ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್ ಗೆಲವಿಗೆ ಪಣ

| Published : Mar 30 2024, 12:49 AM IST

ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್ ಗೆಲವಿಗೆ ಪಣ
Share this Article
  • FB
  • TW
  • Linkdin
  • Email

ಸಾರಾಂಶ

ದೊಡ್ಡಬಳ್ಳಾಪುರ: ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರ ಗೆಲವಿಗೆ ಜೆಡಿಎಸ್‌ ಕಾರ್ಯಕರ್ತರು ಸಂಘಟಿತವಾಗಿ ಕಾರ್ಯನಿರ್ವಹಿಸುವಂತೆ ಪಕ್ಷದ ಜಿಲ್ಲಾಧ್ಯಕ್ಷ ಬಿ.ಮುನೇಗೌಡ ಹೇಳಿದರು.

ದೊಡ್ಡಬಳ್ಳಾಪುರ: ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರ ಗೆಲವಿಗೆ ಜೆಡಿಎಸ್‌ ಕಾರ್ಯಕರ್ತರು ಸಂಘಟಿತವಾಗಿ ಕಾರ್ಯನಿರ್ವಹಿಸುವಂತೆ ಪಕ್ಷದ ಜಿಲ್ಲಾಧ್ಯಕ್ಷ ಬಿ.ಮುನೇಗೌಡ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ-ಜೆಡಿಎಸ್‌ ಸಮ್ಮಿಲನ ಸಭೆಯನ್ನು ಏಪ್ರಿಲ್ 1ರ ಸೋಮವಾರ ದೊಡ್ಡಬಳ್ಳಾಪುರದ ಒಕ್ಕಲಿಗರ ಭವನದಲ್ಲಿ ಆಯೋಜಿಸಲಾಗಿದ್ದು, ಮೈತ್ರಿಕೂಟದ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರೊಂದಿಗೆ ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಭಾಗಿಯಾಗಲಿದ್ದಾರೆ. ಸ್ಥಳೀಯ ಶಾಸಕರು, ಬಿಜೆಪಿ ಹಾಗೂ ಜೆಡಿಎಸ್‌ ಮುಖಂಡರ ನಡುವೆ ಸಮನ್ವಯ ಹಾಗೂ ಪೂರಕ ಸಹಕಾರ ಅಗತ್ಯವಾಗಿದ್ದು, ಸಂಘಟಿತ ಹೋರಾಟದೊಂದಿಗೆ ಗೆಲವಿನ ಸಂಕಲ್ಪಕ್ಕೆ ವೇದಿಕೆಯಾಗಲಿದೆ ಎಂದರು.

ಜೆಡಿಎಸ್ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಭಾಗವಾಗಿದೆ. ಪಕ್ಷದ ರಾಷ್ಟ್ರೀಯ ನಾಯಕರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಅವರ ಆದೇಶದಂತೆ ಅಭ್ಯರ್ಥಿ ಸುಧಾಕರ್ ಅವರನ್ನು ಬೆಂಬಲಿಸಲಾಗುತ್ತಿದೆ. ಮುಖಂಡರು ಹಾಗೂ ಕಾರ್ಯಕರ್ತರಿಗೆ ಹೊಸ ಉತ್ಸಾಹ, ಶಕ್ತಿ ತುಂಬಲು ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಹಲವು ಪ್ರಮುಖ ನಾಯಕರು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಅಂದು ಬೆಳಗ್ಗೆ 11ಕ್ಕೆ ದೇವನಹಳ್ಳಿ, ಮಧ್ಯಾಹ್ನ 2 ಗಂಟೆಗೆ ದೊಡ್ಡಬಳ್ಳಾಪುರ ಮತ್ತು ಸಂಜೆ 4 ಗಂಟೆಗೆ ನೆಲಮಂಗಲದಲ್ಲಿ ಸಮ್ಮಿಲನ ಸಭೆ ನಡೆಯಲಿದೆ ಎಂದು ಮಾಹಿತಿ ನೀಡಿದರು.

ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಎಸ್.ರವಿಕುಮಾರ್‌ ಮಾತನಾಡಿ, ಉತ್ತಮ ಅಭಿವೃದ್ಧಿ ಕಾರ್ಯಗಳನ್ನು ಬೆಂಬಲಿಸುವ ನಿಟ್ಟಿನಲ್ಲಿ ಜೆಡಿಎಸ್‌ ವರಿಷ್ಠರಾದ ದೇವೇಗೌಡರು ಎನ್‌ಡಿಎ ಮೈತ್ರಿಯ ಭಾಗವಾಗಲು ನಿರ್ಧರಿಸಿದ್ದಾರೆ. ದೇಶದಲ್ಲಿ ಸುಭದ್ರ, ಸುಸ್ಥಿರ ಸರ್ಕಾರವನ್ನು ಅಧಿಕಾರಕ್ಕೆ ತರುವ ಮಹತ್ವಾಕಾಂಕ್ಷೆ ಈಡೇರಿಕೆಗಾಗಿ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಮೈತ್ರಿಕೂಟದ ಅಭ್ಯರ್ಥಿ ಗೆಲುವಿಗೆ ಎಲ್ಲರೂ ಶ್ರಮಿಸಬೇಕು. ಸಮ್ಮಿಲನ ಸಭೆಯಲ್ಲಿ ಉಭಯ ಪಕ್ಷಗಳ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದರು.

ಗೋಷ್ಠಿಯಲ್ಲಿ ಜೆಡಿಎಸ್ ತಾಲೂಕು ಅಧ್ಯಕ್ಷ ಲಕ್ಷ್ಮೀಪತಯ್ಯ, ನಗರಸಭೆ ಮಾಜಿ ಅಧ್ಯಕ್ಷೆ ಶಾಂತಮ್ಮ, ಮಹಿಳಾ ಘಟಕದ ಅಧ್ಯಕ್ಷೆ ದೇವರಾಜಮ್ಮ, ಮುಖಂಡರಾದ ಕುಂಟನಹಳ್ಳಿ ಮಂಜುನಾಥ್ , ರಂಗಸ್ವಾಮಿ, ಸಿದ್ದಪ್ಪ, ಕೆಂಪೇಗೌಡ, ಜಗನ್ನಾಥ್ ಚಾರ್, ನರಸಿಂಹಗೌಡ, ಅಶ್ವಥ್ಧನಾರಾಯಣ್ ಇತರರು ಉಪಸ್ಥಿತರಿದ್ದರು.

29ಕೆಡಿಬಿಪಿ2- ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.