ಗದಗ ಜಿಲ್ಲಾಡಳಿತ ಭವನದ ಅಡಿಟೋರಿಯಂ ಸಭಾಂಗಣದಲ್ಲಿ ಶುಕ್ರವಾರ ನಡೆದ ಬ್ರಹ್ಮಶ್ರೀ ನಾರಾಯಣಗುರು ಜಯಂತಿಯನ್ನು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ ಉದ್ಘಾಟಿಸಿದರು.
ಗದಗ: ಸಮಾಜದಲ್ಲಿ ಸಮಾನತೆ, ಸಹೋದರತೆ ಹಾಗೂ ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಬ್ರಹ್ಮಶ್ರೀ ನಾರಾಯಣಗುರುಗಳ ಆದರ್ಶಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹೇಳಿದರು.
ನಗರದ ಜಿಲ್ಲಾಡಳಿತ ಭವನದ ಅಡಿಟೋರಿಯಂ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ನಡೆದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ–2026 ಉದ್ಘಾಟಿಸಿ ಅವರು ಮಾತನಾಡಿದರು. ಜಾತಿ, ಧರ್ಮದ ಭೇದವಿಲ್ಲದೆ ಎಲ್ಲರೂ ಸಮಾನರು ಎಂಬ ಸಂದೇಶವನ್ನು ಅವರು ಸಮಾಜಕ್ಕೆ ನೀಡಿದರು ಎಂದು ಹೇಳಿದರು.ಬ್ರಿಟಿಷರ ಆಡಳಿತದ ಸಂದರ್ಭದಲ್ಲಿ ಕೇರಳ ಹಾಗೂ ದಕ್ಷಿಣ ಕನ್ನಡ ಭಾಗಗಳಲ್ಲಿ ತೀವ್ರವಾಗಿದ್ದ ಅಸ್ಪೃಶ್ಯತೆ, ಮೇಲು-ಕೀಳು ಹಾಗೂ ಜಾತಿ ತಾರತಮ್ಯದ ವಿರುದ್ಧ ನಾರಾಯಣಗುರುಗಳು ಹೋರಾಟ ನಡೆಸಿದರು. ಶೂದ್ರ ಸಮುದಾಯದಲ್ಲಿ ಜನಿಸಿದರೂ ಉನ್ನತ ಶಿಕ್ಷಣ ಪಡೆದು, ಸಮಾಜದ ಕಟ್ಟುಪಾಡುಗಳನ್ನು ಧಿಕ್ಕರಿಸಿ ಕೆಳವರ್ಗದ ಜನರಿಗೂ ಧಾರ್ಮಿಕ ಹಕ್ಕು ದೊರೆಯುವಂತೆ ದೇವಾಲಯಗಳನ್ನು ನಿರ್ಮಿಸುವ ಮೂಲಕ ಸಮಾನತೆಯ ಸಂದೇಶ ಸಾರಿದರು ಎಂದರು.
ಉಪನ್ಯಾಸಕ ಡಾ. ದತ್ತಪ್ರಸನ್ನ ಪಾಟೀಲ ಮಾತನಾಡಿ, ಅಸ್ಪೃಶ್ಯತೆ ಹಾಗೂ ಸಾಮಾಜಿಕ ತಾರತಮ್ಯದ ವಿರುದ್ಧ ಅಹಿಂಸಾತ್ಮಕ ಹೋರಾಟ ನಡೆಸಿದ ನಾರಾಯಣಗುರುಗಳು ಸಾಮಾಜಿಕ ಮತ್ತು ಶೈಕ್ಷಣಿಕ ಕ್ರಾಂತಿಗೆ ಮುನ್ನುಡಿ ಬರೆದರು. ಒಂದೇ ಜಾತಿ, ಒಂದೇ ಧರ್ಮ, ಒಂದೇ ದೇವರು ಎಂಬ ಅವರ ಧ್ಯೇಯವಾಕ್ಯ ಸಾರ್ವಕಾಲಿಕ ಪ್ರಸ್ತುತವಾಗಿದೆ ಎಂದರು.ಈ ವೇಳೆ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು ಮತ್ತು ಕ್ರೀಡಾಕೂಟಗಳಲ್ಲಿ ವಿಜೇತರಾದ ಕ್ರೀಡಾಪಟುಗಳನ್ನು ಸನ್ಮಾನಿಸಲಾಯಿತು. ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಾಬರ್ಚಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಸವರಾಜ ಬಳ್ಳಾರಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಡಾ. ನಂದ ಹಣ್ಣಬರಟ್ಟಿ ಇದ್ದರು. ಬಾಹುಬಲಿ ಜೈನ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.