ಪ್ರತಿ ಮನೆಯಲ್ಲಿ ರಾಷ್ಟ್ರ ಧ್ವಜ ಹಾರಿಸಬೇಕು: ಡಿಸಿ ಮೀನಾ ನಾಗರಾಜ್ ಕರೆ

| Published : Aug 14 2024, 12:56 AM IST

ಪ್ರತಿ ಮನೆಯಲ್ಲಿ ರಾಷ್ಟ್ರ ಧ್ವಜ ಹಾರಿಸಬೇಕು: ಡಿಸಿ ಮೀನಾ ನಾಗರಾಜ್ ಕರೆ
Share this Article
  • FB
  • TW
  • Linkdin
  • Email

ಸಾರಾಂಶ

ಚಿಕ್ಕಮಗಳೂರು, ಸ್ವಾತಂತ್ರ್ಯೋತ್ಸವ ನಿಮಿತ್ತ ಜಿಲ್ಲೆಯ ಪ್ರತಿ ಮನೆ ಮೇಲೆ ರಾಷ್ಟ್ರಧ್ವಜ ಹಾರಿಸುವ ಮೂಲಕ ವಿಜೃಂಭಣೆಯಿಂದ ಸ್ವಾತಂತ್ರ್ಯ ದಿನಾಚರಣೆ ಆಚರಿಸುವಂತೆ ಜಿಲ್ಲಾಧಿಕಾರಿ ಸಿ.ಎನ್‌. ಮೀನಾ ನಾಗರಾಜ್ ಕರೆ ನೀಡಿದರು.

ಹರ್‌ ಘರ್‌ ತಿರಂಗಾ ಅಭಿಯಾನದ ಅಂಗವಾಗಿ ಚಿಕ್ಕಮಗಳೂರಿನಲ್ಲಿ ವಾಕ್‌ ಥಾನ್‌

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಸ್ವಾತಂತ್ರ್ಯೋತ್ಸವ ನಿಮಿತ್ತ ಜಿಲ್ಲೆಯ ಪ್ರತಿ ಮನೆ ಮೇಲೆ ರಾಷ್ಟ್ರಧ್ವಜ ಹಾರಿಸುವ ಮೂಲಕ ವಿಜೃಂಭಣೆಯಿಂದ ಸ್ವಾತಂತ್ರ್ಯ ದಿನಾಚರಣೆ ಆಚರಿಸುವಂತೆ ಜಿಲ್ಲಾಧಿಕಾರಿ ಸಿ.ಎನ್‌. ಮೀನಾ ನಾಗರಾಜ್ ಕರೆ ನೀಡಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ನಿಂದ ಮಂಗಳವಾರ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ನಗರದ ಕೋಟೆ ಸುಗ್ಗಿ ಕಲ್ಲಿನಿಂದ ಜಿಲ್ಲಾಧಿಕಾರಿಗಳ ಕಚೇರಿಯ ನೆನಪಿನಂಗಳದ ವರೆಗೆ ಹಮ್ಮಿಕೊಳ್ಳಲಾಗಿದ್ದ ವಾಕಥಾನ್ ಕಾರ್ಯಕ್ರಮಕ್ಕೆ ಡೊಳ್ಳು ಬಾರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.ದೇಶದ ಸ್ವಾತಂತ್ರ್ಯಕ್ಕಾಗಿ ಹಲವಾರು ಹೋರಾಟಗಾರರು ಹೋರಾಡಿದ್ದಾರೆ. ಅವರನ್ನು ಸ್ಮರಿಸುವ ನಿಟ್ಟಿನಲ್ಲಿ ಪ್ರತಿ ಯೊಬ್ಬರೂ ದೇಶದ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನಗಳನ್ನು ಸ್ಮರಿಸಿ ಗೌರವಿಸಬೇಕು ಎಂದರು. ಜಿಲ್ಲೆಯ ಪ್ರತಿಯೊಬ್ಬರೂ ತಮ್ಮ ಮನೆ ಮನೆಯಲ್ಲೂ ರಾಷ್ಟ್ರ ಧ್ವಜ ಹಾರಿಸಿ ಸಂಭ್ರಮಿಸಿ, ಜಿಲ್ಲಾಡಳಿತದದಿಂದ ನಡೆಯುವ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮವನ್ನು ಎಲ್ಲರೂ ಸೇರಿ ಮಾದರಿಯಾಗಿ ಯಶಸ್ವಿಗೊಳಿಸೋಣ ಎಂದು ಮನವಿ ಮಾಡಿದರು.ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಚ್.ಎಸ್. ಕೀರ್ತನಾ ಮಾತನಾಡಿ, ಪ್ರತಿಯೊಬ್ಬರು ತಮ್ಮ ಮನೆಗಳಲ್ಲಿ ರಾಷ್ಟ್ರ ಧ್ವಜ ಹಾರಿಸುವ ಮೂಲಕ ದೇಶವಾಸಿಗಳ ಹೃದಯದಲ್ಲಿ ದೇಶಭಕ್ತಿ ಭಾವನೆ ಮೂಡಿಸುವ ಮೂಲ ಉದ್ದೇಶ ಇದಾಗಿದೆ. ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿಯಿಂದ ವಿದ್ಯಾರ್ಥಿಗಳಿಗೆ ಚರ್ಚಾ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ಚಿತ್ರಕಲಾ ಶಿಬಿರ, ರಸಪ್ರಶ್ನೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಸಾರ್ವಜನಿಕರು, ಸಂಘ ಸಂಸ್ಥೆಗಳು ಹರ್ ಘರ್ ತಿರಂಗಾ ಅಭಿಯಾನದಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿ ಗೊಳಿಸುವಂತೆ ಹೇಳಿದ ಅವರು ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲೂ ಹರ್ ಘರ್ ತಿರಂಗಾ ಕಾರ್ಯಕ್ರಮವನ್ನು ಹಬ್ಬದ ರೀತಿಯಲ್ಲಿ ಆಚರಿಸುವಂತೆ ಸೂಚಿಸಿದೆ ಎಂದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಮ್ ಅಮಟೆ ಮಾತನಾಡಿ, ಆಗಸ್ಟ್ 15ರ ಸ್ವಾತಂತ್ರ್ಯೋತ್ಸವವನ್ನು ವಿನೂತನವಾಗಿ ಆಚರಿಸಲಾಗುತ್ತಿದೆ. ದೇಶದ ಹೆಮ್ಮೆ, ಪರಂಪರೆ ಬಗ್ಗೆ ಯುವಕರಿಗೆ ತಿಳಿಸುವ ನಿಟ್ಟಿನಲ್ಲಿ ವಾಕ್‌ಥಾನ್ ಸೇರಿದಂತೆ ಹಲವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.ವಾಕ್‌ಥಾನ್ ಸುಗ್ಗಿ ಕಲ್ಲಿನಿಂದ ಪ್ರಾರಂಭವಾಗಿ ಅಗ್ರಹಾರ ರಸ್ತೆ, ಕೋರ್ಟ್ ರಸ್ತೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಯ ನೆನಪಿನಂಗಳ ತಲುಪಿತು. ವಾಕಥಾನ್‌ನಲ್ಲಿ ರಾಮೇದೇವರಹಳ್ಳಿಯ ರುದ್ರಪ್ಪ ಮತ್ತು ತಂಡದವರಿಂದ ವೀರಗಾಸೆ ಪ್ರದರ್ಶನ, ಎಂಇಎಸ್, ಸಂತ ಜೋಸೆಫರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು, ಉಪ ವಿಭಾಗಾಧಿಕಾರಿ ದಲ್ಜಿತ್ ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ರಮೇಶ್‌, ಡಿಎಚ್‌ಒ ಡಾ. ಅಶ್ವತ್‌ಬಾಬು, ಪೌರಾಯುಕ್ತ ಬಸವರಾಜ್‌ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿ ಸಿಬ್ಬಂದಿ ವಾಕಥಾನ್‌ನಲ್ಲಿ ಭಾಗವಹಿಸಿದ್ದರು.

13 ಕೆಸಿಕೆಎಂ 3ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಚಿಕ್ಕಮಗಳೂರಿನ ಕೋಟೆ ಸುಗ್ಗಿ ಕಲ್ಲಿನಿಂದ ಮಂಗಳವಾರ ಹಮ್ಮಿಕೊಂಡಿದ್ದ ವಾಕ್‌ಥಾನ್‌ಗೆ ಡಿಸಿ ಮೀನಾ ನಾಗರಾಜ್ ಚಾಲನೆ ನೀಡಿದರು. ಜಿಪಂ ಸಿಇಒ ಕೀರ್ತನಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರಮೇಶ್‌, ಎಎಸ್ಪಿ ಕೃಷ್ಣಮೂರ್ತಿ ಇದ್ದರು.