ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ಪ್ರತಿದಿನ 12000 ಕ್ಯುಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ರಾಜ್ಯಕ್ಕೆ ಶಿಫಾರಸು ಮಾಡಿದೆ.
ಕನ್ನಡಪ್ರಭ ವಾರ್ತೆ ಮೈಸೂರು
ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 12 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿರುವ ಆದೇಶ ಖಂಡಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ರೈತರು ನಗರದ ನಜರ್ ಬಾದ್ ನಲ್ಲಿರುವ ಪಿಡಬ್ಲ್ಯೂಡಿ ಗೆಸ್ಟ್ ಹೌಸ್ ಮುಂಭಾಗದಲ್ಲಿ ಮಂಗಳವಾರ ಪ್ರತಿಭಟಿಸಿದರು.ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ಪ್ರತಿದಿನ 12000 ಕ್ಯುಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ರಾಜ್ಯಕ್ಕೆ ಶಿಫಾರಸು ಮಾಡಿದೆ. ಈಗಾಗಲೇ ಕಬಿನಿ ಜಲಾಶಯದಿಂದ ತಮಿಳುನಾಡಿಗೆ ಗಣನೀಯ ಪ್ರಮಾಣದ ನೀರು ಹರಿದುಹೋಗಿದ್ದು, ಈಗಲೂ ನೀರು ಹರಿಯುತ್ತಿದೆ. ಹೀಗಿರುವಾಗ ರಾಜ್ಯಕ್ಕೆ ವ್ಯತಿರಿಕ್ತವಾಗಿ ನೀಡಲಾದ ಈ ಆದೇಶ ಅಸಮಂಜಸ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಯಾವುದೇ ಕಾರಣಕ್ಕೂ ಕೆಆರ್ ಎಸ್ ಜಲಾಶಯದಿಂದ ತಮಿಳುನಾಡಿಗೆ ನೀರು ಬಿಡುಗಡೆ ಮಾಡಬಾರದು. ರಾಜ್ಯದ ಜಲಾಶಯಗಳಿಂದ ತಕ್ಷಣವೇ ನಾಲೆಗಳಿಗೆ ನೀರು ಹರಿಸಿ, ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಹಾಗೂ ಒಣಗುತ್ತಿರುವ ಕೆರೆ ಕಟ್ಟೆಗಳನ್ನು ತುಂಬಿಸಲು ಆದ್ಯತೆ ನೀಡಬೇಕು ಎಂದು ಅವರು ಆಗ್ರಹಿಸಿದರು.ರಾಜ್ಯದ ರೈತರು ನೀರಿಲ್ಲದೆ ಸಂಕಷ್ಟದಲ್ಲಿರುವಾಗ ನೆರೆ ರಾಜ್ಯಕ್ಕೆ ನೀರು ಹರಿಸುವುದನ್ನು ಕೂಡಲೇ ತಡೆಯಬೇಕು. ನಮ್ಮ ಜಲಾಶಯಗಳಲ್ಲಿ ನೀರಿನ ಅಭಾವವಿರುವಾಗ, ತಮಿಳುನಾಡಿಗೆ ನೀರು ಬಿಡುಗಡೆ ಮಾಡುವುದು ರಾಜ್ಯದ ರೈತರಿಗೆ ಎಸಗುವ ಮಹಾ ಮೋಸ ಎಂದು ಅವರು ಕಿಡಿಕಾರಿದರು.
ಈ ವೇಳೆ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಮಾತನಾಡಿ, ನಾವು ನೀರನ್ನು ಹಿಡಿದಿಟ್ಟುಕೊಂಡಿಲ್ಲ. ಈಗಲೂ ತಮಿಳುನಾಡಿಗೆ ನೀರು ಹೋಗುತ್ತಿದೆ. ಪದೇ ಪದೇ ನೀರು ಬಿಡುವಂತೆ ಆದೇಶ ನೀಡುವ ಬದಲು, ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಅವಕಾಶ ನೀಡುವ ಬಗ್ಗೆ ಚಿಂತನೆ ನಡೆಸಬೇಕು ಎಂದು ಒತ್ತಾಯಿಸಿದರು.ಮೇಕೆದಾಟು ಅಣೆಕಟ್ಟು ನಿರ್ಮಾಣವಾದರೆ ಹೆಚ್ಚುವರಿ ನೀರನ್ನು ಸಂಗ್ರಹಿಸಬಹುದು. ಸಂಕಷ್ಟದ ಸಂದರ್ಭದಲ್ಲಿ ತಮಿಳುನಾಡಿಗೂ ನೀರು ಬಿಡಲು ಸಾಧ್ಯವಾಗುತ್ತದೆ. ಆದರೆ, ಸದ್ಯ ರೈತರಿಗೆ ಹಾಗೂ ನಾಲೆಗಳಿಗೂ ನೀರು ಸಿಗದ ಪರಿಸ್ಥಿತಿ ಇದೆ. ಇಂತಹ ಸಂದರ್ಭದಲ್ಲಿ ಪದೇ ಪದೇ ನೀರು ಬಿಡುವಂತೆ ಆದೇಶ ನೀಡುವುದು ಸರಿಯಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ರೈತ ಮುಖಂಡರಾದ ಅತ್ತಹಳ್ಳಿ ದೇವರಾಜ್, ಬರಡನಪುರ ನಾಗರಾಜ್, ಕಿರಗಸೂರು ಶಂಕರ್ ಮೊದಲಾದವರು ಇದ್ದರು.