ಸಾರಾಂಶ
ಕನ್ನಡಪ್ರಭ ವಾರ್ತೆ ಚಾಮರಾಜನಗರಪೌರಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ತನ್ನ ಜೀವನವನ್ನೇ ಮುಡಿಪಾಗಿಟ್ಟು ದುಡಿಯುತ್ತಿರುವ ಮೈಸೂರು ಮಹಾನಗರ ಪಾಲಿಕೆ ಮಾಜಿ ಮೇಯರ್ ನಾರಾಯಣ ಅವರಿಗೆ ಎಂಎಲ್‌ಸಿ ಸ್ಥಾನ ನೀಡಬೇಕು ಎಂದು ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆಗಳ ಪೌರಕಾರ್ಮಿಕರ ಮಹಾಸಂಘದ ಜಿಲ್ಲಾಧ್ಯಕ್ಷ ಸಿ.ಶಂಕರ ಅಂಕನಶೆಟ್ಟಿಪುರ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂನ್‌ನಲ್ಲಿ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ವಿಧಾನ ಪರಿಷತ್‌ನ 7 ಸ್ಥಾನಗಳು ದೊರೆಯಲಿದ್ದು, ಸದರಿ ಸ್ಥಾನಗಳ ಪೈಕಿ ಒಂದು ಸ್ಥಾನವನ್ನು ಪರಿಶಿಷ್ಟ ಜಾತಿಯ ಪೌರಕಾರ್ಮಿಕ ಸಮುದಾಯಕ್ಕೆ ಮೀಸಲಿಡಬೇಕು ಎಂದು ಮನವಿ ಮಾಡಿದರು.ಮಾಜಿ ಮೇಯರ್ ನಾರಾಯಣ ಅವರು ರಾಜ್ಯಾದ್ಯಂತ ಸಂಘಟನೆ ಮಾಡುವ ಮೂಲಕ ಹಲವಾರು ಹೋರಾಟಗಳನ್ನು ನಡೆಸಿ ಪೌರಕಾರ್ಮಿಕರಿಗೆ ಗುತ್ತಿಗೆ ರದ್ದು ಮಾಡಿ ಕಾಯಂ ಆಗಲು ಶ್ರಮಿಸಿರುವುದರ ಜೊತೆಗೆ, ಈ ಸಮುದಾಯಕ್ಕೆ ಕಳೆದ 40 ವರ್ಷಗಳಿಂದ ತಮ್ಮ ಜೀವನವನ್ನು ಮುಡಿಪಾಗಿಟ್ಟು, ನಿರಂತರವಾಗಿ ಇವರ ಏಳಿಗೆಗಾಗಿ ದುಡಿಯುತ್ತಿದ್ದಾರೆ. ಆದ್ದರಿಂದ ನಾರಾಯಣ ಅವರಿಗೆ ಎಂಎಲ್‌ಸಿ ಸ್ಥಾನ ನೀಡುವ ಮೂಲಕ ಪೌರಕಾರ್ಮಿಕರ ಸಮುದಾಯಕ್ಕೆ ಸಾಮಾಜಿಕ ನ್ಯಾಯ ನೀಡಬೇಕು ಎಂದು ಆಗ್ರಹಿಸಿದರು.
ಸಾಮಾಜಿಕ ನ್ಯಾಯದ ಹರಿಕಾರ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು 1974ರಲ್ಲಿ ಬೆಂಗಳೂರು ನಗರ ಬಿನ್ನಿಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಪೌರಕಾರ್ಮಿಕ ಮುಖಂಡ ಐಪಿಡಿ ಸಾಲಪ್ಪ ಅವರನ್ನು ಶಾಸಕರನ್ನಾಗಿ ಮಾಡಲು ಅವಕಾಶ ಕಲ್ಪಿಸಿದ್ದರು. ನಂತರ ಇದುವರಗೆ ಪೌರಕಾರ್ಮಿಕ ಜನಾಂಗದವರಿಗೆ ಇದುವರಗೆ ಅವಕಾಶ ಸಿಕ್ಕಿಲ್ಲ. ಪೌರಕಾರ್ಮಿಕರು ಆರ್ಥಿಕವಾಗಿ, ಸಾಮಾಜಿಕವಾಗಿ ಮತ್ತು ರಾಜಕೀಯವಾಗಿ ತೀರಾ ಹಿಂದುಳಿದಿರುತ್ತಾರೆ. ರಾಜಕೀಯವಾಗಿ ಚುನಾವಣೆಗಳಲ್ಲಿ ನೇರವಾಗಿ ಸ್ಪರ್ಧಿಸಿ ಗೆಲುವು ಸಾಧಿಸಲು ಅವಕಾಶ ಇಲ್ಲ. ಆದ್ದರಿಂದ ಎಲ್ಲಾ ಅಂಶಗಳನ್ನು ಪರಿಗಣಿಸಿ ಮಾಜಿ ಮೇಯರ್ ನಾರಾಯಣರಿಗೆ ಅವಕಾಶ ಕಲ್ಪಿಸುವ ಮೂಲಕ ಸಾಮಾಜಿಕ ನ್ಯಾಯ ಕಲ್ಪಿಸಬೇಕು ಎಂದು ಮನವಿ ಮಾಡಿದರು.ಸುದ್ದಿಗೋಷ್ಠಿಯಲ್ಲಿ ಆದಿ ಕರ್ನಾಟಕ ಸಮಿತಿ ಜಿಲ್ಲಾಧ್ಯಕ್ಷ ಪಿ.ಸಂಘಸೇನ, ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆಗಳ ಪೌರಕಾರ್ಮಿಕರ ಮಹಾಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ರಾಜೇಂದ್ರ, ಮುಖಂಡರಾದ, ಮೂಕಹಳ್ಳಿ ಮಲ್ಲೇಶ್, ಆನಂದ್ ಇದ್ದರು.