ರಾಷ್ಟ್ರಮಟ್ಟದ ಬಾಲಕಿಯರ ಹಾಕಿ: ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

| Published : Dec 06 2023, 01:15 AM IST

ರಾಷ್ಟ್ರಮಟ್ಟದ ಬಾಲಕಿಯರ ಹಾಕಿ: ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ
Share this Article
  • FB
  • TW
  • Linkdin
  • Email

ಸಾರಾಂಶ

67 ನೇ ರಾಷ್ಟ್ರ ಮಟ್ಟದ ಬಾಲಕಿಯರ ಹಾಕಿ ಪಂದ್ಯಾವಳಿಯು ಜ.3 ರಿಂದ 08 ರವರೆಗೆ ಜಿಲ್ಲಾ ಕೇಂದ್ರ ಮಡಿಕೇರಿ ಸೇರಿದಂತೆ ಕೂಡಿಗೆ, ಪೊನ್ನಂಪೇಟೆ ಮತ್ತು ಸೋಮವಾರಪೇಟೆಯ ಟರ್ಫ್ ಮೈದಾನದಲ್ಲಿ ಪಂದ್ಯಾವಳಿ ನಡೆಯಲಿದ್ದು, ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ನಿರ್ದೇಶನ ನೀಡಿದ್ದಾರೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

67 ನೇ ರಾಷ್ಟ್ರ ಮಟ್ಟದ ಬಾಲಕಿಯರ ಹಾಕಿ ಪಂದ್ಯಾವಳಿಯು ಜ.3 ರಿಂದ 08 ರವರೆಗೆ ಜಿಲ್ಲಾ ಕೇಂದ್ರ ಮಡಿಕೇರಿ ಸೇರಿದಂತೆ ಕೂಡಿಗೆ, ಪೊನ್ನಂಪೇಟೆ ಮತ್ತು ಸೋಮವಾರಪೇಟೆಯ ಟರ್ಫ್ ಮೈದಾನದಲ್ಲಿ ಪಂದ್ಯಾವಳಿ ನಡೆಯಲಿದ್ದು, ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ನಿರ್ದೇಶನ ನೀಡಿದ್ದಾರೆ.

ರಾಷ್ಟ್ರಮಟ್ಟದ ಬಾಲಕಿಯರ ಹಾಕಿ ಪಂದ್ಯಾವಳಿ ಆಯೋಜನೆ ಸಂಬಂಧ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಷ್ಟ್ರಮಟ್ಟದ ಬಾಲಕಿಯರ ಹಾಕಿ ಪಂದ್ಯಾವಳಿಗೆ ಆಗಮಿಸುವ ಕ್ರೀಡಾಪಟುಗಳು, ತೀರ್ಪುಗಾರರು ಹಾಗೂ ತರಬೇತಿದಾರರು ಹೀಗೆ ಎಲ್ಲರಿಗೂ ವಸತಿ, ಉಪಹಾರ, ಊಟ, ಬಿಸಿನೀರು, ಶೌಚಾಲಯ ಹೀಗೆ ಪ್ರತಿಯೊಂದನ್ನೂ ಕಲ್ಪಿಸಬೇಕಿದ್ದು, ಯಾವುದೇ ರೀತಿಯ ವ್ಯತ್ಯಾಸ ಆಗದಂತೆ ಅಗತ್ಯ ಪೂರ್ವ ತಯಾರಿ ಮಾಡಿಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಿಗೆ ಜಿಲ್ಲಾಧಿಕಾರಿ ಸೂಚಿಸಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಜೊತೆ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ನಗರಾಭಿವೃದ್ಧಿ ಇಲಾಖೆ, ಪಂಚಾಯತ್ ರಾಜ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೃಷಿ, ತೋಟಗಾರಿಕೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ, ಸೆಸ್ಕ್ ಹೀಗೆ ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಅಗತ್ಯ ಸಿದ್ಧತೆ ಮಾಡಿಕೊಳ್ಳಲು ತೊಡಗಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಹೇಳಿದರು. ಅಗತ್ಯ ಸೌಲಭ್ಯ ಕಲ್ಪಿಸಿ: ಕ್ರೀಡಾಪಟುಗಳು ಒಂದು ಕಡೆಯಿಂದ ಮತ್ತೊಂದು ಕಡೆಗೆ ತೆರಳಲು ವಾಹನ ವ್ಯವಸ್ಥೆ ಮಾಡುವುದು, ಕುಡಿಯುವ ನೀರು ಕಲ್ಪಿಸುವುದು, ಅಗತ್ಯ ಬಸ್ ಸೌಲಭ್ಯ, ಶಿಷ್ಟಾಚಾರವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರಿಗೆ ಸಲಹೆ ಮಾಡಿದರು.ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ರಾಷ್ಟ್ರಮಟ್ಟದ ಹಾಕಿ ಪಂದ್ಯಾವಳಿಗೆ ಕ್ರೀಡಾ ಇಲಾಖೆಯಿಂದ ಹೆಚ್ಚಿನ ಅನುದಾನ ಬಿಡುಗಡೆ ಮಾಡಲು ಪತ್ರ ಬರೆಯುವಂತೆ ಜಿಲ್ಲಾಧಿಕಾರಿ ತಿಳಿಸಿದರು. ವಸತಿ, ಆಹಾರ, ಸಾರಿಗೆ, ವೇದಿಕೆ, ಕುಡಿಯುವ ನೀರು, ಶಿಷ್ಟಾಚಾರ, ಸ್ವಾಗತ, ವೈದ್ಯಕೀಯ ಹೀಗೆ ವಿವಿಧ ಉಪ ಸಮಿತಿಗಳ ಪಟ್ಟಿ ಮಾಡಿ ಕಾರ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಸಲಹೆ ಮಾಡಿದರು.

ಜಿಲ್ಲಾ ಪೊಲೀಸ್ ವರಿ಼ಷ್ಠಾಧಿಕಾರಿ ಕೆ.ರಾಮರಾಜನ್ ರಾಷ್ಟ್ರ ಮಟ್ಟದ ಬಾಲಕಿಯರ ಹಾಕಿ ಪಂದ್ಯಾವಳಿಯಲ್ಲಿ ಭಾಗವಹಿಸುವ ಕ್ರೀಡಾಪಟುಗಳ ಸಂಖ್ಯೆ, ತರಬೇತಿದಾರರು, ತೀರ್ಪುಗಾರರ ಸಂಖ್ಯೆ, ವಸತಿ ವ್ಯವಸ್ಥೆ ಮತ್ತಿತರ ಬಗ್ಗೆ ಗಮನಹರಿಸಬೇಕು ಎಂದರು.

ವಸತಿ ಶಾಲೆ, ವಿದ್ಯಾರ್ಥಿ ನಿಲಯ ಜೊತೆಗೆ ಕಲ್ಯಾಣ ಮಂಟಪಗಳನ್ನು ಕಾಯ್ದಿರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕೆ. ರಾಮರಾಜನ್ ಸಲಹೆ ಮಾಡಿದರು.

ಜಿ.ಪಂ. ಸಿಇಒ ವರ್ಣಿತ್ ನೇಗಿ ಮಾತನಾಡಿ ಸ್ಥಳೀಯ ಆಡಳಿತಗಳಿಂದ ಸ್ವಯಂ ಸೇವಕರನ್ನು ನಿಯೋಜಿಸುವಂತಾಗಬೇಕು. ಟ್ಯಾಂಕರ್ ಮೂಲಕವು ನೀರು ಒದಗಿಸಬೇಕು. ಎಲ್ಲ ಇಲಾಖೆಗಳಅಧಿಕಾರಿಗಳು ಜವಾಬ್ದಾರಿಯಿಂದ ತಮ್ಮದೇ ಕಾರ್ಯಕ್ರಮವೆಂದು ಭಾವಿಸಿ ಪಂದ್ಯಾವಳಿ ಯಶಸ್ಸಿಗೆ ಕೈಜೋಡಿಸುವಂತೆ ವಿವಿಧ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕ ಎಂ. ಚಂದ್ರಕಾಂತ್ ಮಾಹಿತಿ ನೀಡಿ ಜಿಲ್ಲೆಯ ಬಸವನಹಳ್ಳಿ, ಕೂಡಿಗೆ, ಕುಶಾಲನಗರ, ತೋಳೂರು ಶೆಟ್ಟಳ್ಳಿ, ತಿತಿಮತಿ, ಪೊನ್ನಂಪೇಟೆ, ಮಡಿಕೇರಿ ಸೇರಿದಂತೆ ಹಲವೆಡೆ ವಿವಿಧ ವಿದ್ಯಾರ್ಥಿ ನಿಲಯಗಳು, ಹೀಗೆ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು. ಮುಖ್ಯಮಂತ್ರಿಗಳಿಂದ ಚಾಲನೆ: ಜನವರಿ 3ರಂದು ಮುಖ್ಯಮಂತ್ರಿಗಳು ರಾಷ್ಟ್ರಮಟ್ಟದ ಬಾಲಕಿಯರ ಹಾಕಿ ಪಂದ್ಯಾವಳಿಗೆ ಚಾಲನೆ ನೀಡಲಿದ್ದಾರೆ. ಜನವರಿ 4 ರಿಂದ ಪಂದ್ಯಾವಳಿ ಆರಂಭವಾಗಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರು ಮಾಹಿತಿ ನೀಡಿದರು. 40 ತಂಡಗಳು ಭಾಗವಹಿಸುವ ಸಾಧ್ಯತೆ: ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಸದಾಶಿವ ಪಲ್ಲೇದ್ ಮಾತನಾಡಿ ಹಾಕಿ ಪಂದ್ಯಾವಳಿಗೆ ರಾಷ್ಟ್ರದ ಹಲವು ರಾಜ್ಯಗಳಿಂದ ಹಾಕಿ ತಂಡಗಳು ಆಗಮಿಸಲಿದ್ದು, 38 ರಿಂದ 40 ತಂಡಗಳು ಭಾಗವಹಿಸುವ ಸಾಧ್ಯತೆ ಇದೆ. ಒಂದು ತಂಡದಲ್ಲಿ 18 ಕ್ರೀಡಾ ಪಟುಗಳು ಒಬ್ಬ ತರಬೇತುದಾರರು, ಒಬ್ಬ ತಂಡದ ವ್ಯವಸ್ಥಾಪಕರು, ಒಬ್ಬ ಜನರಲ್ ಮ್ಯಾನೇಜರ್ ಒಟ್ಟು 21 ಜನರು ಭಾಗವಹಿಸಲಿದ್ದಾರೆ. ಒಟ್ಟು 840 ಕ್ರೀಡಾಪಟುಗಳು ಹಾಗೂ 40 ರಿಂದ 50 ತೀರ್ಪುಗಾರರು ಮತ್ತು 20 ರಾಜ್ಯ ಮಟ್ಟದ ಅಧಿಕಾರಿಗಳು ಮತ್ತು ಅತಿಥಿಗಳನ್ನೊಳಗೊಂಡಂತೆ ಒಟ್ಟು 950 ಜನರಿಗೆ ವಸತಿ ವ್ಯವಸ್ಥೆ ಕಲ್ಪಿಸಬೇಕಿದೆ ಎಂದು ಮಾಹಿತಿ ನೀಡಿದರು. ಜಿಲ್ಲೆಯ ನಾಲ್ಕು ಮೈದಾನದಲ್ಲಿ ಪಂದ್ಯಾವಳಿ ನಡೆಯುವುದರಿಂದ ಪಂದ್ಯ ನಡೆಯುವ ಕಡೆಗಳಲ್ಲಿ 8 ರಿಂದ 10 ತಂಡಗಳಿಗೆ ವಸತಿ ವ್ಯವಸ್ಥೆ ಕಲ್ಪಿಸಬೇಕಾಗಿದೆ ಎಂದು ಅವರು ತಿಳಿಸಿದರು.ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ಪೂರ್ಣೇಶ್ ಅವರು ರಾಷ್ಟ್ರ ಮಟ್ಟದ ಹಾಕಿ ಪಂದ್ಯಾವಳಿ ಯಶಸ್ಸಿಗೆ ಅಗತ್ಯ ಸಹಕಾರಕ್ಕೆ ಮನವಿ ಮಾಡಿದರು. ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶೇಖರ್, ಶಿಕ್ಷಣಾಧಿಕಾರಿ ಮಹದೇವಸ್ವಾಮಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪುಟ್ಟರಾಜು, ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಗಂಗಾಧರ ನಾಯಕ್, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಬಸಪ್ಪ, ಜಿ.ಪಂ. ಎಂಜಿನಿಯರ್ ಸುರೇಶ್ ಕುಮಾರ್, ಜಿಲ್ಲಾ ಕಾರ್ಮಿಕ ಅಧಿಕಾರಿ ಹರ್ಷವರ್ಧನ, ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕರಾದ ಅನಿತಾ ಭಾಸ್ಕರ್, ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿ ದಿವಾಕರ, ಪ್ರಾದೇಶಿಕ ಸಾರಿಗೆ ಕಚೇರಿಯ ರೀಟಾ ಇತರರು ಇದ್ದರು.