ಸಾರಾಂಶ
ಕನ್ನಡಪ್ರಭ ವಾರ್ತೆ ಬೆಳಗಾವಿ
ಎನ್‌ಡಿಆರ್‌ಎಫ್ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡುತ್ತಿಲ್ಲ. ಬಿಜೆಪಿಯವರು ಕಾಮಾಲೆ ಕಣ್ಣಿನಿಂದ ಎಲ್ಲವನ್ನು ನೋಡುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳ ಯಶಸ್ಸು ಅವರಲ್ಲಿ ಆತಂಕವನ್ನುಂಟು ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರನ್ನು ಆತಂಕಗೊಳಿಸಿದೆ. ನಮ್ಮ ಗ್ಯಾರಂಟಿಗಳನ್ನು ಬಿಹಾರ, ದೆಹಲಿ, ಮಹಾರಾಷ್ಟ್ರ, ಮಧ್ಯಪ್ರದೇಶ, ಹರಿಯಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಅನುಕರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಗ್ಯಾರಂಟಿಗಳ ಅನುಷ್ಠಾನ ಸಾಧ್ಯವೇ ಇಲ್ಲ ಎಂದಿದ್ದರು. ಆದರೆ, ಕಾಂಗ್ರೆಸ್ ಸರ್ಕಾರ, ನುಡಿದಂತೆ ನಡೆದು ಗ್ಯಾರಂಟಿಗಳನ್ನು ತಪ್ಪದೇ ನೀಡುತ್ತಿದೆ ಎಂದರು.
ಸಿಎಂ ಬದಲಾವಣೆ ವಿಚಾರವಾಗಿ ಬಿಜೆಪಿಯವರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ, ಮುಖ್ಯಮಂತ್ರಿ ಹುದ್ದೆ ಬದಲಾವಣೆ ವಿಷಯ ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರ. ಇದಕ್ಕೆ ಬಿಜೆಪಿ ತಲೆಕೆಡಿಸಿಕೊಳ್ಳುವುದು ಬೇಕಿಲ್ಲ. ಅವರೇನೂ ನಮ್ಮ ಪಕ್ಷದ ಹೈಕಮಾಂಡೇ ಎಂದು ಪ್ರಶ್ನಿಸಿದರು.ಪ್ರತಿ ಜಿಲ್ಲೆಗೆ ಒಂದು ವೈದ್ಯಕೀಯ ಕಾಲೇಜು, ಸ್ಪೆಷಾಲಿಟಿ ಆಸ್ಪತ್ರೆ
ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಒಂದು ವೈದ್ಯಕೀಯ ಕಾಲೇಜು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಒದಗಿಸುವುದು ಸರ್ಕಾರದ ಯೋಜನೆಯಾಗಿದೆ. ಈ ನಿಟ್ಟಿನಲ್ಲಿ ಈಗಾಗಲೇ 22 ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜುಗಳನ್ನು ಆರಂಭಿಸಲಾಗಿದೆ. ಉಳಿದ ಕಡೆಗಳಲ್ಲೂ ಶೀಘ್ರವೇ ವೈದ್ಯಕೀಯ ಕಾಲೇಜನ್ನು ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.ನಗರದ ಬಿಮ್ಸ್ ಆವರಣದಲ್ಲಿ ಶನಿವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ/ಚಾಲನೆ ನೀಡಿ ಅವರು ಮಾತನಾಡಿದರು. ಬಡವರು, ತಳ ಸಮುದಾಯದ ಜನರು ಹಾಗೂ ಅವಕಾಶ ವಂಚಿತರಿಗೆ ಉತ್ತಮ ಸೌಲಭ್ಯ ಒದಗಿಸುವುದು ಸರ್ಕಾರದ ಆದ್ಯತೆಯಾಗಿದೆ. ರಾಜ್ಯದಲ್ಲಿ ಅಸಮಾನತೆ ತೊಡೆದು ಹಾಕಲು ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ರೂಪಿಸಿದೆ ಎಂದರು.ಬಡವರಿಗೆ ಅತ್ಯುತ್ತಮ ವೈದ್ಯಕೀಯ ಸೌಲಭ್ಯ ಒದಗಿಸುವುದು ಸರ್ಕಾರದ ಜವಾಬ್ದಾರಿ ಮತ್ತು ಕರ್ತವ್ಯ. ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಲಕ್ಷಾಂತರ ಜನರಿಗೆ ನೆರವು ನೀಡಲಾಗುತ್ತಿದೆ. ಬಿಮ್ಸ್‌ನಂತಹ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ. ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.
ಬೆಳಗಾವಿ ನಗರಕ್ಕೆ ನೂರು ಎಲೆಕ್ಟ್ರಿಕ್ ಬಸ್:ಸ್ಮಾರ್ಟ್ ಸಿಟಿ ಯೋಜನೆಯಡಿ ಬೆಳಗಾವಿ ನಗರ ಬಸ್ ನಿಲ್ದಾಣ ನಿರ್ಮಿಸಲಾಗಿದೆ. 700 ಬಸ್‌ಗಳು ಜನ ಸೇವೆಗೆ ಅಣಿಯಾಗಿವೆ. ಅಲ್ಲದೇ, ಶೀಘ್ರದಲ್ಲಿಯೇ 100 ವಿದ್ಯುತ್ ಚಾಲಿತ ಬಸ್‌ಗಳನ್ನು ಬೆಳಗಾವಿ ನಗರಕ್ಕೆ ನೀಡಲಾಗುವುದು ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.ರಾಜ್ಯದಲ್ಲಿ 10 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ:
ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಅತಿವೃಷ್ಟಿಯಿಂದ ಅಪಾರ ಪ್ರಮಾಣದ ಬೆಳೆಹಾನಿಯಾಗಿದೆ. ರಾಜ್ಯದಲ್ಲಿ ಹತ್ತು ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿಯಾಗಿದೆ. ಖುಷ್ಕಿ ಬೆಳೆಹಾನಿಗೆ ₹8.5 ಸಾವಿರ ಪರಿಹಾರದಂತೆ ಹಾಗೂ ಎನ್‌ಡಿಆರ್‌ಎಫ್ ಮಾರ್ಗಸೂಚಿ ₹8.5 ಸಾವಿರ ಸೇರಿಸಿ ಒಟ್ಟು ₹17 ಸಾವಿರ ಪರಿಹಾರ ನೀಡಲಾಗುತ್ತಿದೆ. ನೀರಾವರಿ ಬೆಳೆಹಾನಿಗೆ ₹21,500 ಪರಿಹಾರ ನೀಡಲು ನಿರ್ಧರಿಸಲಾಗಿದೆ. ಇನ್ನೂ ಅನೇಕ ಕಡೆ ಮಳೆಯಾಗುತ್ತಿದ್ದು, ಬೆಳೆಹಾನಿ ಸಮೀಕ್ಷೆ ಬಳಿಕ ಪರಿಹಾರ ವಿತರಣೆ ಮಾಡಲಾಗುವುದು ಎಂದು ಹೇಳಿದರು.ಎಸ್ಸಿಎಸ್ಟಿ ಹಣ ಗ್ಯಾರಂಟಿಗೆ ಬಳಸಿಲ್ವಾ: ಅಶೋಕ್ ಪ್ರಶ್ನೆವಿಜಯಪುರ: ಎಸ್ಸಿ, ಎಸ್ಟಿ ಹಣವನ್ನು ಆ ಸಮಾಜದ ಕಲ್ಯಾಣಕ್ಕೆ ಹೊರತುಪಡಿಸಿ, ಬೇರೆ ಯಾವುದಕ್ಕೂ ಬಳಸಲು ಆಗಲ್ಲ. ಆದರೂ, ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗೆ ಈ ಹಣ ಬಳಸಲಿಲ್ವಾ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನಿಸಿದ್ದಾರೆ.
ವಿಜಯಪುರ ಜಿಲ್ಲೆ ದೇವಣಗಾಂವ ಗ್ರಾಮದಲ್ಲಿ ಶನಿವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಎನ್‌ಡಿಆರ್‌ಎಫ್ ಹಣವನ್ನು ಗ್ಯಾರಂಟಿಗೆ ಬಳಸಿಲ್ಲ, ಬಳಸಲೂ ಸಾಧ್ಯವೂ ಇಲ್ಲ. ಬಿಜೆಪಿಗರದು ಕಾಮಾಲೆ ಕಣ್ಣು ಎಂಬ ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ಪ್ರತಿಕ್ರಿಯಿಸಿ, ಎಸ್ ಸಿ ,ಎಸ್ ಟಿ ಹಣವನ್ನು ಕೂಡ ಯಾವುದಕ್ಕೂ ಬಳಸಲು ಸಾಧ್ಯವಿಲ್ಲ. ಆದರೂ ಗ್ಯಾರಂಟಿಗೆ ಬಳಸಲಿಲ್ವಾ?. ಅದೇ ರೀತಿ, ಎನ್‌ಡಿಆರ್‌ಎಫ್ ಹಣ ಕೂಡ ಬಳಕೆ ಆಗಿಲ್ಲ ಅಂತಾ ಹೇಗೆ ಹೇಳೋದು? ಅವರ ಪಕ್ಷದ ಅನೇಕ ನಾಯಕರೇ, ಶಾಸಕರೇ ಅನೇಕ ಬಾರಿ ಗ್ಯಾರಂಟಿ ಯೋಜನೆಗಳ ದುರ್ಬಳಕೆ ಆಗಿದೆ ಎಂದು ಹೇಳಿದ್ದಾರೆ. ಹಾಗಾದರೆ ಅವರಿಗೆಲ್ಲ ಕಾಮಾಲೆ ಇದೆಯಾ? ಇದ್ದರೆ, ಅವರನ್ನೆಲ್ಲಾ ಈ ಕೂಡಲೇ ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಿ ಎಂದು ಲೇವಡಿ ಮಾಡಿದರು.