ವಿರಾಜಪೇಟೆ ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವಿರಾಜಪೇಟೆ ಹಾಗೂ ನಾಪೋಕ್ಲು ಬ್ಲಾಕ್ ವ್ಯಾಪ್ತಿಯ ವಲಯ ಮತ್ತು ಬೂತ್ ಅಧ್ಯಕ್ಷರ ಸಭೆ

ನಾಪೋಕ್ಲು: ಸರ್ಕಾರದಿಂದ ಬಿಡುಗಡೆಯಾಗುವ ಅನುದಾನಗಳು ಸಮರ್ಪಕವಾಗಿ ಬಳಕೆಯಾಗುವಂತೆ ನೋಡಿಕೊಳ್ಳುವುದರ ಜೊತೆಗೆ, ಮುಂಬರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಪಕ್ಷ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ವಿರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ತಿಳಿಸಿದರು.

ವಿರಾಜಪೇಟೆ ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವಿರಾಜಪೇಟೆ ಹಾಗೂ ನಾಪೋಕ್ಲು ಬ್ಲಾಕ್ ವ್ಯಾಪ್ತಿಯ ವಲಯ ಮತ್ತು ಬೂತ್ ಅಧ್ಯಕ್ಷರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಜನರ ಅಗತ್ಯಗಳಿಗೆ ಅನುಗುಣವಾಗಿ ಅಭಿವೃದ್ಧಿ ಕಾಮಗಾರಿಗಳು ಅನುಷ್ಠಾನಗೊಳ್ಳುವಲ್ಲಿ ಪಕ್ಷದ ಮುಖಂಡರು ಮುತುವರ್ಜಿ ವಹಿಸಬೇಕು. ಪಕ್ಷದಲ್ಲಿ ಜವಾಬ್ದಾರಿಯುತ ಹುದ್ದೆಗಳನ್ನು ಹೊಂದಿರುವ ಪ್ರತಿಯೊಬ್ಬರೂ ತಮ್ಮ ಹೊಣೆಯನ್ನು ಸಮರ್ಥವಾಗಿ ನಿರ್ವಹಿಸುವ ಮೂಲಕ ಸರ್ಕಾರದ ಜನಪರ ಯೋಜನೆಗಳು ಹಾಗೂ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಶ್ರಮಿಸಬೇಕು. ಜನಸಾಮಾನ್ಯರಿಗೆ ಅನುಕೂಲವಾಗುವ ಆಡಳಿತದ ಅನುಷ್ಠಾನದಲ್ಲಿ ಕಾರ್ಯಕರ್ತರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಶಾಸಕರು ಕರೆ ನೀಡಿದರು.

ಕಾವೇರಿ ಜಲಾನಯನ ಪ್ರದೇಶ ಅಭಿವೃದ್ಧಿ ಮಂಡಳಿ ನಿರ್ದೇಶಕ ಸೂರಜ್ ಹೊಸೂರು, ಕಾವೇರಿ ಜಲಾನಯನ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರದ ನಿರ್ದೇಶಕ ಅರವಿಂದ್ ಕುಟ್ಟಪ್ಪ, ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ದೇಶಕ ಕೆ ಎ ಇಸ್ಮಾಯಿಲ್ ನಾಪೋಕ್ಲು , ಮಡಿಕೇರಿ ತಾಲೂಕು ಬಗರ್ ಹುಕುಂ ಸಮಿತಿ ಅಧ್ಯಕ್ಷ ನೆರವಂಡ ಉಮೇಶ್, ಡಿಸಿಸಿ ಉಪಾಧ್ಯಕ್ಷ ಅಬ್ದುಲ್ ರೆಹಮಾನ್ ನಾಪೋಕ್ಲು , ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೌಕತ್ ಆಲಿ, ವಿರಾಜಪೇಟೆ ನಗರ ಕಾಂಗ್ರೆಸ್ ಅಧ್ಯಕ್ಷ ಮಾಳೆಟೀರ ಬೋಪಣ್ಣ, ವಿರಾಜಪೇಟೆ ಬ್ಲಾಕ್ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಮತ್ತಿತರರು ಭಾಗವಹಿಸಿದ್ದರು.