ಜುಲೈ 13ರಂದು ರಾಷ್ಟ್ರೀಯ ಲೋಕ್ ಅದಾಲತ್

| Published : Jun 07 2024, 12:15 AM IST

ಸಾರಾಂಶ

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ರಾಜ್ಯದ ಎಲ್ಲಾ ನ್ಯಾಯಾಲಯದ ಆವರಣಗಳಲ್ಲಿ ಜುಲೈ 13 ರಂದು ಬೆಳಗ್ಗೆಯಿಂದ ರಾಷ್ಟ್ರೀಯ ಲೋಕ್ ಅದಾಲತ್‌ ನ್ಯಾಯಾಲಯ ಆವರಣದಲ್ಲಿ ಆಯೋಜಿಸಲಾಗಿದೆ.

ಕನ್ನಡಪ್ರಭ ವಾರ್ತೆ ಯಾದಗಿರಿ

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ರಾಜ್ಯದ ಎಲ್ಲಾ ನ್ಯಾಯಾಲಯದ ಆವರಣಗಳಲ್ಲಿ ಜುಲೈ 13 ರಂದು ಬೆಳಗ್ಗೆಯಿಂದ ರಾಷ್ಟ್ರೀಯ ಲೋಕ್ ಅದಾಲತ್‌ ನ್ಯಾಯಾಲಯ ಆವರಣದಲ್ಲಿ ಆಯೋಜಿಸಲಾಗಿದ್ದು, ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಷ್ಟ್ರೀಯ ಲೋಕ್ ಅದಾಲತ್ ಮೂಲಕ ಅತೀ ಶೀಘ್ರ ರಾಜಿ-ಸಂಧಾನದ ಮೂಲಕ ಬಗೆಹರಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾ ಸೆಷನ್ಸ್ ನ್ಯಾಯಾಲಯದ ಜಿಲ್ಲಾ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಎಸ್.ರೇಖಾ ತಿಳಿಸಿದ್ದಾರೆ.

ಯಾದಗಿರಿ ನಗರದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಹಾಗೂ ಅಧೀನ ನ್ಯಾಯಾಲಯಗಳ ಸಂಕೀರ್ಣ, ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ, ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧಿಕರಣದ ಪ್ರಕರಣಗಳು, ಕಾಯಂ ಜನತಾ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು, ಚೆಕ್ಕು ಅಮಾನ್ಯದ ಪ್ರಕರಣಗಳನ್ನು ಇಲ್ಲಿ ಬಗೆಹರಿಸಿಕೊಳ್ಳಬಹುದಾಗಿದೆ.

ಅದರಂತೆ, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣ, ಕಾರ್ಮಿಕ ವಿವಾದ, ವಿದ್ಯುತ್ ಹಾಗೂ ನೀರಿನ ಶುಲ್ಕ, ಭೂಸ್ವಾಧೀನ ಪ್ರಕರಣ, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣ ಹಾಗೂ ಪಿಂಚಣಿ ಪ್ರಕರಣ, ಸಾರ್ವಜನಿಕ ಉಪಯಕ್ತತೆ ಸೇವೆಗಳಿಗೆ ಸಂಬಧಿಸಿದ ಪ್ರಕರಣ, ರಾಜೀಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣ, ವೈವಾಹಿಕ, ಕುಟುಂಬ ನ್ಯಾಯಾಲಯ ಪ್ರಕರಣಕ್ಕೆ (ವಿಚ್ಛೇದನ ಹೊರತುಪಡಿಸಿ) ಸಂಬಂಧಿಸಿದಂತೆ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆಯುವಂತೆ ಅವರು ತಿಳಿಸಿದರು.

ನ್ಯಾಯಾಲಯಗಳಲ್ಲಿ ಉಭಯ ಕಕ್ಷಿದಾರರು ರಾಜಿ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ಮಾಡಲಾಗುವುದು. ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವದರಿಂದ ಬಾಂಧವ್ಯ ಉಳಿದು ವಿವಾದವು ತೀರ್ಮಾನವಾಗುತ್ತದೆ. ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಅವರು ಹೇಳಿದರು.

ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯದ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು. ಸಂಧಾನಕಾರರು ಸಂಚರಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದೆ ಎಂದು ಅವರು ಹೇಳಿದರು.

ಈ ಲೋಕ ಅದಾಲತ್ ಅಂಗವಾಗಿ 988 ಪ್ರಕರಣಗಳನ್ನು ರಾಷ್ಟ್ರೀಯ ಲೋಕ ಅದಾಲತ್‌ಗೆ ಶಿಫಾರಸು ಮಾಡಲಾಗಿದೆ. ಬಿಟ್ಟು 18,885 ಪ್ರಕರಣಗಳು ಜಿಲ್ಲೆಯಲ್ಲಿ ಬಾಕಿ ಉಳಿದಿದ್ದು, ಪ್ರತಿವರ್ಷ 4 ರಾಷ್ಟ್ರೀಯ ಲೋಕ ಅದಾಲತ್‌ ಮೂಲಕ ಪ್ರಕರಣ ಇತ್ಯರ್ಥಪಡಿಸಲಾಗುತ್ತಿದೆ ಎಂದು ಹೇಳಿದರು.

ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ಕರ್ನಾಟಕ ರಾಜ್ಯ ಕಾನೂನು ಪ್ರಾಧಿಕಾರ, ಟೋಲ್ ಫ್ರೀ ಸಂಖ್ಯೆ 1800-425-90900, ಸದಸ್ಯ ಕಾರ್ಯದರ್ಶಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಲಯ ಆವರಣ ಯಾದಗಿರಿ ದೂ.ಸಂ.08473 253243ಗೆ ಸಂಪರ್ಕಿಸಬಹುದು ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಯಾದಗಿರಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮರೆಪ್ಪ, ಯಾದಗಿರಿ ವಕೀಲರ ಸಂಘ ಜಿಲ್ಲಾ ಅಧ್ಯಕ್ಷ ಸಿ.ಎಸ್. ಮಾಲಿಪಾಟೀಲ್ ಉಪಸ್ಥಿತರಿದ್ದರು.