ಸಾರಾಂಶ
ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳನ್ನೊಳಗೊಂಡಂತಹ ಕಿರುಹೊತ್ತಿಗೆ ಮತ್ತು ವಿಶ್ವ ಗ್ಲಾಕೋಮಾ ಸಪ್ತಾಹ ಭಿತ್ತಿಪತ್ರ ಬಿಡುಗಡೆಗೊಳಿಸಿದರು.
ಬಳ್ಳಾರಿ: ಸಾರ್ವಜನಿಕರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಕೈಗೊಳ್ಳಲಾಗುವ ಕಾರ್ಯಕ್ರಮಗಳು, ಸೌಲಭ್ಯಗಳು ಮತ್ತು ಆರೋಗ್ಯ ಜಾಗೃತಿ ಸಂದೇಶಗಳ ಕುರಿತು ಸಾರ್ವಜನಿಕರಿಗೆ ತಲುಪಿಸಲು ಮಾಧ್ಯಮಗಳ ಸಹಕಾರ ಅಗತ್ಯ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ ಹೇಳಿದರು.ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ನಗರದ ಜಿಲ್ಲಾಸ್ಪತ್ರೆಯ ಡಿ.ಎನ್.ಬಿ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಕುರಿತು ಪರಿಚಯ ಮತ್ತು ಜಾಗೃತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು ಅಧ್ಯಕ್ಷತೆ ವಹಿಸಿ ಮಾತನಾಡಿದರು.ಇದೇ ವೇಳೆ, ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳನ್ನೊಳಗೊಂಡಂತಹ ಕಿರುಹೊತ್ತಿಗೆ ಮತ್ತು ವಿಶ್ವ ಗ್ಲಾಕೋಮಾ ಸಪ್ತಾಹ ಭಿತ್ತಿಪತ್ರ ಬಿಡುಗಡೆಗೊಳಿಸಿದರು.ಕಾರ್ಯಾಗಾರದಲ್ಲಿ ಗ್ಲಾಕೋಮಾ, ಮಾನಸಿಕ ಆರೋಗ್ಯ, ಕ್ಷಯರೋಗ ನಿರ್ಮೂಲನೆ, ಎಚ್‍ಐವಿ ಸೇರಿದಂತೆ ಇತರೆ ಕಾರ್ಯಕ್ರಮಗಳ ಕುರಿತು ಸಂಬಂಧಿಸಿದ ವೈದ್ಯಾಧಿಕಾರಿಗಳು ಮಾಹಿತಿ ನೀಡಿದರು.ಈ ಸಂದರ್ಭದಲ್ಲಿ ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಹನುಮಂತಪ್ಪ, ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ಪೂರ್ಣಿಮಾ ಕಟ್ಟಿಮನಿ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ವೀರೇಂದ್ರ ಕುಮಾರ್, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಆರ್.ಅಬ್ದುಲ್ಲಾ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ್ ದಾಸಪ್ಪನವರ್, ಡಾ.ವಿಮಲಾಕ್ಷಿ ಸೇರಿದಂತೆ ಮಾಧ್ಯಮ ಪ್ರತಿನಿಧಿಗಳು, ಜಿಲ್ಲಾ ಆಸ್ಪತ್ರೆಯ ವೈದ್ಯರು, ಸಿಬ್ಬಂದಿ, ಇನ್ನಿತರರು ಉಪಸ್ಥಿತರಿದ್ದರು.