ಸಾರಾಂಶ
ನಿಡ್ತ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಯಿತು. ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ವಿಜ್ಞಾನ ದಿನದ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಕನ್ನಡಪ್ರಭ ವಾರ್ತೆ ಶನಿವಾರಸಂತೆ
ಸಮೀಪದ ನಿಡ್ತ ಸರ್ಕಾರಿ ಪ್ರೌಢ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಯಿತು.ಶಾಲೆಯ ಮುಖ್ಯ ಶಿಕ್ಷಕಿ ಎಂ.ಸಿ.ನಳಿನಿ ಅವರು ಪ್ರಾಯೋಗಿಕವಾಗಿ ಸೋಡಿಯಂ ಹೈಡ್ರಾಕ್ಸೈಡ್ ದ್ರಾವಣವನ್ನು ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ನಾಮಫಲಕಕ್ಕೆ ಸಿಂಪಡಿಸಿದರು. ಇದರಿಂದ ನಾಮ ಫಲಕವು ಗುಲಾಬಿ ಬಣ್ಣಕ್ಕೆ ತಿರುಗುವಂತೆ ಮಾಡುವುದರ ಮೂಲಕ ವಿಜ್ಞಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು-ವಿದ್ಯಾರ್ಥಿಗಳು ಬಾಲ್ಯನಿಂದಲೆ ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು, ತರ್ಕಕ್ಕೆ ಸಂಬಂಧಿಸಿದ ವಿಚಾರಗಳನ್ನು ಪ್ರಶ್ನಿಸುವುದರ ಮೂಲಕ ಪರಿಹಾರವನ್ನು ಕಂಡುಕೊಳ್ಳಬೇಕು ಎಂದು ಹೇಳಿದರು. ವಿದ್ಯಾರ್ಥಿಗಳು ವೈಜ್ಞಾನಿಕ ವಿಚಾರಗಳತ್ತ ಆಸಕ್ತಿ ಬೆಳೆಸಿಕೊಳ್ಳುವುದರ ಜೊತೆಯಲ್ಲಿ ವಿಜ್ಞಾನ ಪ್ರಯೋಗಾತ್ಮಕ ಚಿಂತನೆಯನ್ನು ಬೆಳೆಸಿಕೊಂಡರೆ ಭವಿಷ್ಯದಲ್ಲಿ ಉತ್ತಮ ವಿಜ್ಞಾನಿಗಳಾಗಿ ಹೊರ ಹೊಮ್ಮಲು ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದರು.
ಶಾಲೆಯ ವಿಜ್ಞಾನ ಶಿಕ್ಷಕ ಡಿ.ಎಸ್.ಮಧುಕುಮಾರ್, ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ವಿಜ್ಞಾನ ದಿನದ ಪ್ರತಿಜ್ಞಾ ವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಹಿರಿಯ ಶಿಕ್ಷಕ ಮಾರುತಿ ಅರೇರಾ, ಎಂ.ವಿ.ರೂಪ, ಪ್ರಿಯಾಂಕ ಚಿಪಳೂಣಕರ್, ಗೀತ ಹಾಜರಿದ್ದರು. ದಿನದ ಅಂಗವಾಗಿ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶವನ್ನು ಏರ್ಪಡಿಸಲಾಗಿತ್ತು.