ಸಾರಾಂಶ
ಕನ್ನಡಪ್ರಭ ವಾರ್ತೆ ಹೊಸಪೇಟೆ
ಶಿಕ್ಷಣ, ಸಮಾನತೆ, ಸಮಾಜ ಸುಧಾರಣೆ ಸಂದೇಶವನ್ನು ವಿಶ್ವಕ್ಕೆ ಸಾರಿದ ಬ್ರಹ್ಮಶ್ರೀ ನಾರಾಯಣ ಗುರು ಅವರು ಅಪ್ರತಿಮ ಸಮಾಜ ಪರಿವರ್ತಕ, ಧಾರ್ಮಿಕ ಚಿಂತಕರಾಗಿದ್ದರು ಎಂದು ಸಹಾಯಕ ಆಯುಕ್ತ ಪಿ. ವಿವೇಕಾನಂದ ಹೇಳಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಭಾನುವಾರ ಏರ್ಪಡಿಸಿದ್ದ ಶ್ರೀನಾರಾಯಣ ಗುರುಗಳ ಜಯಂತಿ ಕಾರ್ಯಕ್ರಮದಲ್ಲಿ ಶ್ರೀನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಬ್ರಹ್ಮಶ್ರೀ ನಾರಾಯಣ ಗುರುಗಳು ಒಂದು ಜಾತಿ, ಧರ್ಮಕ್ಕೆ ಸಿಮೀತರಾದವರಲ್ಲ. ಇಡೀ ಜಗತ್ತಿನ ಮಾನವ ಕುಲದ ಒಳಿತಿಗಾಗಿ ಶ್ರಮಿಸಿದ್ದಾರೆ. ಸಮಾಜದಲ್ಲಿ ಬೇರೂರಿದ್ದ ಅಸ್ಪೃಶ್ಯತೆ ಮತ್ತು ಜಾತಿ ವ್ಯವಸ್ಥೆಯನ್ನು ಹೋಗಲಾಡಿಸಲು ಶ್ರಮಿಸಿದವರು. ಅವರು ಪ್ರತಿಪಾದಿಸಿದ ತತ್ವವೆಂದರೆ ಜಗತ್ತಿನಲ್ಲಿರುವುದು, ಒಂದೇ ಜಾತಿ, ಒಂದೇ ಮತ ಹಾಗೂ ಒಂದೇ ದೇವರು ಎಂಬುದಾಗಿದೆ ಎಂದರು.
ದೇವಾಲಯಗಳಲ್ಲಿ ತುಳಿತಕ್ಕೆ ಒಳಗಾದ ವರ್ಗದವರಿಗೆ ಪ್ರವೇಶ ಸಿಗದಿದ್ದಾಗ ರಕ್ತಕ್ರಾಂತಿ ಮಾಡದೇ ಜನರಿಗೆ ದೇವಾಲಯ ನಿರ್ಮಿಸಿದ್ದಾರೆ. ಹಿಂದುಳಿದ ವರ್ಗದವರನ್ನು ಉದ್ಯೋಗ, ಆರ್ಥಿಕ ಮತ್ತು ಶೈಕ್ಷಣಿಕವಾಗಿ ಮೇಲೆತ್ತುವ ಕಾರ್ಯದಲ್ಲಿ ತೊಡಗಿದ್ದರು. ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿದ ಅವರು ಶಿಕ್ಷಣ ಸಂಸ್ಥೆಗಳನ್ನು ಕಟ್ಟಿದ್ದಾರೆ. ನಾರಾಯಣ ಗುರುಗಳ ತತ್ವ, ಸಿದ್ದಾಂತ ಆದರ್ಶಗಳು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡು ಪಾಲಿಸಬೇಕಿದೆ ಎಂದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ್ ರಂಗಣ್ಣನವರ್ ಮಾತನಾಡಿ, ಒಂದೇ ಜಾತಿ, ಒಂದೇ ಮತ ಹಾಗೂ ಒಂದೇ ದೇವರು ಎಂಬುವುದು ನಾರಾಯಣ ಗುರುಗಳ ತತ್ವವಾಗಿತ್ತು. ಅವರ ತತ್ವದಂತೆ ಎಲ್ಲ ಹಿಂದುಳಿದ ವರ್ಗದವರೂ ಒಂದೇ ಎಂಬ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.
ಆರ್ಯ ಈಡಿಗ ಸಮುದಾಯದ ಜಿಲ್ಲಾಧ್ಯಕ್ಷ ಈ.ಚಂದ್ರಶೇಖರ ಕಮಲಾಪುರ, ಕೇಂದ್ರ ಕಾರ್ಯಕಾರಿಣಿ ಸದಸ್ಯ ಈ.ನಾಗರಾಜ ಮರಿಯಮ್ಮನಹಳ್ಳಿ, ಮಹಿಳಾ ಘಟಕದ ಗೌರವಾಧ್ಯಕ್ಷೆ ಈ.ಅಂಬುಜಾಕ್ಷಿ, ಈ.ಫಕ್ಕಿರಮ್ಮ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಈ.ರಮೇಶ್ ಬ್ಯಾಲಕುಂದಿ, ಮುಖಂಡ ಯರ‍್ರಿಸ್ವಾಮಿ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು, ಕಚೇರಿ ಸಿಬ್ಬಂದಿ ಇತರರಿದ್ದರು.