ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ ನಾಳೆ: ಜಿಲ್ಲಾ ಕಸಾಪ ಅಧ್ಯಕ್ಷ ಡಿ.ಮಂಜುನಾಥ

| Published : Jun 26 2024, 12:39 AM IST

ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ ನಾಳೆ: ಜಿಲ್ಲಾ ಕಸಾಪ ಅಧ್ಯಕ್ಷ ಡಿ.ಮಂಜುನಾಥ
Share this Article
  • FB
  • TW
  • Linkdin
  • Email

ಸಾರಾಂಶ

ಎಸ್ಸೆಸ್ಸೆಲ್ಸಿಯಲ್ಲಿ 610ಕ್ಕೂ ಹಾಗೂ ಪಿಯುಸಿಯಲ್ಲಿ 580ಕ್ಕೂ ಹೆಚ್ಚು ಅಂಕ ಗಳಿಸಿದ ಮತ್ತು ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ರ್‍ಯಾಂಕ್ ಪಡೆದು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಮುದಾಯದ ಮಕ್ಕಳನ್ನು ಸನ್ಮಾನಿಸಲಾಗುವುದು

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಸಮುದಾಯದ ಸಂಘಟನೆಗಳು, ಶ್ರೀಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಸಹಯೋಗದಲ್ಲಿ ಜೂ.27ರಂದು ಬೆಳಗ್ಗೆ 11ಕ್ಕೆ ಶ್ರೀ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಆಚರಿಸಲಾಗುವುದು ಎಂದು ಒಕ್ಕಲಿಗರ ಸಮುದಾಯದ ಮುಖಂಡ ಹಾಗೂ ಜಿಲ್ಲಾ ಕಸಾಪ ಅಧ್ಯಕ್ಷ ಡಿ.ಮಂಜುನಾಥ ಹೇಳಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲಾ ಒಕ್ಕಲಿಗರ ಸಮುದಾಯದ ಎಲ್ಲಾ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಕೆಂಪೇಗೌಡರ ಜಯಂತಿ ಆಚರಿಸಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಭೈರವೈಕ್ಯ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ ಹಾಗೂ ಮಠದ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ಆಶೀರ್ವಾದದೊಂದಿಗೆ ಮಠದ ಪ್ರಧಾನ ಕಾರ್ಯದರ್ಶಿ ಶ್ರೀಪ್ರಸನ್ನನಾಥ ಮಹಾಸ್ವಾಮೀಜಿ ದಿವ್ಯಸಾನ್ನಿಧ್ಯದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮಕ್ಕೂ ಮೊದಲು ಬೆಳಗ್ಗೆ 10ಕ್ಕೆ ಎಂಆರ್‌ಎಸ್ ಸರ್ಕಲ್‍ನಿಂದ ಶ್ರೀ ಆದಿಚುಂಚನಗಿರಿ ಸಮುದಾಯ ಭವನದವರೆಗೆ ಬೈಕ್ ಮತ್ತು ಕಾರ್ ರ್‍ಯಾಲಿ ಆಯೋಜಿಸಲಾಗಿದ್ದು, ಶಿವಮೊಗ್ಗ ನಗರ ಹಾಗೂ ಸುತ್ತಮುತ್ತಲಿನ ಎಲ್ಲಾ ಊರುಗಳಿಂದ ಸಮಾಜ ಬಾಂಧವರು ಭಾಗವಹಿಸುವರು ಎಂದು ವಿವರಿಸಿದರು.

ಇದೇ ವೇಳೆ ಎಸ್ಸೆಸ್ಸೆಲ್ಸಿಯಲ್ಲಿ 610ಕ್ಕೂ ಹಾಗೂ ಪಿಯುಸಿಯಲ್ಲಿ 580ಕ್ಕೂ ಹೆಚ್ಚು ಅಂಕ ಗಳಿಸಿದ ಮತ್ತು ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ರ್‍ಯಾಂಕ್ ಪಡೆದು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಮುದಾಯದ ಮಕ್ಕಳನ್ನು ಸನ್ಮಾನಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧುಬಂಗಾರಪ್ಪ, ಸಚಿವ ಎಸ್. ಶಿವರಾಜ್ ತಂಗಡಗಿ, ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಬಿ.ಕೆ.ಸಂಗಮೇಶ್, ಬೇಳೂರು ಗೋಪಾಲಕೃಷ್ಣ, ಆರಗ ಜ್ಞಾನೇಂದ್ರ, ಶಾರದ ಪೂರ್ಯಾನಾಯ್ಕ್, ಬಿ.ವೈ.ವಿಜಯೇಂದ್ರ, ಎಸ್.ಎಲ್.ಬೋಜೇಗೌಡ, ವಿಧಾನ ಪರಿಷತ್‌ ಸದಸ್ಯರಾದ ಭಾರತಿ ಶೆಟ್ಟಿ, ಡಿ.ಎಸ್.ಅರುಣ್, ಡಾ.ಧನಂಜಯ ಸರ್ಜಿ, ಬಲ್ಕೀಶ್‍ಬಾನು ಭಾಗವಹಿಸುವರು. ನೂತನವಾಗಿ ಆಯ್ಕೆಯಾದ ಶಾಸಕರು ಹಾಗೂ ಸಂಸದರಿಗೆ, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರನ್ನು ಸನ್ಮಾನಿಸಲಾಗುವುದು ಎಂದು ಮಾಹಿತಿ ನೀಡಿದರು.

ಒಕ್ಕಲಿಗರ ಸಮುದಾಯದ ಜಿಲ್ಲಾಧ್ಯಕ್ಷ ಎಚ್.ಬಿ.ಆದಿಮೂರ್ತಿ ಮಾತನಾಡಿ, ಕೆಂಪೇಗೌಡ ಜಯಂತಿ ಅಂಗವಾಗಿ ನಾಳೆ ನಗರ ವ್ಯಾಪ್ತಿಯ ಪದವಿ ವಿದ್ಯಾರ್ಥಿಗಳಿಗೆ ನಾಡಪ್ರಭು ಕೆಂಪೇಗೌಡರ ಕುರಿತು ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಶಾಂತಸುರೇಂದ್ರ, ಭಾರತಿ ರಾಮಕೃಷ್ಣ, ರಘುರಾಜ್, ಪ್ರತೀಮಾ ಡಾಕಪ್ಪ ಗೌಡ, ನಾಗರಾಜ್, ಶಂಕರಣ್ಣ, ಸುಮಿತ್ರ ಕೇಶವಮೂರ್ತಿ, ರಮೇಶ್, ರಾಜಣ್ಣ ಇದ್ದರು.