ಕನ್ನಡಪ್ರಭ ವಾರ್ತೆ ಹಾಸನ

ಭೋವಿ ಸಮಾಜದ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಐಕ್ಯತೆಯನ್ನು ಬಲಪಡಿಸುವ ಉದ್ದೇಶದಿಂದ ಜುಲೈ 19ರಂದು ಭಾನುವಾರ ಚಿತ್ರದುರ್ಗದ ಶ್ರೀ ಶಿವಯೋಗಿ ಸಿದ್ಧರಮೇಶ್ವರ ಮಹಾಸಂಸ್ಥಾನದ ಭೋವಿ ಗುರುಪೀಠದಲ್ಲಿ ರಾಷ್ಟ್ರೀಯ ಭೋವಿ ಜನೋತ್ಸವ, ಪ್ರತಿಭಾ ಪುರಸ್ಕಾರ, ವಧು-ವರರ ಸಮಾವೇಶ ಹಾಗೂ ಸಮಾಜದ ವಿವಿಧ ಬೇಡಿಕೆಗಳ ಮಂಡನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಕರ್ನಾಟಕ ಭೋವಿ ಮಹಾಸಭೆಯ ರಾಜ್ಯಾಧ್ಯಕ್ಷ ಹೆಚ್. ಮಂಜಪ್ಪ ಮತ್ತು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಮಾಜಿ ಅಧ್ಯಕ್ಷ ಜಿ.ವಿ. ಸೀತರಾಮ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಭೋವಿ ಗುರುಪೀಠದ ಇಮ್ಮಂಡಿ ಸಿದ್ಧರಮೇಶ್ವರ ಮಹಾಸ್ವಾಮಿಗಳ ೪೦ನೇ ಜನ್ಮದಿನದ ಅಂಗವಾಗಿ ಈ ಬೃಹತ್ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಭೋವಿ ಸಮಾಜದ ಬಂಧುಗಳು, ಮಠಾಧೀಶರು, ಜನಪ್ರತಿನಿಧಿಗಳು, ಸಮಾಜದ ಮುಖಂಡರು, ಯುವಕರು, ಮಹಿಳೆಯರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದರು. ಕಾರ್ಯಕ್ರಮವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟಿಸುವ ನಿರೀಕ್ಷೆಯಿದ್ದು, ಉಪ ಮುಖ್ಯಮಂತ್ರಿಗಳು, ವಿವಿಧ ಸಚಿವರು, ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು ಹಾಗೂ ವಿವಿಧ ನಿಗಮ-ಮಂಡಳಿಗಳ ಅಧ್ಯಕ್ಷರು ಸೇರಿದಂತೆ ಹಲವು ಗಣ್ಯರನ್ನು ಆಹ್ವಾನಿಸಲಾಗಿದೆ. ಸಮಾಜದ ಸಂಘಟನಾ ಬಲವನ್ನು ಪ್ರದರ್ಶಿಸುವುದರ ಜೊತೆಗೆ ಅಭಿವೃದ್ಧಿ ಕುರಿತ ವಿಚಾರಗಳನ್ನು ಸರ್ಕಾರದ ಮುಂದಿಡಲು ಈ ಸಮಾವೇಶ ಮಹತ್ವದ ವೇದಿಕೆಯಾಗಲಿದೆ ಎಂದು ಅಭಿಪ್ರಾಯಿಸಿದರು. ಪ್ರತಿಭಾ ಪುರಸ್ಕಾರ:

ಈ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಶೇ.೯೦ಕ್ಕಿಂತ ಹೆಚ್ಚು ಅಂಕ ಪಡೆದ ಭೋವಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು. ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಮೂಲಕ ಸಮಾಜದಲ್ಲಿ ಶಿಕ್ಷಣದ ಬಗ್ಗೆ ಮತ್ತಷ್ಟು ಜಾಗೃತಿ ಮೂಡಿಸುವ ಉದ್ದೇಶ ಹೊಂದಲಾಗಿದೆ ಎಂದು ಹೇಳಿದರು. ಇದರೊಂದಿಗೆ ವಧು-ವರರ ಸಮಾವೇಶ, ಸಾಂಸ್ಕೃತಿಕ ಕಾರ್ಯಕ್ರಮಗಳು, ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಸನ್ಮಾನ, ಸ್ವಯಂಪ್ರೇರಿತ ರಕ್ತದಾನ ಶಿಬಿರ ಹಾಗೂ ಚಿತ್ರಕಲಾ ಸ್ಪರ್ಧೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಯುವಜನರಲ್ಲಿ ಸಮಾಜದ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ ಪರಸ್ಪರ ಬಾಂಧವ್ಯ ವೃದ್ಧಿಸುವ ಉದ್ದೇಶದಿಂದ ಹಲವು ವಿಶೇಷ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದರು.ಸಮಾವೇಶದಲ್ಲಿ ಭೋವಿ ಸಮಾಜದ ಹಲವು ವರ್ಷಗಳ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರಲಾಗುವುದು. ಸಮಾಜದ ಸಾಮಾಜಿಕ ಮತ್ತು ಶೈಕ್ಷಣಿಕ ಹಿಂದುಳಿದಿರುವ ಸ್ಥಿತಿಯನ್ನು ಪರಿಗಣಿಸಿ ಒಳಮೀಸಲಾತಿಯನ್ನು ಮರುಪರಿಶೀಲಿಸಬೇಕು. ಭೋವಿ ಸಮಾಜದ ಶಾಸಕರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸೂಕ್ತ ಪ್ರಾತಿನಿಧ್ಯ ನೀಡಬೇಕು. ವಿಧಾನ ಪರಿಷತ್ ಹಾಗೂ ವಿವಿಧ ನಿಗಮ-ಮಂಡಳಿಗಳಲ್ಲಿ ಸಮಾಜದ ಪ್ರತಿನಿಧಿಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಲಾಗುವುದು. ಪಾರಂಪರಿಕ ಕಲ್ಲು ಒಡೆಯುವ ಕಸುಬು, ಕಟ್ಟಡ ಕಲ್ಲು ಗಣಿಗಾರಿಕೆ ಹಾಗೂ ಕ್ವಾರಿ ಉದ್ಯಮಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಸರ್ಕಾರ ತ್ವರಿತವಾಗಿ ಬಗೆಹರಿಸಬೇಕು. ೩ಎಫ್ ಅಡಿಯಲ್ಲಿ ಸಲ್ಲಿಕೆಯಾಗಿರುವ ಗಣಿಗಾರಿಕೆ ಮಂಜೂರಾತಿ ಅರ್ಜಿಗಳನ್ನು ವಿಳಂಬ ಮಾಡದೆ ವಿಲೇವಾರಿ ಮಾಡಬೇಕು.ಜು.19 ರಂದು ಚಿತ್ರದುರ್ಗದಲ್ಲಿ ರಾಷ್ಟ್ರೀಯ ಭೋವಿ ಜನೋತ್ಸವ ಸಾವಿರಾರು ಕುಟುಂಬಗಳ ಬದುಕು ಸುಧಾರಿಸಲು ವಿಶೇಷ ಯೋಜನೆಗಳನ್ನು ಜಾರಿಗೊಳಿಸಬೇಕು ಎಂಬ ಬೇಡಿಕೆಯನ್ನೂ ಸರ್ಕಾರದ ಮುಂದೆ ಮಂಡಿಸಲಾಗುವುದು ಎಂದು ತಿಳಿಸಿದರು. ಭೋವಿ ಸಮಾಜದ ವಿದ್ಯಾರ್ಥಿಗಳಿಗೆ ಹೆಚ್ಚಿನ ಶೈಕ್ಷಣಿಕ ಸೌಲಭ್ಯಗಳು, ವಸತಿ ನಿಲಯಗಳು, ವಿದ್ಯಾರ್ಥಿವೇತನ, ಯುವಕರಿಗೆ ಉದ್ಯೋಗ ಮತ್ತು ಸ್ವಯಂ ಉದ್ಯೋಗ ಯೋಜನೆಗಳು, ಮಹಿಳೆಯರ ಆರ್ಥಿಕ ಸಬಲೀಕರಣ ಹಾಗೂ ಸಮಾಜದ ಸಮಗ್ರ ಅಭಿವೃದ್ಧಿಗೆ ವಿಶೇಷ ಕಾರ್ಯಕ್ರಮಗಳನ್ನು ಜಾರಿಗೊಳಿಸುವಂತೆ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದರು. ಹಾಸನ ಜಿಲ್ಲೆಯಿಂದಲೂ ಸಾವಿರಾರು ಸಂಖ್ಯೆಯಲ್ಲಿ ಭೋವಿ ಸಮಾಜದ ಬಂಧುಗಳು, ಯುವಕರು, ಮಹಿಳೆಯರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ರಾಷ್ಟ್ರೀಯ ಭೋವಿ ಜನೋತ್ಸವವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.ಪತ್ರಿಕಾಗೋಷ್ಠಿಯಲ್ಲಿ ಭೋವಿ ಮಹಾಸಭಾದ ಜಿಲ್ಲಾಧ್ಯಕ್ಷ ಸಂದೀಪ್, ಮೈಸೂರು ವಿಭಾಗದ ಅಧ್ಯಕ್ಷ ವಿಜಯಕುಮಾರ್, ನಿವೃತ್ತ ಶಿಕ್ಷಕ ಲಕ್ಷ್ಮಪ್ಪ, ದಿಲೀಪ್, ರಾಮಸ್ವಾಮಿ, ಬಸವರಾಜು ಇತರರು ಉಪಸ್ಥಿತರಿದ್ದರು.