ಸಮೀಪದ ಕಕ್ಕಬ್ಬೆಯ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ವಾರ್ಷಿಕ ಬಿರ್ಚ್ಯಾರ್‌ ಕಲಾಡ್ಚ ಹಬ್ಬವು ಮಂಗಳವಾರ ಸಾಂಪ್ರದಾಯಿಕವಾಗಿ ಸಂಪನ್ನಗೊಂಡಿತು.

ನಾಪೋಕ್ಲು : ಸಮೀಪದ ಕಕ್ಕಬ್ಬೆಯ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ವಾರ್ಷಿಕ ಬಿರ್ಚ್ಯಾರ್‌ ಕಲಾಡ್ಚ ಹಬ್ಬವು ಮಂಗಳವಾರ ಸಾಂಪ್ರದಾಯಿಕವಾಗಿ ಸಂಪನ್ನಗೊಂಡಿತು.

ಇಗ್ಗುತ್ತಪ್ಪ ಸನ್ನಿಧಿಯಲ್ಲಿ ದೇವತಕ್ಕರಾದ ಪರದಂಡ ಕುಟುಂಬಸ್ಥರು ಮೊದಲು ಎತ್ತುಪೋರಾಟದೊಂದಿಗೆ ದೇವಾಲಯಕ್ಕೆ ತಲುಪಿ ಎತ್ತುಪೋರಾಟವನ್ನು ಒಪ್ಪಿಸಿದರು. ನಂತರ ಹಾಲು ಬಲಿವಾಡು, ಭಕ್ತಾದಿಗಳಿಂದ ತುಲಾಭಾರ ಸೇವೆ ಸೇರಿದಂತೆ ಹರಕೆ ಹಾಗೂ ಇನ್ನಿತರ ಪೂಜೆಗಳನ್ನು ನೆರವೇರಿಸಲಾಯಿತು. ಬಳಿಕ ಮಹಾಪೂಜೆ ಜರುಗಿ ಭಕ್ತಾದಿಗಳಿಗೆ ತೀರ್ಥ, ಪ್ರಸಾದ ಮತ್ತು ಅನ್ನಸಂತರ್ಪಣೆ ನೆರವೇರಿತು.

ಬಳಿಕ ದೇವರ ನಡೆಯಲ್ಲಿ ನಿಂತು ತಕ್ಕ ಮುಖ್ಯಸ್ಥರು ನಾಡಿನ ಶ್ರೇಯೋಭಿವೃದ್ಧಿಗೆ ಪ್ರಾರ್ಥನೆ ಸಲ್ಲಿಸಿದರು. ನಂತರ ದೇವರ ಪ್ರದರ್ಶನ ಬಲಿ ಜರುಗಿ, ಎತ್ತು ಪೋರಾಟದೊಂದಿಗೆ ತಕ್ಕ ಮುಖ್ಯಸ್ಥರು ಹಾಗೂ ಭಕ್ತಾದಿಗಳು ಇಗ್ಗುತ್ತಪ್ಪ ದೇವರ ಆದಿ ಸ್ಥಳವಾದ ಮಲ್ಮ ಬೆಟ್ಟಕ್ಕೆ ತೆರಳಿದರು.

ಇದೇ ಸಂದರ್ಭ ಪೇರೂರು ಹಾಗೂ ನೆಲಜಿ ಶ್ರೀ ಇಗ್ಗುತ್ತಪ್ಪ ದೇವಾಲಯದ ತಕ್ಕ ಮುಖ್ಯಸ್ಥರು ಎತ್ತುಪೋರಾಟದೊಂದಿಗೆ ಮಲ್ಮಕ್ಕೆ ಆಗಮಿಸಿದರು.ಅರ್ಚಕರು ಶುದ್ಧಕಲಶ ಪೂಜಾ ಕಾರ್ಯಗಳನ್ನು ನೆರವೇರಿಸಿದ ಬಳಿಕ ಎತ್ತುಪೋರಾಟ ದುಡಿಕೊಟ್ಟ್ ಪಾಟ್ ನಡೆಯಿತು. ಅನಂತರ ಎತ್ತುಪೋರಾಟದ ಅಕ್ಕಿಯನ್ನು ಮೂರು ಭಾಗ ಮಾಡಿ ನೆಲಜಿ, ಪೇರೂರು ಹಾಗೂ ಪಾಡಿ ದೇವಾಲಯದ ತಕ್ಕ ಮುಖ್ಯಸ್ಥರು ಹಂಚಿಕೊಂಡರು. ನಂತರ ದೇವರ ಕಟ್ಟು ಸಡಿಲಿಸಿ ನಾಡಿನ ಸುಭಿಕ್ಷೆಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ನಂತರ ಹಿಂತಿರುಗಿ ಸಂಜೆ ದೇವಾಲಯದಲ್ಲಿ ವಿವಿಧ ವಿಶೇಷ ಪೂಜಾ ಕಾರ್ಯಕ್ರಮಗಳೊಂದಿಗೆ ಕಲಾಡ್ಚ ಹಬ್ಬವು ಸಂಭ್ರಮದಿಂದ ಜರುಗಿತು. ನಾಡಿನ ಮತ್ತು ದೇವಾಲಯದ 13 ತಕ್ಕ ಮುಖ್ಯಸ್ಥರು, ವ್ಯವಸ್ಥಾಪನಾ ಸಮಿತಿ, ಭಕ್ತಜನ ಸಂಘ ಸೇರಿದಂತೆ ಭಕ್ತರು ಪಾಲ್ಗೊಂಡಿದ್ದರು.