ಕಳೆದ ಮೂರು ವರ್ಷಗಳಿಂದ ಸರ್ಕಾರದಲ್ಲಿ ಕುರ್ಚಿ ಕಿತ್ತಾಟ ನಡೆಯುತ್ತಿದ್ದು, ಇದೀಗ ಸ್ಟಿಂಗ್ ಪ್ರಕರಣದ ವಿಚಾರವೂ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದರಿಂದ ರಾಜ್ಯದ ಜನತೆ ಬೇಸತ್ತಿದ್ದಾರೆ.

ಕಾರವಾರ: ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದ್ದು, ಜನರು ಆಡಳಿತದಿಂದ ಬೇಸತ್ತಿದ್ದಾರೆ. ಹೀಗಾಗಿ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿಕೂಟದ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಜೆಡಿಎಸ್ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ರಶ್ಮಿ ರಾಮೇಗೌಡ ವಿಶ್ವಾಸ ವ್ಯಕ್ತಪಡಿಸಿದರು.ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದ ಅಭಿವೃದ್ಧಿ 10 ವರ್ಷ ಹಿಂದಕ್ಕೆ ಹೋಗಿದೆ. ಪ್ರಸ್ತುತ ಆಡಳಿತದಲ್ಲಿ ಅಭಿವೃದ್ಧಿ ಶೂನ್ಯವಾಗಿದ್ದು, ಗ್ಯಾರಂಟಿ ಯೋಜನೆಗಳ ಪ್ರಚಾರಕ್ಕಷ್ಟೇ ಸರ್ಕಾರ ಸೀಮಿತವಾಗಿದೆ ಎಂದು ಟೀಕಿಸಿದರು.ಕಳೆದ ಮೂರು ವರ್ಷಗಳಿಂದ ಸರ್ಕಾರದಲ್ಲಿ ಕುರ್ಚಿ ಕಿತ್ತಾಟ ನಡೆಯುತ್ತಿದ್ದು, ಇದೀಗ ಸ್ಟಿಂಗ್ ಪ್ರಕರಣದ ವಿಚಾರವೂ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದರಿಂದ ರಾಜ್ಯದ ಜನತೆ ಬೇಸತ್ತಿದ್ದಾರೆ. ರೈತರು, ವಿದ್ಯಾರ್ಥಿಗಳು ಸೇರಿದಂತೆ ಎಲ್ಲ ವರ್ಗಗಳ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡುವ ಸರ್ಕಾರವನ್ನು 2028ರಲ್ಲಿ ಎನ್‌ಡಿಎ ಮೈತ್ರಿಕೂಟ ರಚಿಸಲಿದೆ ಎಂದರು.ಜೆಡಿಎಸ್ ಮಹಾಪ್ರಧಾನ ಕಾರ್ಯದರ್ಶಿ ಜಾಹ್ನವಿ ಮಾತನಾಡಿ, ನೆರೆಯ ಗೋವಾ ಮಾದರಿಯಲ್ಲಿ ಕಾರವಾರದಲ್ಲಿಯೂ ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡಿ ಅಭಿವೃದ್ಧಿಪಡಿಸಬೇಕಿದೆ. ಆನಂದ ಅಸ್ನೋಟಿಕರ್ ಅವರು ಎನ್‌ಡಿಎ ಅಭ್ಯರ್ಥಿಯಾಗಿ ಆಯ್ಕೆಯಾದರೆ ಕಾರವಾರದ ಮೀನುಗಾರರ ಸಮಸ್ಯೆಗಳು, ಕಡಲಕೊರೆತ ನಿಯಂತ್ರಣ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿಗೆ ಶ್ರಮಿಸಲಿದ್ದಾರೆ ಎಂದು ಹೇಳಿದರು.ಜೆಡಿಎಸ್ ಜಿಲ್ಲಾಧ್ಯಕ್ಷ ಸೂರಜ್ ಸೋನಿ ಮಾತನಾಡಿ, ದೇಶದ ಸುಭದ್ರ ಆಡಳಿತ ಹಾಗೂ ರೈತರ ಹಿತದೃಷ್ಟಿಯಿಂದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಬಲ ನೀಡಿದ್ದಾರೆ ಎಂದರು.ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಚಿವ ಆನಂದ ಅಸ್ನೋಟಿಕರ್, ಜೆಡಿಎಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಮೋಹಿನಿ ನಾಯ್ಕ, ಸುವರ್ಣ ಸೇರಿದಂತೆ ಜೆಡಿಎಸ್ ಮುಖಂಡರು ಉಪಸ್ಥಿತರಿದ್ದರು.

ಸಾಕ್ಷ್ಯಾಧಾರಗಳಿಲ್ಲದೇ ಹೇಳಿಕೆ ನೀಡಿಲ್ಲ: ಸ್ಟಿಂಗ್ ಪ್ರಕರಣದ ಕುರಿತು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜೆಡಿಎಸ್ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ರಶ್ಮಿ ರಾಮೇಗೌಡ ಅವರು, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಸಾಕ್ಷ್ಯಾಧಾರಗಳಿಲ್ಲದೆ ಯಾವುದೇ ಹೇಳಿಕೆ ನೀಡುವುದಿಲ್ಲ. ಕಾಂಗ್ರೆಸ್ ನಾಯಕರು ಹಾಗೂ ಗೃಹ ಸಚಿವರು ತಮ್ಮ ಸ್ವಂತ ಬಲದಿಂದ ಬೆಳೆಯದೆ ತಂದೆಯ ಹೆಸರು ಮತ್ತು ಜಾತಿಯನ್ನು ಬಳಸಿಕೊಂಡು ಅಧಿಕಾರಕ್ಕೆ ಬಂದಿದ್ದಾರೆ ಎಂದು ಟೀಕಿಸಿದರು. ಕುಮಾರಸ್ವಾಮಿ ವಿರುದ್ಧ ಸುಳ್ಳು ಹಾಗೂ ಆಧಾರರಹಿತ ಆರೋಪಗಳನ್ನು ಮಾಡುವುದನ್ನು ಬಿಟ್ಟು, ಪ್ರಕರಣದ ಕುರಿತು ನ್ಯಾಯಸಮ್ಮತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.