ಸಾರಾಂಶ
ಅಂಕೋಲಾ ಬಳಿ ಸೀಬರ್ಡ್ ನೌಕಾನೆಲೆ ನಿರ್ಮಿಸುತ್ತಿರುವ ವಾಯುನೆಲೆ ವಿಸ್ತರಣೆ ಹಾಗೂ ನಾಗರಿಕ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಭೂಸ್ವಾಧೀನ ಪ್ರಕ್ರಿಯೆಗೆ ಪರಿಹಾರ ನೀಡುವಲ್ಲಿ ಉಂಟಾಗಿರುವ ತಾರತಮ್ಯ ನಿವಾರಿಸಲು ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಭರವಸೆ ನೀಡಿದ್ದಾರೆ.
ಕಾರವಾರ:
ಅಂಕೋಲಾ ಬಳಿ ಸೀಬರ್ಡ್ ನೌಕಾನೆಲೆ ನಿರ್ಮಿಸುತ್ತಿರುವ ವಾಯುನೆಲೆ ವಿಸ್ತರಣೆ ಹಾಗೂ ನಾಗರಿಕ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಭೂಸ್ವಾಧೀನ ಪ್ರಕ್ರಿಯೆಗೆ ಪರಿಹಾರ ನೀಡುವಲ್ಲಿ ಉಂಟಾಗಿರುವ ತಾರತಮ್ಯ ನಿವಾರಿಸಲು ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಭರವಸೆ ನೀಡಿದ್ದಾರೆ.ಶನಿವಾರ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಮತ್ತು ಶಾಸಕ ಸತೀಶ್ ಸೈಲ್ ನೇತೃತ್ವದ ನಿಯೋಗದೊಂದಿಗೆ ವಿಮಾನ ನಿಲ್ದಾಣ ನಿರ್ಮಾಣಕ್ಕೆ ನಡೆಯುತ್ತಿರುವ ಭೂಸ್ವಾಧೀನ ಪ್ರಕ್ರಿಯೆ, ಪರಿಹಾರದ ಕುರಿತು ಮಾತನಾಡಿದರು.
ಸಭೆಯಲ್ಲಿ ಮೂರು ಗ್ರಾಮಗಳ ನಿರಾಶ್ರಿತ ಕುಟುಂಬಗಳ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ, ಬಿಜೆಪಿ ಸರ್ಕಾರದಿಂದ ಆಗಿರುವ ಅನ್ಯಾಯ ಸರಿಪಡಿಸಬೇಕು ಎಂದು ತಿಳಿಸಿ, ವೈಜ್ಞಾನಿಕ ಹಾಗೂ ಗುಣಮಟ್ಟದ ಪರಿಹಾರ ನೀಡಲು ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಭೂಸ್ವಾಧೀನ ಪರಿಹಾರ, ಉದ್ಯೋಗ ಹಾಗೂ ನಿವೇಶನ ಕಳೆದುಕೊಂಡವರಿಗೆ ನಿವೇಶನ ಹಂಚಿಕೆ ಕುರಿತು ಚರ್ಚಿಸಲು ಮುಖ್ಯ ಕಾರ್ಯದರ್ಶಿ ಹಾಗೂ ಸಂಬಂಧಪಟ್ಟ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸುವಂತೆ ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ಅವರಿಗೆ ಸೂಚಿಸಿದರು.
ಸೀಬರ್ಡ್ ಮೊದಲ ಹಂತದ ಯೋಜನೆಯಡಿ ಭೂಮಿ ಕಳೆದುಕೊಂಡ ಕುಟುಂಬಗಳಿಗೆ ಉದ್ಯೋಗ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದರು.ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ಉಪಸ್ಥಿತರಿದ್ದರು,
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತಾ, ಮುಖ್ಯಮಂತ್ರಿಗಳ ಕಾರ್ಯದರ್ಶಿ ಜಿಯಾವುಲ್ಲಾ, ಹಣಕಾಸು ಇಲಾಖೆ ಕಾರ್ಯದರ್ಶಿ ಪಿ.ಸಿ. ಜಾಫರ್, ಮೂಲಸೌಕರ್ಯ ಇಲಾಖೆ ಜಂಟಿ ಕಾರ್ಯದರ್ಶಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸೇರಿದಂತೆ ಹಿರಿಯ ಅಧಿಕಾರಿಗಳು ಇದ್ದರು.