ವಿಮಾನ ನಿಲ್ದಾಣಕ್ಕೆ ಕನ್ನಡ ಮಹನಿಯರ ಹೆಸರಿಡಿ

| Published : Nov 01 2025, 02:15 AM IST

ವಿಮಾನ ನಿಲ್ದಾಣಕ್ಕೆ ಕನ್ನಡ ಮಹನಿಯರ ಹೆಸರಿಡಿ
Share this Article
  • FB
  • TW
  • Linkdin
  • Email

ಸಾರಾಂಶ

ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರ ರಾಣಿ ಚೆನ್ನಮ್ಮ, ಹುಬ್ಬಳ್ಳಿ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ, ವಿಜಯಪುರಕ್ಕೆ ಜಗಜ್ಯೋತಿ ಬಸವೇಶ್ವರರು ಹಾಗೂ ಶಿವಮೊಗ್ಗಕ್ಕೆ ಕುವೆಂಪು ಹೆಸರಿಡಬೇಕೆಂದು ಹಲವು ವರ್ಷಗಳಿಂದ ಕನ್ನಡಪರ ಸಂಘಟನೆಗಳು, ರಾಜಕೀಯ ಮುಖಂಡರು ಪಕ್ಷಾತೀತವಾಗಿ ಹೋರಾಟ ಮಾಡುತ್ತಾ ಬಂದರೂ ಕಾರ್ಯರೂಪಕ್ಕೆ ಬಂದಿಲ್ಲ.

ಹುಬ್ಬಳ್ಳಿ:

ನಾಲ್ಕು ವಿಮಾನ ನಿಲ್ದಾಣಗಳಿಗೆ ಕನ್ನಡದ ಮಹನೀಯರ ಹೆಸರು ನಾಮಕರಣ ಮಾಡಬೇಕೆಂದು ಒತ್ತಾಯಿಸಿ ಶುಕ್ರವಾರ ಸಂಗೊಳ್ಳಿ ರಾಯಣ್ಣ ಹಿತರಕ್ಷಣಾ ಸಮಿತಿಯಿಂದ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಮನವಿ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ಮನಸೂರುಮಠದ ಬಸವ ದೇವರು, ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರ ರಾಣಿ ಚೆನ್ನಮ್ಮ, ಹುಬ್ಬಳ್ಳಿ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ, ವಿಜಯಪುರಕ್ಕೆ ಜಗಜ್ಯೋತಿ ಬಸವೇಶ್ವರರು ಹಾಗೂ ಶಿವಮೊಗ್ಗಕ್ಕೆ ಕುವೆಂಪು ಹೆಸರಿಡಬೇಕೆಂದು ಹಲವು ವರ್ಷಗಳಿಂದ ಕನ್ನಡಪರ ಸಂಘಟನೆಗಳು, ರಾಜಕೀಯ ಮುಖಂಡರು ಪಕ್ಷಾತೀತವಾಗಿ ಹೋರಾಟ ಮಾಡುತ್ತಾ ಬಂದರೂ ಕಾರ್ಯರೂಪಕ್ಕೆ ಬಂದಿಲ್ಲ ಎಂದ ಅವರು, ಇದೀಗ ಪ್ರಹ್ಲಾದ ಜೋಶಿ ಅವರಿಗೆ ಮನವಿ ಸಲ್ಲಿಸಿದ್ದು ಶೀಘ್ರದಲ್ಲಿಯೇ ನಮ್ಮ ಬೇಡಿಕೆ ಈಡೇರಿಸುವ ಭರವಸೆ ಇದೆ ಎಂದರು.

ಈ ಕುರಿತಂತೆ ಕಿತ್ತೂರು ಉತ್ಸವದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಗಮನಕ್ಕೆ ತಂದಾಗ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅವರು ಒಪ್ಪಿಗೆ ನೀಡಿದ ಬಳಿಕ ಹೆಸರಿಡಲಾಗುವುದು ಎಂದು ಹೇಳಿದ್ದರು. ಹೀಗಾಗಿ ಪ್ರಹ್ಲಾದ ಜೋಶಿ ಅವರು ಸಂಬಂಧಿಸಿದ ಸಚಿವರ ಗಮನಕ್ಕೆ ತಂದು ಡಿ.27ರೊಳಗೆ ನಮ್ಮ ಬೇಡಿಕೆ ಈಡೇರಿಸಬೇಕು. ಇಲ್ಲದಿದ್ದರೆ ಹುಬ್ಬಳ್ಳಿಯಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.

ಸಂಗೊಳ್ಳಿ ರಾಯಣ್ಣ ಹಿತ ರಕ್ಷಣಾ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಾನಂದ ಮುತ್ತಣ್ಣವರ ಮಾತನಾಡಿ, 15 ವರ್ಷಗಳಿಂದ ನಮ್ಮ ಬೇಡಿಕೆ ಈಡೇರಿಸುವಂತೆ ಮನವಿ ಸಲ್ಲಿಸಿದರೂ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ತಾಲೂರ, ಅಡಿವೆಪ್ಪ ಶಿವಳ್ಳಿ ಸೇರಿದಂತೆ ಮೊದಲಾದವರು ಪಾಲ್ಗೊಂಡಿದ್ದರು.