ನಾಲತವಾಡ ಸಮುದಾಯ ಆಸ್ಪತ್ರೆಯಲ್ಲಿ ದಿನನಿತ್ಯ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ನಾಲತವಾಡ ಸಮುದಾಯ ಆಸ್ಪತ್ರೆಯ ಹೊರಗುತ್ತಿಗೆ ಮಹಿಳಾ ಸಿಬ್ಬಂದಿಯೊಬ್ಬರು ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.

ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ

ನಾಲತವಾಡ ಸಮುದಾಯ ಆಸ್ಪತ್ರೆಯಲ್ಲಿ ದಿನನಿತ್ಯ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ನಾಲತವಾಡ ಸಮುದಾಯ ಆಸ್ಪತ್ರೆಯ ಹೊರಗುತ್ತಿಗೆ ಮಹಿಳಾ ಸಿಬ್ಬಂದಿಯೊಬ್ಬರು ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.

ಘಟನೆ ತಿಳಿದ ಕುಟುಂಬಸ್ಥರು, ಸ್ಥಳೀಯರು ಹಾಗೂ ಆಸ್ಪತ್ರೆ ಸಿಬ್ಬಂದಿ ಆಸ್ಪತ್ರೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ಮೇಲಧಿಕಾರಿಗಳು ಬರುವವರೆಗೆ ಸೇವೆ ಸ್ಥಗಿತಗೊಳಿಸುವುದಾಗಿ ಪಟ್ಟು ಹಿಡಿದರು. ಸಿಬ್ಬಂದಿ, ಆಸ್ಪತ್ರೆ ಸಿಬ್ಬಂದಿ ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ಆರೋಪಿಸಿ ಯುವಕ ವೀರೇಶ ಒಂದು ವರ್ಷದಿಂದ ಪ್ರತಿದಿನ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕುತ್ತಿದ್ದ. ಸಿಬ್ಬಂದಿಯನ್ನು ಕೆಲಸದಿಂದ ವಜಾ ಮಾಡಿಸುತ್ತೇನೆ ಎಂದು ಬೆದರಿಕೆ ಹಾಕುತ್ತಿದ್ದ. ಈ ಕುರಿತು ಆಸ್ಪತ್ರೆಯ ಸಿಬ್ಬಂದಿ ಒಟ್ಟಾಗಿ ಮೇಲಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮವಾಗಿಲ್ಲ ಎಂದು ದೂರಿದರು. ಇದರಿಂದ ಮನನೊಂದ ಸಿಬ್ಬಂದಿಯೊಬ್ಬರು ಮಾತ್ರೆ ಸೇವಿಸಿ ಅಸ್ವಸ್ಥರಾಗಿದ್ದು, ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದರು.ದಿನನಿತ್ಯದ ಕಿರುಕುಳದಿಂದ ಮಾನಸಿಕ ನೆಮ್ಮದಿ ಕಳೆದುಕೊಂಡಿದ್ದೇವೆ. ಹಲವು ವರ್ಷಗಳಿಂದ ಇಲ್ಲಿ ಸೇವೆ ಸಲ್ಲಿಸುತ್ತಿದ್ದೇವೆ. ಸಾರ್ವಜನಿಕರಿಂದ ಯಾವುದೇ ತೊಂದರೆ ಆಗಿಲ್ಲ. ಆದರೆ ಇತ್ತೀಚೆಗೆ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಬಂದು ನಮಗೆ ತೊಂದರೆ ನೀಡುತ್ತಿದ್ದಾರೆ. ಅಧಿಕಾರಿಗಳಿಗೆ ಮೌಖಿಕ ಹಾಗೂ ಲಿಖಿತ ದೂರು ನೀಡಿದರೂ ಪ್ರಯೋಜನವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸಿಬ್ಬಂದಿಗೆ ಸೂಕ್ತ ರಕ್ಷಣೆ ನೀಡಬೇಕು ಹಾಗೂ ಘಟನೆಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ವಿಷಯ ತಿಳಿದು ಜಿಲ್ಲಾ ನಗರಾಭಿವೃದ್ಧಿ ಕೋಶಾಧಿಕಾರಿ ಬಿ.ಎ. ಸೌದಾಗರ, ತಹಶೀಲ್ದಾರ್‌ ಕೀರ್ತಿ ಚಾಲಕ, ಪಿಎಸ್ಐ ಸಂಜಯ ತಿಪ್ಪಾರೆಡ್ಡಿ, ತಾಲೂಕು ವೈದ್ಯಾಧಿಕಾರಿ ಸತೀಶ ತಿವಾರಿ ಹಾಗೂ ಆಸ್ಪತ್ರೆಯ ಆಡಳಿತ ಅಧಿಕಾರಿ ಡಾ. ಪರಶುರಾಮ ವಡ್ಡರ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು.

ಈ ವೇಳೆ ಸಿಬ್ಬಂದಿ ಕಿರುಕುಳದ ಬಗ್ಗೆ ಅಧಿಕಾರಿಗಳಿಗೆ ವಿವರಿಸಿ, ಕೂಡಲೇ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು. ಸಂತ್ರಸ್ತ ಸಿಬ್ಬಂದಿಯ ಕುಟುಂಬಸ್ಥರು ಕೂಡ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

ತಹಶೀಲ್ದಾರ ಕೀರ್ತಿ ಚಾಲಕ ಸಿಬ್ಬಂದಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಕ್ರಮ ವಹಿಸಬೇಕು ಎಂದು ತಾಲೂಕು ವೈದ್ಯಾಧಿಕಾರಿಗೆ ಸೂಚಿಸಿದರು. ಪಿಎಸ್ಐ ಸಂಜಯ ತಿಪ್ಪಾರೆಡ್ಡಿ ಸ್ಪತ್ರೆ ವ್ಯಾಪ್ತಿಯಲ್ಲಿ ಪೊಲೀಸ್ ಸಿಬ್ಬಂದಿ ಭೇಟಿಯನ್ನು ಹೆಚ್ಚಿಸಲಾಗುವುದು ಎಂದು ಭರವಸೆ ನೀಡಿದರು. ಸಂತ್ರಸ್ತ ಸಿಬ್ಬಂದಿಯ ದೂರಿನ ಆಧಾರದ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು.

ವೀರೇಶ ಎಂಬ ಯುವಕ ಪ್ರತಿದಿನ ಆಸ್ಪತ್ರೆಗೆ ಬಂದು ವಿಡಿಯೋ ಮಾಡುತ್ತಿದ್ದ, ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದ. ನನ್ನ ಹಿಂದೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಿದ್ದಾರೆ ಎಂದು ಹೇಳಿಕೊಂಡು ಸಿಬ್ಬಂದಿಗೆ ಬೆದರಿಕೆ ಹಾಕುತ್ತಿದ್ದ. ಮಹಿಳೆಗೆ ನ್ಯಾಯ ಒದಗಿಸಬೇಕು.

-ಬಸವರಾಜ ಹುಡೇದ ಆತ್ಮಹತ್ಯೆಗೆ ಯತ್ನಿಸಿದ ಕುಟುಂಬಸ್ಥ