ಕನ್ನಡಪ್ರಭ ವಾರ್ತೆ ಗುಡಿಬಂಡೆ

ರಾಷ್ಟ್ರೀಯ ಹಬ್ಬಗಳಾದ ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣರಾಜ್ಯೋತ್ಸವ ಸೇರಿದಂತೆ ಎಲ್ಲ ರಾಷ್ಟ್ರೀಯ ದಿನಾಚರಣೆಗಳನ್ನು ಪ್ರತಿಯೊಬ್ಬರೂ ತಮ್ಮ ಮನೆಯ ಹಬ್ಬದಂತೆ ಆಚರಿಸುವಂತಾಗಬೇಕು ಎಂದು ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಕರೆ ನೀಡಿದರು.

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಿದ್ದ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಹಬ್ಬಗಳು ಕೇವಲ ಸರ್ಕಾರಿ ಕಾರ್ಯಕ್ರಮಗಳು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸೀಮಿತ ಎಂಬ ಭಾವನೆ ಸಮಾಜದಲ್ಲಿ ಮೂಡಿದೆ. ಈ ಮನೋಭಾವ ಬದಲಾಗಬೇಕು ಎಂದರು.

ದೇಶಕ್ಕೆ ಸ್ವಾತಂತ್ರ್ಯ ತಂದುಕೊಡಲು ಅಪಾರ ಸಂಖ್ಯೆಯ ಹೋರಾಟಗಾರರು ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದಾರೆ. ಅಂತಹ ಮಹನೀಯರನ್ನು ನಾವು ಸದಾ ಸ್ಮರಿಸಬೇಕು. ಅವರ ತ್ಯಾಗ, ಬಲಿದಾನದ ನೆನಪಿಗಾಗಿ ಆಚರಿಸುವ ರಾಷ್ಟ್ರೀಯ ಹಬ್ಬಗಳಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಆಗ ಮಾತ್ರ ಸ್ವಾತಂತ್ರ್ಯ ಹೋರಾಟಗಾರರಿಗೆ ನಿಜವಾದ ಗೌರವ ಸಲ್ಲಿಸಿದಂತಾಗುತ್ತದೆ ಎಂದರು.

ಸೋಮೇನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ರಾಮಕೃಷ್ಣ, ಇಂದಿನ ಯುವಜನತೆ ದೇಶದ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಬೇಕು. ದೇಶಕ್ಕೆ ಸ್ವಾತಂತ್ರ್ಯ ಹೇಗೆ ದೊರೆಯಿತು, ಸ್ವಾತಂತ್ರ್ಯಕ್ಕಾಗಿ ಹೋರಾಟಗಾರರು ಪಟ್ಟ ಶ್ರಮ ಹಾಗೂ ಮಾಡಿದ ತ್ಯಾಗ ಎಂತಹದ್ದು ಎಂಬುದನ್ನು ಇಂದಿನ ಪೀಳಿಗೆ ಅರಿತುಕೊಳ್ಳಬೇಕು. ದೇಶದ ಅಭಿವೃದ್ಧಿ ಇಂದಿನ ಯುವಜನತೆಯ ಕೈಯಲ್ಲಿದ್ದು, ರಾಷ್ಟ್ರದ ಪ್ರಗತಿಗಾಗಿ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು. ಸ್ವಾತಂತ್ರ್ಯ ಹೋರಾಟಗಾರರ ಧೈರ್ಯ, ಸಾಹಸ ಹಾಗೂ ದೇಶಪ್ರೇಮವನ್ನು ಯುವಜನತೆ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.


ಕಾರ್ಯಕ್ರಮದಲ್ಲಿ ವಿವಿಧ ಶಾಲೆಗಳ ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗಳಿಗೆ ನೃತ್ಯ ರೂಪಕಗಳನ್ನು ಪ್ರದರ್ಶಿಸಿ ಗಮನ ಸೆಳೆದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ತಹಸೀಲ್ದಾರ್ ಸಿಗ್ಬತ್ತುಲ್ಲಾ, ತಾಪಂ ಇಒ ನಾಗಮಣಿ, ಪಟ್ಟಣ ಪಂಚಾಯಿತಿ ಅಧ್ಯಕ್ಷ ವಿಕಾಸ್, ಉಪಾಧ್ಯಕ್ಷ ಗಂಗರಾಜು, ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿಯ ಅಧ್ಯಕ್ಷ ಆದಿರೆಡ್ಡಿ, ಆರಕ್ಷಕ ವೃತ್ತ ನಿರೀಕ್ಷಕ ಮುನಿಕೃಷ್ಣ, ಪಪಂ ಮುಖ್ಯಾಧಿಕಾರಿ ಆರತಿ, ಬಿಇಒ ಕಾಳೇಗೌಡ, ಸರ್ಕಾರಿ ನೌಕರರ ಸಂಘದ ಮುನಿಕೃಷ್ಣಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬಾಲಾಜಿ ಇದ್ದರು.

15ಜಿಯುಡಿ1: ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಮಾತನಾಡಿದರು.