ಸಾರಾಂಶ
ವಿಜಯನಗರ ಜಿಲ್ಲೆಯ ಹಂಪಿಯಲ್ಲಿ ನಡೆದ 32ನೇ ನುಡಿಹಬ್ಬ ಘಟಿಕೋತ್ಸವದಲ್ಲಿ ಡಾ.ಬಸವಲಿಂಗ ಪಟ್ಟದ್ದೇವರಿಗೆ ನಾಡೋಜ ಗೌರವ ಪದವಿ ನೀಡಿ ಗೌರವಿಸಲಾಯಿತು. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಪದವಿ ಪ್ರದಾನ ಮಾಡಿದರು.
ಕನ್ನಡಪ್ರಭ ವಾರ್ತೆ ಭಾಲ್ಕಿ
ಬಸವಕಲ್ಯಾಣ ಅನುಭವ ಮಂಟಪದ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರನ್ನು ಪ್ರತಿಷ್ಠಿತ ನಾಡೋಜ ಗೌರವ ಪದವಿ ನೀಡಿ ಗೌರವಿಸಲಾಗಿದೆ.ವಿಜಯನಗರ ಜಿಲ್ಲೆಯ ಹಂಪಿಯ ನವರಂಗ ಬಯಲು ರಂಗಮಂದಿರದಲ್ಲಿ ಕನ್ನಡ ವಿಶ್ವವಿದ್ಯಾಲಯ ವತಿಯಿಂದ ಆಯೋಜಿಸಿದ್ದ 32ನೇ ನುಡಿಹಬ್ಬ ಘಟಿಕೋತ್ಸವ ಸಮಾರಂಭದಲ್ಲಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ಪ್ರತಿಷ್ಠಿತ ನಾಡೋಜ ಗೌರವ ಪದವಿಯನ್ನು ಡಾ.ಬಸವಲಿಂಗ ಪಟ್ಟದ್ದೇವರಿಗೆ ಪ್ರದಾನ ಮಾಡಲಾಯಿತು.
ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಶ್ರೀಗಳಿಗೆ ಶಾಲು ಹೊದಿಸಿ, ಸರಸ್ವತಿ ವಿಗ್ರಹ, ಪ್ರಮಾಣ ಪತ್ರ, ಪ್ರಶಸ್ತಿ ಫಲಕ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಆಂಧ್ರಪ್ರದೇಶ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಸ್.ಎ.ಕೋರಿ, ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಾ.ವಿ.ಪರಮಶಿವಮೂರ್ತಿ ಸೇರಿದಂತೆ ಹಲವರು ಇದ್ದರು.ನಂತರ ಹೊಸಪೇಟೆಯ ಕೊಟ್ಟೂರುಸ್ವಾಮಿ ಮಠದಲ್ಲಿ ಪೂಜ್ಯರನ್ನು ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಡಿ.ಕೆ.ಸಿದ್ರಾಮ ಶಾಲು ಹೊದಿಸಿ ಹಾರಹಾಕಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು, ಶಶಿಧರ ಕೋಸಂಬೆ, ಭಾರತೀಯ ಬಸವ ಬಳಗದ ಜಿಲ್ಲಾಧ್ಯಕ್ಷ ಸಂಜೀವಕುಮಾರ ಜುಮ್ಮಾ, ಮೋಹನ ರೆಡ್ಡಿ, ರಾಜಕುಮಾರ ಬಿರಾದಾರ, ಜಾಲೇಂದ್ರ ಭೌರಾ ಸೇರಿದಂತೆ ಹಲವರು ಇದ್ದರು.