ಡಿ.12 ರಂದು ರಾಷ್ಟ್ರೀಯ ಲೋಕ್ ಅದಾಲತ್
ಕನ್ನಡಪ್ರಭ ವಾರ್ತೆ, ತುಮಕೂರುಜಿಲ್ಲೆಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಡಿಸೆಂಬರ್ 12 ರಂದು ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಹಮ್ಮದ್ ಅಶ್ರಫ್ ಆರಿಸ್ ಹೇಳಿದರು.ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮ ಕುರಿತು ನಗರದ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ವಿ.ಸಿ. ಸಭಾಂಗಣದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾಹಿತಿ ಹಂಚಿಕೊಂಡು ಮಾತನಾಡಿದ ಅವರು, ಡಿಸೆಂಬರ್ 12 ರ ಲೋಕ್ ಅದಾಲತ್ ಕಾರ್ಯಕ್ರಮವಲ್ಲದೆ ನವೆಂಬರ್ 21 ರಂದು ಎನ್ ಐ ಆಕ್ಟ್ ಪ್ರಕರಣಗಳ ವಿಶೇಷ ಲೋಕ್ ಅದಾಲತ್ ಅನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಕರ್ನಾಟಕ ಸರ್ಕಾರದ ಆದೇಶದಂತೆ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ಗಳಲ್ಲಿ ದಾಖಲಾಗಿ ಬಾಕಿ ಇರುವ ಪ್ರಕರಣಗಳು ಹಾಗೂ ಸಾರಿಗೆ ಇಲಾಖೆಯಲ್ಲಿ 1991 ರಿಂದ 2025 ರ ಅವಧಿಯಲ್ಲಿ ದಾಖಲಾಗಿ ಪಾವತಿಗೆ ಬಾಕಿ ಇರುವ ಪ್ರಕರಣಗಳಿಗೆ ನವೆಂಬರ್ 21 ರಿಂದ ಡಿಸೆಂಬರ್ 11 ರವರೆಗೆ ಶೇ.50 ರಷ್ಟು ರಿಯಾಯಿತಿ ನೀಡಲಾಗುವುದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಶೇ.50 ರಷ್ಟು ದಂಡ ಪಾವತಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು. ಜಿಲ್ಲೆಯಲ್ಲಿ ಕಳೆದ ಸೆಪ್ಟೆಂಬರ್ 19ರಂದು ಆಯೋಜಿಸಲಾಗಿದ್ದ ಲೋಕ್ ಅದಾಲತ್ನಲ್ಲಿ ನ್ಯಾಯಾಲಯಗಳಲ್ಲಿ ಬಾಕಿ ಇದ್ದ 1,11,303 ಪ್ರಕರಣಗಳ ಪೈಕಿ 12,738 ಪ್ರಕರಣಗಳನ್ನು ಹಾಗೂ 1,44,911 ವ್ಯಾಜ್ಯಪೂರ್ವ ಪ್ರಕರಣಗಳು ಸೇರಿ ಒಟ್ಟು 1,57,649 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಹೇಳಿದರು. ಲೋಕ್ ಅದಾಲತ್ ಅಥವಾ ಜನತಾ ನ್ಯಾಯಾಲಯದ ಮೂಲಕ ಪ್ರಕರಣಗಳನ್ನು ರಾಜಿ ಮತ್ತು ಸಂಧಾನದ ಮೂಲಕ ತ್ವರಿತವಾಗಿ ಹಾಗೂ ಯಾವುದೇ ಶುಲ್ಕವಿಲ್ಲದೆ ಇತ್ಯರ್ಥಪಡಿಸಿಕೊಳ್ಳಬಹುದು. ಇದರಿಂದ ಪಕ್ಷಗಾರರ ನಡುವಿನ ವೈಮನಸ್ಸು ಕಡಿಮೆಯಾಗಿ ಸೌಹಾರ್ದತೆ ಹೆಚ್ಚುವುದರ ಜೊತೆಗೆ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ಸಂಖ್ಯೆಯೂ ಕಡಿಮೆಯಾಗಲಿದೆ. ನ್ಯಾಯಾಲಯದಲ್ಲಿ ದಾಖಲಾಗದ ವ್ಯಾಜ್ಯಪೂರ್ವ ಪ್ರಕರಣಗಳನ್ನೂ ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶವಿದೆ. ರಾಜೀ ಸಂದಾನದ ಮೂಲಕ ಪ್ರಕರಣವನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು ಎಂದು ತಿಳಿಸಿದರು. ಸಾರ್ವಜನಿಕರು ಡಿಸೆಂಬರ್ 12 ರಂದು ನಡೆಯುವ ರಾಷ್ಟ್ರೀಯ ಲೋಕ್ ಅದಾಲತ್ನ ಸದುಪಯೋಗ ಪಡೆದುಕೊಂಡು ತಮ್ಮ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರ ಕಚೇರಿಯ ದೂರವಾಣಿ ಸಂಖ್ಯೆ 0816-2255133 ಸಂಪರ್ಕಿಸಬಹುದು. ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಲೋಕೇಶ ಧನಪಾಲ ಹವಲೆ ಉಪಸ್ಥಿತರಿದ್ದರು.