ಚುನಾವಣಾ ಗೆಲುವಿನ ಅಂತರ ಹೆಚ್ಚಿಸಿ ಸದೃಢ ಪಕ್ಷ ಸಂಘಟನೆಗೆ ಶ್ರಮಿಸಲು ನಳಿನ್ ಕರೆ

| Published : Apr 12 2024, 01:03 AM IST

ಚುನಾವಣಾ ಗೆಲುವಿನ ಅಂತರ ಹೆಚ್ಚಿಸಿ ಸದೃಢ ಪಕ್ಷ ಸಂಘಟನೆಗೆ ಶ್ರಮಿಸಲು ನಳಿನ್ ಕರೆ
Share this Article
  • FB
  • TW
  • Linkdin
  • Email

ಸಾರಾಂಶ

ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಲೋಕಸಭಾ ಚುನಾವಣಾ ಸಭೆ ನಡೆಯಿತು. ಸಭೆಯಲ್ಲಿ ನಳಿನ್‌ ಕುಮಾರ್‌ ಕಟೀಲ್‌ ಮಾರ್ಗದರ್ಶನ ನೀಡಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಉಡುಪಿ-ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತವಾಗಿದ್ದು, ಹೆಚ್ಚಿನ ಮತಗಳ ಅಂತರವನ್ನು ದಾಖಲಿಸುವ ಮೂಲಕ ಸದೃಢ ಪಕ್ಷ ಸಂಘಟನೆಗೆ ಶ್ರಮಿಸಬೇಕು ಎಂದು ಬಿಜೆಪಿ ನಿಕಟಪೂರ್ವ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಾರ್ಯಕರ್ತರಿಗೆ ಕರೆ ನೀಡಿದರು.

ಅವರು ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಲೋಕಸಭಾ ಚುನಾವಣಾ ಸಭೆಯಲ್ಲಿ ಮಾರ್ಗದರ್ಶನ ನೀಡಿದರು.

ಲೋಕಸಭಾ ಚುನಾವಣೆಯ ಬಳಿಕ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳ ವಿಧಾನ ಪರಿಷತ್ ಚುನಾವಣೆ, ತಾ.ಪಂ. ಮತ್ತು ಜಿ.ಪಂ. ಚುನಾವಣೆಗಳು ನಡೆಯಲಿದ್ದು, ಪ್ರಸಕ್ತ ಲೋಕಸಭಾ ಚುನಾವಣೆಯ ಉತ್ತಮ ಫಲಿತಾಂಶ ಮುಂದಿನ ಚುನಾವಣೆಗಳಿಗೆ ಸ್ಫೂರ್ತಿ ತುಂಬಲಿದೆ. ಈ ನಿಟ್ಟಿನಲ್ಲಿ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಬದ್ಧತೆಯಿಂದ ತೊಡಗಿಸಿಕೊಂಡು ಲೋಕಸಭಾ ಚುನಾವಣೆಯನ್ನು ಎಚ್ಚರಿಕೆಯಿಂದ ಎದುರಿಸಬೇಕಾಗಿದೆ ಎಂದು ಕರೆ ನೀಡಿದರು.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಸಂಚಾಲಕ ಕುತ್ಯಾರು ನವೀನ್ ಶೆಟ್ಟಿ ಮಾತನಾಡಿ, ಏ.11 ಮತ್ತು 12ರಂದು ಬೂತ್ ಕಾರ್ಯ ಅಭಿಯಾನದ ಅಂಗವಾಗಿ ಎಲ್ಲ ಬೂತ್‌ಗಳಲ್ಲಿ ಪೂರ್ವಸಿದ್ಧತಾ ಸಭೆಗಳು ನಡೆಯಲಿವೆ. ಏ.15ರಿಂದ 17ರ ವರೆಗೆ ಮೊದಲ ಸುತ್ತಿನ ಚುನಾವಣಾ ಪ್ರಚಾರ ಕಾರ್ಯ ನಡೆಯಲಿದ್ದು, ಏ.20ರಿಂದ 22ರ ವರೆಗೆ ಚುನಾವಣಾ ಪ್ರಚಾರದ ಮಹಾ ಅಭಿಯಾನ ನಡೆಯಲಿದೆ. ಕಾರ್ಯಕರ್ತರು ಎಲ್ಲಾ ಅಭಿಯಾನಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಪಕ್ಷದ ಅಭ್ಯರ್ಥಿಯ ಪ್ರಚಂಡ ಗೆಲುವಿಗೆ ಬದ್ಧತೆಯಿಂದ ಕೈಜೋಡಿಸಬೇಕು ಎಂದರು.

ಈ ಸಂದರ್ಭ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಮಾಜಿ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಜಿಲ್ಲಾ ಪ್ರ. ಕಾರ್ಯದರ್ಶಿಗಳಾದ ಕೆ.ರಾಘವೇಂದ್ರ ಕಿಣಿ, ದಿನಕರ ಶೆಟ್ಟಿ ಹೆರ್ಗ, ಮಹಿಳಾ ಮೋರ್ಚಾ ರಾಜ್ಯ ಪ್ರ. ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಚುನಾವಣಾ ಪ್ರಭಾರಿಗಳಾದ ನಯನಾ ಗಣೇಶ್, ರಾಜೇಶ್ ಕಾವೇರಿ, ಜಿಲ್ಲಾ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಿರಣ್ ಕುಮಾರ್ ಬೈಲೂರು ಸಹಿತ ಪಕ್ಷದ ಪ್ರಮುಖರು, ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾ ಹಾಗೂ ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಚುನಾವಣಾ ನಿರ್ವಹಣಾ ಸಮಿತಿಯ ಸದಸ್ಯರು, ಉಡುಪಿ ನಗರಸಭಾ ಸದಸ್ಯರು ಉಪಸ್ಥಿತರಿದ್ದರು.