ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಗೆಲುವು; ಬಿಜೆಪಿ ಕಾರ್ಯಕರ್ತರ ವಿಜಯೋತ್ಸವ

| Published : Nov 15 2025, 02:00 AM IST

ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಗೆಲುವು; ಬಿಜೆಪಿ ಕಾರ್ಯಕರ್ತರ ವಿಜಯೋತ್ಸವ
Share this Article
  • FB
  • TW
  • Linkdin
  • Email

ಸಾರಾಂಶ

ನಿತಿಶಕುಮಾರ್ ಅವರ ಅತ್ಯುತ್ತಮ ಆಡಳಿತ ಹಾಗೂ ಕೇಂದ್ರ ಸರ್ಕಾರದ ಜನಪ್ರಿಯ ಯೋಜನೆಗಳಿಂದಾಗಿ ಬಿಜೆಪಿ ಗೆಲುವು ಸಾಧಿಸಿದೆ

ಬಳ್ಳಾರಿ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ದಾಖಲೆಯ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಬಿಜೆಪಿಯ ಕಾರ್ಯಕರ್ತರು ನಗರದಲ್ಲಿ ವಿಜಯೋತ್ಸವ ಆಚರಿಸಿದರು.

ನಿತಿಶಕುಮಾರ್ ಅವರ ಅತ್ಯುತ್ತಮ ಆಡಳಿತ ಹಾಗೂ ಕೇಂದ್ರ ಸರ್ಕಾರದ ಜನಪ್ರಿಯ ಯೋಜನೆಗಳಿಂದಾಗಿ ಬಿಜೆಪಿ ಗೆಲುವು ಸಾಧಿಸಿದೆ. ಬಿಹಾರದ ಪ್ರಜ್ಞಾವಂತ ಮತದಾರರು ಕಾಂಗ್ರೆಸ್‌, ಆರ್‌ಜೆಡಿ ಪಕ್ಷಗಳಿಗೆ ಸೋಲುಣಿಸಿ ತಕ್ಕ ಉತ್ತರ ನೀಡಿದ್ದಾರೆ. ಜನಪರವಾಗಿ ಕೆಲಸ ನಿರ್ವಹಿಸುವ ಪಕ್ಷಗಳಿಗೆ ಜನರು ಮನ್ನಣೆ ನೀಡುತ್ತಾರೆ ಎಂಬ ಮಾತು ಬಿಹಾರದ ಫಲಿತಾಂಶದಿಂದ ಗೊತ್ತಾಗಿದೆ. ಈ ಚುನಾವಣೆಯಿಂದ ಬಿಜೆಪಿ ಹಾಗೂ ಜೆಡಿಯು ಮೈತ್ರಿಕೂಟ ಗಟ್ಟಿಯಾಗಿದೆ ಎಂಬ ಸಂದೇಶ ರವಾನಿಸಿದೆ. ಬಿಹಾರ ಚುನಾವಣೆಯಲ್ಲಿ ಕಾಂಗ್ರೆಸ್‌ ಹೀನಾಯ ಸೋಲುಂಡಿದ್ದು ಬರುವ ಎಲ್ಲ ಚುನಾವಣೆಗಳಲ್ಲೂ ಕಾಂಗ್ರೆಸ್ ಸೋಲಿನ ಸರಣಿ ಮುಂದುವರಿಸಲಿದೆ ಎಂದು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ತಿಳಿಸಿದರು.

ವಿಜಯೋತ್ಸವದಲ್ಲಿ ಪಾಲ್ಗೊಂಡಿದ್ದ ಮಾಜಿ ಶಾಸಕ ಜಿ.ಸೋಮಶೇಖರ ರೆಡ್ಡಿ ಮಾತನಾಡಿ, ಬಿಹಾರ ಚುನಾವಣೆ ದೇಶದಲ್ಲಿ ಇನ್ನು ಮುಂದೆ ಜರುಗುವ ಚುನಾವಣೆಗಳಿಗೆ ದಿಕ್ಸೂಚಿಯಂತಿದೆ. ಬಿಹಾರದ ಮತದಾರರು ಕೇಂದ್ರದ ಎನ್‌ಡಿಎ ಮೈತ್ರಿಕೂಟದ ಮೇಲೆ ಅಪಾರವಾದ ವಿಶ್ವಾಸವನ್ನಿಟ್ಟುಕೊಂಡು ಮತದಾನ ಮಾಡುವ ಮೂಲಕ ಅಭೂತಪೂರ್ವ ಗೆಲುವು ನೀಡಿದ್ದಾರೆ. ಪ್ರಮುಖವಾಗಿ ಬಿಹಾರದ ಮಹಿಳೆಯರು ಹೆಚ್ಚು ಮತದಾನ ಮಾಡಿದ್ದು ಎನ್‌ಡಿಎ ಕೂಟಕ್ಕೆ ಜಯ ತಂದುಕೊಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಜರುಗುವ ಚುನಾವಣೆಯಲ್ಲಿ ಸಹ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ. ಈ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್‌ ಮುಕ್ತ ಕರ್ನಾಟಕವನ್ನು ಜನರು ಆಯ್ಕೆ ಮಾಡಿಕೊಳ್ಳಲಿದ್ದಾರೆ ಎಂದು ತಿಳಿಸಿದರು.

ಬಿಹಾರದ ಚುನಾವಣೆಯ ಫಲಿತಾಂಶದ ಪರಿಣಾಮ ಕರ್ನಾಟಕ ಹಾಗೂ ಬಳ್ಳಾರಿಯ ಮೇಲೂ ಪರಿಣಾಮ ಬೀರಲಿದೆ. ಈ ವಿಜಯೋತ್ಸವ ದೇಶದ ಜನರ ವಿಜಯೋತ್ಸವವಾಗಿದೆ. ಬರುವ ದಿನಗಳಲ್ಲಿ ಕರ್ನಾಟಕದಲ್ಲೂ ಕಾಂಗ್ರೆಸ್‌ ಧೂಳೀಪಟವಾಗಲಿದೆ ಎಂಬ ಸ್ಪಷ್ಟ ಸಂದೇಶ ರವಾನಿಯಾದಂತಾಗಿದೆ ಎಂದು ವಿಜಯೋತ್ಸವದಲ್ಲಿ ಭಾಗಿಯಾಗಿದ್ದ ಪಕ್ಷದ ಜಿಲ್ಲಾಧ್ಯಕ್ಷ ಅನಿಲಕುಮಾರ್ ಮೋಕಾ ತಿಳಿಸಿದರು.

ನಗರದ ಗಡಗಿಚನ್ನಪ್ಪ ವೃತ್ತದಲ್ಲಿ ಜಮಾಯಿಸಿದ ನೂರಾರು ಪಕ್ಷದ ಕಾರ್ಯಕರ್ತರು ಭಾರತ ಮಾತಕೀ ಜೈ, ನರೇಂದ್ರ ಮೋದೀಜಿ ಅವರಿಗೆ ಜಯವಾಗಲಿ ಎಂದು ಘೋಷಣೆ ಕೂಗಿದರು. ಇದೇ ವೇಳೆ ಪಕ್ಷದ ಕಾರ್ಯಕರ್ತರು ಸಾರ್ವಜನಿಕರಿಗೆ ಸಿಹಿ ವಿತರಣೆ ಮಾಡುವ ಮೂಲಕ ಸಂತಸ ಹಂಚಿಕೊಂಡರು.

ಪಕ್ಷದ ಜಿಲ್ಲಾ ಪ್ರಮುಖರಾದ ಎಸ್‌.ಗುರುಲಿಂಗನಗೌಡ, ಜಿ.ವೆಂಕಟರಮಣ, ವಿಜಯಲಕ್ಷ್ಮಿ, ಅಡವಿಸ್ವಾಮಿ ಸೇರಿದಂತೆ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಸದಸ್ಯರು ವಿಜಯೋತ್ಸವದಲ್ಲಿ ಭಾಗವಹಿಸಿದ್ದರು.