ಡಿ.9 ರಂದು ರಾಷ್ಟ್ರೀಯ ಲೋಕ್‌ ಅದಾಲತ್

| Published : Nov 09 2023, 01:00 AM IST

ಸಾರಾಂಶ

ಬಾಕಿ ಇರುವ ಪ್ರಕರಣಗಳಿಗೆ ಶೀಘ್ರ ಪರಿಹಾರ: ನ್ಯಾ.ಜಯಂತಕುಮಾರ

ಕನ್ನಡಪ್ರಭ ವಾರ್ತೆ ಯಾದಗಿರಿಡಿ.9 ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಿದ್ದು, ಸಾರ್ವಜನಿಕರ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಶೀಘ್ರವಾಗಿ ಪರಿಹರಿಸಿ ಜನಸಾಮಾನ್ಯರಿಗೆ ಸಂತೋಷದಿಂದ ಕಳುಹಿಸುವುದೇ ನಮ್ಮ ಧ್ಯೇಯವಾಗಿದೆ ಎಂದು ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿ. ಜಯಂತ ಕುಮಾರ ಹೇಳಿದರು.

ನಗರದ ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಬ್ಯಾಂಕ್ ವಸೂಲಿ, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ಕೈಗಾರಿಕಾ ಕಾರ್ಮಿಕ ವೇತನಕ್ಕೆ ಸಂಬಂಧಿಸಿದ ಕ್ಲೇಮ್‌ಗಳು, ಜಿಲ್ಲಾ ಗ್ರಾಹಕರ ವೇದಿಕೆ, ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಿಸಿದ, ಸಾಲ ವಸೂಲಾತಿ ನ್ಯಾಯಾಧೀಕರಣ, ಖಾಯಂ ಜನತಾ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು, ಚೆಕ್ಕು ಅಮಾನ್ಯದ ಪ್ರಕರಣಗಳು ಸೇರಿದಂತೆ ಹತ್ತಾರು ಪ್ರಕರಣಗಳನ್ನು ರಾಷ್ಟ್ರೀಯ ಲೋಕ್‌ ಅದಾಲತ್‌ನಲ್ಲಿ ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗುವುದು ಎಂದು ತಿಳಿಸಿದರು.

ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇರುವ ಇದೊಂದು ವೇದಿಕೆಯನ್ನು ಸದ್ಬಳಕೆ ಮಾಡಿಕೊಂಡು ಲೋಕ್‌ ಅದಾಲತ್‌ನ ಸದುಪಯೋಗ ಪಡೆಯಲು ತಿಳಿಸಿದರು. ನ.9 ರಂದು ಕಾನೂನು ಸೇವೆಗಳ ಪ್ರಾಧಿಕಾರ ದಿನಾಚರಣೆ ಹಮ್ಮಿಕೊಂಡಿದ್ದು, ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಲ್ಲಿ ಕಾನೂನು ಸೇವಾ ಪ್ರಾಧಿಕಾರದ ಧ್ಯೇಯೋದ್ದೇಶಗಳು ತಿಳಿಸುವ ಜೊತೆಗೆ ಸಂಬಂಧಿಸಿದ ಬಹು ಆಯ್ಕೆಯ ಪ್ರಶ್ನೆಗಳನ್ನು ನೀಡಲಾಗುವುದು ಎಂದರು.

ನ.18 ,19 ಮತ್ತು 20 ರಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಜಿಲ್ಲೆಗೆ ಆಗಮಿಸುತ್ತಿದ್ದು, ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ ಸಾರ್ವಜನಿಕರು ಸದುಪಯೋಗ ಪಡೆಯುವಂತೆ ಹೇಳಿದರು. ಹಿರಿಯ ಸಿವಿಲ್ ನ್ಯಾಯಾಧಿಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರವೀಂದ್ರ ಎಲ್. ಹೊನೋಲೆ, ಜಿಲ್ಲಾ ವಕೀಲ ಸಂಘದ ಅಧ್ಯಕ್ಷ ಸಿ.ಎಸ್. ಮಾಲಿ ಪಾಟೀಲ್ ಇದ್ದರು.