ ಬಿ.ಕೆ ಮೋಹನ್, ನಗರಸಭೆ ಉಪಾಧ್ಯಕ್ಷ ಎಂ. ಮಣಿ ಎಎನ್‌ಎಸ್, ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್, ಪೌರಾಯುಕ್ತ ಎನ್.ಕೆ ಹೇಮಂತ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ನಗರ ಆಶ್ರಯ ಸಮಿತಿ ಅಧ್ಯಕ್ಷ ಬಿ.ಎಸ್ ಗೋಪಾಲ್, ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಬಿ.ಎಸ್ ಗಣೇಶ್ ಸೇರಿದಂತೆ ನಾಡಹಬ್ಬ ದಸರಾ ಆಚರಣೆ ವಿವಿಧ ಸಮಿತಿಗಳ ಅಧ್ಯಕ್ಷರು, ಸದಸ್ಯರು ಹಾಜರಿದ್ದರು.

ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆ ವಹಿಸಿದ್ದರು. ಸದಸ್ಯ ಚನ್ನಪ್ಪ ಸ್ವಾಗತಿಸಿ, ಸುನಂದ ಸಂಗಡಿಗರು ಪ್ರಾರ್ಥಿಸಿದರು. ಸಿದ್ದಾರ್ಥ ಅಂಧರ ಕೇಂದ್ರದ ವಿಕಲಚೇತನರು ನಾಡಗೀತೆ ಹಾಡಿದರು. ನರಸಿಂಹಮೂರ್ತಿ ನಿರೂಪಿಸಿದರು.