ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಹಬ್ಬದ ನರಕ ಚತುರ್ದಶಿಯ ವಿಶೇಷ ಪೂಜಾ ಕಾರ್ಯಕ್ರಮಗಳು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಂಭ್ರಮ ಸಡಗರದಿಂದ ನಡೆದವು.

ಕನ್ನಡಪ್ರಭ ವಾರ್ತೆ ಹನೂರು

ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಹಬ್ಬದ ನರಕ ಚತುರ್ದಶಿಯ ವಿಶೇಷ ಪೂಜಾ ಕಾರ್ಯಕ್ರಮಗಳು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಂಭ್ರಮ ಸಡಗರದಿಂದ ನಡೆದವು.

ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆಯುತ್ತಿರುವ ದೀಪಾವಳಿ ಜಾತ್ರಾ ಮಹೋತ್ಸವದ ಪೂಜಾ ಕಾರ್ಯಕ್ರಮವನ್ನು ಸಾಲೂರು ಬೃಹನ್ ಮಠದ ಡಾ.ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ದಿವ್ಯ ಸಾನ್ನಿಧ್ಯದಲ್ಲಿ ಬೇಡಗಂಪಣ ಸಮುದಾಯದ ಅರ್ಚಕರು ಮಾದೇಶ್ವರನಿಗೆ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಪೂಜೆ ಸಲ್ಲಿಸಿ ನೆರವೇರಿಸಿದರು.

ವಿಶೇಷ ಹೂವಿನ ಅಲಂಕಾರ:

ದೀಪಾವಳಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಮಲೆ ಮಾದೇಶ್ವರ ಬೆಟ್ಟದ ದೇವಾಲಯವನ್ನು ಮೈಸೂರಿನ ದಾನಿಗಳಾದ ದೀಪಕ್ ವಿಶೇಷ ವಿವಿಧ ಬಗೆಯ ಹೂಗಳಿಂದ ಅಲಂಕರಿಸಿದ್ದರು. ದೇವರ ದರ್ಶನಕ್ಕೆ ಬರುವ ಭಕ್ತಾದಿಗಳು ಹೂವಿನ ಅಲಂಕಾರವನ್ನು ಕಣ್ತುಂಬಿಕೊಳ್ಳುವ ಮೂಲಕ ಮಾದಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿದರು.

ಉತ್ಸವ ಮೂರ್ತಿ ಮೆರವಣಿಗೆ

ದೀಪಾವಳಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆದ ಶಿವ-ಪಾರ್ವತಿಯ ಉತ್ಸವ ಮೂರ್ತಿ ಮೆರವಣಿಗೆಯಲ್ಲಿ ಸಾಲೂರು ಬೃಹನ್ ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮಿಗಳು, ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪುರುಷೋತ್ತಮ್ ಹಾಗೂ ಉಪ ಕಾರ್ಯದರ್ಶಿ ಚಂದ್ರಶೇಖರ್ ಸೇರಿದಂತೆ ಸಿಬ್ಬಂದಿ ವರ್ಗದವರು ಮತ್ತು ಅರ್ಚಕರ ತಂಡ ವಿಶೇಷ ಪೂಜೆ ಸಲ್ಲಿಸಿ, ಕೊಂಬು ಕಹಳೆಗಳೊಂದಿಗೆ ಮೆರವಣಿಗೆ ನೆರವೇರಿಸಿದರು.

ಭಕ್ತ ಸಮೂಹ

ದೀಪಾವಳಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಕಳೆದ ಮೂರು ದಿನಗಳಿಂದ ಪ್ರಾರಂಭಗೊಂಡಿರುವ ಜಾತ್ರಾ ಮಹೋತ್ಸವಕ್ಕೆ ರಾಜ್ಯದ ನಾನಾ ಭಾಗಗಳಿಂದ ಹಾಗೂ ವಿವಿಧ ಜಿಲ್ಲೆಗಳಿಂದ ಪಾದಯಾತ್ರೆಯಲ್ಲಿ ಅಪಾರ ಸಂಖ್ಯೆಯ ಭಕ್ತಾದಿಗಳು ಮಾದಪ್ಪನ ದರ್ಶನ ಪಡೆಯಲು ಬರುತ್ತಿದ್ದು, ಮಳೆಯ ನಡುವೆಯೂ ರಾತ್ರಿ ಮಾದೇಶ್ವರನ ದರ್ಶನ ಪಡೆದರು. ಮಲೆ ಮಾದೇಶ್ವರ ಬೆಟ್ಟದಲ್ಲಿ ಎಲ್ಲಿ ನೋಡಿದರೂ ಭಾರಿ ಸಂಖ್ಯೆಯ ಭಕ್ತ ಸಮೂಹವೇ ನೆರೆದಿತ್ತು. ದೇವರ ದರ್ಶನ ಪಡೆಯಲು ಸರತಿ ಸಾಲಿನಲ್ಲಿ ನಿಂತು ಭಕ್ತ ಸಮೂಹ ಉಘೇ ಉಘೇ ಮಾದಪ್ಪ ಎಂದು ಜೈಕಾರ ಘೋಷಣೆಗಳನ್ನು ಕೂಗಿದರು.

ವಿಶೇಷ ವಿದ್ಯುತ್ ದೀಪ ಅಲಂಕಾರ:

ದೀಪಗಳ ಹಬ್ಬ ದೀಪಾವಳಿ ಹಿನ್ನೆಲೆಯಲ್ಲಿ ಮಲೆ ಮಾದೇಶ್ವರ ಬೆಟ್ಟದಲ್ಲಿ ದೇವಾಲಯ ಸೇರಿದಂತೆ ವಿವಿಧ ಭಾಗದಲ್ಲಿ ವಿಶೇಷ ಅಲಂಕಾರ ಮಾಡಿ, ವಿಶೇಷ ಮೆರಗು ನೀಡುವ ಮೂಲಕ ಭಕ್ತರನ್ನು ತನ್ನತ್ತ ಸೆಳೆಯುವಂತೆ ಅಲಂಕಾರ ಮಾಡಲಾಗಿತ್ತು.

ಬಿಗಿ ಪೊಲೀಸ್ ಬಂದೋಬಸ್ತ್:

ದೀಪಾವಳಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ನರಕ ಚತುರ್ದಶಿ ವಿಶೇಷ ಪೂಜೆ ಉತ್ಸವಗಳು ಸಂಭ್ರಮದಿಂದ ನಡೆಯುತ್ತಿದ್ದು, ಇದೇ ವೇಳೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ಪೊಲೀಸ್ ಇಲಾಖೆ ವಿವಿಧ ಆಯಕಟ್ಟಿನ ಸ್ಥಳಗಳಲ್ಲಿ ಪೊಲೀಸರನ್ನು ನೇಮಕ ಮಾಡುವ ಮೂಲಕ ಭಾರಿ ಬಂದೋಬಸ್ತ್ ವ್ಯವಸ್ಥೆಯನ್ನು ಕಲ್ಪಿಸಿತ್ತು.