ಸಾರಾಂಶ
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಡಾ। ಕೆ.ಸುಧಾಕರ್ ಗುರುವಾರ ನಾಮಪತ್ರ ಸಲ್ಲಿಸಲಿದ್ದು, ಈ ವೇಳೆ ಬೃಹತ್ ರೋಡ್ ಶೋ ನಡೆಯಲಿದೆ.
ಕ್ಷೇತ್ರದಲ್ಲಿ ಈಗಾಗಲೇ ಬಿಜೆಪಿ-ಜೆಡಿಎಸ್ ಮೈತ್ರಿ ಇರುವುದರಿಂದ ಕ್ಷೇತ್ರದೆಲ್ಲೆಡೆ ಡಾ। ಕೆ.ಸುಧಾಕರ್ ಪರ ಒಲವು ಕಂಡುಬಂದಿದೆ. ಈ ಮಹಾ ಶಕ್ತಿಯೊಂದಿಗೆ ಡಾ। ಕೆ.ಸುಧಾಕರ್ ನಾಮಪತ್ರ ಸಲ್ಲಿಸಲಿದ್ದಾರೆ.
ಬೆಳಗ್ಗೆ ಡಾ। ಕೆ.ಸುಧಾಕರ್ ದೇವನಹಳ್ಳಿಯ ನಾಡಪ್ರಭು ಕೆಂಪೇಗೌಡ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ. ನಂತರ ಚಿತ್ರವನದ ಯೋಗಿ ನಾರಾಯಣ ದೇವಸ್ಥಾನ ಹಾಗೂ ವೀರಾಂಜನೇಯ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿದ್ದಾರೆ. ಇದೇ ವೇಳೆ ಪೌರಕಾರ್ಮಿಕರು, ಆಟೋ ಚಾಲಕರು, ರೈತರು, ಮಹಿಳೆಯರು ಹಾಗೂ ಹಿರಿಯ ನಾಗರಿಕರ ಆಶೀರ್ವಾದ ಪಡೆಯಲಿದ್ದಾರೆ. ನಂತರ ಚಿಕ್ಕಬಳ್ಳಾಪುರದ ಡಾ। ಬಿ.ಆರ್.ಅಂಬೇಡ್ಕರ್ ಪ್ರತಿಮೆ ಹಾಗೂ ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ.
ಬೆಳಗ್ಗೆ 11ಕ್ಕೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ. ಬಳಿಕ ಮಧ್ಯಾಹ್ನ 3ಕ್ಕೆ ಚಿಕ್ಕಬಳ್ಳಾಪುರದ ಒಕ್ಕಲಿಗರ ಕಲ್ಯಾಣ ಮಂಟಪದಿಂದ ಶಿಡ್ಲಘಟ್ಟ ವೃತ್ತದವರೆಗೆ ರೋಡ್ ಶೋ ನಡೆಯಲಿದೆ. ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ರೋಡ್ ಶೋನಲ್ಲಿ ಭಾಗವಹಿಸಲಿದ್ದಾರೆ.
ಹಿರಿಯ ನಾಯಕರಾದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ, ಬೆಂಗಳೂರು ಕೇಂದ್ರ ಲೋಕಸಭಾ ಅಭ್ಯರ್ಥಿ ಪಿ.ಸಿ.ಮೋಹನ್, ಮಾಜಿ ಶಾಸಕ ಅರವಿಂದ ಲಿಂಬಾವಳಿ, ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ತಾರಾ ಅನುರಾಧ ಮತ್ತಿತರ ಮುಖಂಡರು ಭಾಗವಹಿಸಲಿದ್ದಾರೆ. ಶಿಡ್ಲಘಟ್ಟ ವೃತ್ತದಲ್ಲಿ ಜನರನ್ನುದ್ದೇಶಿಸಿ ಎಲ್ಲ ನಾಯಕರು ಮಾತನಾಡಲಿದ್ದಾರೆ.
;Resize=(128,128))
;Resize=(128,128))
;Resize=(128,128))
;Resize=(128,128))