ಚನ್ನಪಟ್ಟಣ-ರಾಮನಗರ ನಡುವೆ ಕೈಗಾರಿಕೆ ಸ್ಥಾಪನೆ

| Published : Oct 29 2024, 12:47 AM IST

ಸಾರಾಂಶ

ಚನ್ನಪಟ್ಟಣ: ಚನ್ನಪಟ್ಟಣ - ರಾಮನಗರ ಅವಳಿ ನಗರ ಮಾಡುವುದು ನನ್ನ ಕನಸು. ಇಷ್ಟೇ ಅಲ್ಲದೆ ಉಭಯ ನಗರಗಳ ನಡುವೆ ಸ್ಥಳೀಯರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಬೃಹತ್ ಕೈಗಾರಿಕೆ ಒಂದನ್ನು ಸ್ಥಾಪನೆ ಮಾಡುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದರು.

ಚನ್ನಪಟ್ಟಣ: ಚನ್ನಪಟ್ಟಣ - ರಾಮನಗರ ಅವಳಿ ನಗರ ಮಾಡುವುದು ನನ್ನ ಕನಸು. ಇಷ್ಟೇ ಅಲ್ಲದೆ ಉಭಯ ನಗರಗಳ ನಡುವೆ ಸ್ಥಳೀಯರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಬೃಹತ್ ಕೈಗಾರಿಕೆ ಒಂದನ್ನು ಸ್ಥಾಪನೆ ಮಾಡುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದರು.

ಚನ್ನಪಟ್ಟಣ ಕ್ಷೇತ್ರ ವ್ಯಾಪ್ತಿಯ ಕೂಡ್ಲೂರು ಗ್ರಾಮದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಭಾಷಣ ಮಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ನನ್ನ ಮೇಲೆ ನಂಬಿಕೆ ಇಟ್ಟು ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆಗಳನ್ನು ನೀಡಿದ್ದಾರೆ. ಎರಡೂ ಮಹತ್ವದ ಖಾತೆಗಳಾಗಿದ್ದು, ದೇವರ ಅನುಗ್ರಹ, ಜನರ ಆಶೀರ್ವಾದದಿಂದ ಸಿಕ್ಕಿರುವ ಈ ಅವಕಾಶದಿಂದ ರಾಮನಗರ ಜಿಲ್ಲೆಯ ಜನರಿಗೆ ಏನಾದರೂ ಒಳ್ಳೆಯ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಕಾಂಗ್ರೆಸ್ ನಾಯಕರು ನನ್ನನ್ನು ನಿಂದನೆ ಮಾಡಿಕೊಂಡು ಪ್ರಚಾರ ಮಾಡುತ್ತಿದ್ದಾರೆ. ನಾನು ಅಭಿವೃದ್ಧಿ ವಿಚಾರ ಇಟ್ಟುಕೊಂಡು ಪ್ರಚಾರ ಮಾಡುತ್ತಿದ್ದೇನೆ. ಅವರಿಗೂ ನನಗೂ ಇರುವ ವ್ಯತ್ಯಾಸ ಇಷ್ಟೇ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಹರಿಹಾಯ್ದರು.

ನಾವು ಟಿಕೆಟ್ ಕೊಡುತ್ತೇವೆ ಎಂದೆವು. ಬಿಜೆಪಿ ಕೂಡ ಟಿಕೆಟ್ ಕೊಡಲು ಮುಂದಾಗಿತ್ತು. ಬಿಜೆಪಿ ವರಿಷ್ಠರ ಮಾತಿಗೆ ತಲೆಬಾಗಿ ನಾವು ಚನ್ನಪಟ್ಟಣ ಕ್ಷೇತ್ರವನ್ನು ಬಿಟ್ಟುಕೊಡಲು ನಿರ್ಧಾರ ಮಾಡಿದ್ದೆವು. ಆದರೆ, ಎಲ್ಲರ ಮಾತನ್ನು ಧಿಕ್ಕರಿಸಿ, ಕಾಲಿನಲ್ಲಿ ಒದ್ದು ಅವರು ಕಾಂಗ್ರೆಸ್ ಸೇರಿಕೊಂಡರು. ಈಗ ನೋಡಿದರೆ ಹಾದಿಬೀದಿಯಲ್ಲಿ ಸುಳ್ಳು ಪ್ರಚಾರ ಮಾಡಿಕೊಂಡು ಓಡಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಅವರನ್ನು ಪರೋಕ್ಷವಾಗಿ ಟೀಕಿಸಿದರು.

ನನ್ನ ಬಗ್ಗೆ, ನನ್ನ ತಂದೆಯ ಬಗ್ಗೆ ಬಹಳ ಕೀಳುಮಟ್ಟದ ಭಾಷೆ ಬಳಕೆ ಮಾಡಿಕೊಂಡು ಟೀಕೆ ಮಾಡುತ್ತಿದ್ದಾರೆ. ಅವರ ಪದ ಬಳಕೆಯ ಬಗ್ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ಚನ್ನಪಟ್ಟಣ ಜನರೇ ತೀರ್ಪು ಕೊಡುತ್ತಾರೆ ಎಂದು ಹೇಳಿದರು.

ನಿವೇಶನಗಳನ್ನು ಮಾಡಿಕೊಳ್ಳಬೇಡಿ:

ಕುಮಾರಸ್ವಾಮಿ ಅವರಿಗೆ ಚನ್ನಪಟ್ಟಣದಲ್ಲಿ ಎಷ್ಟು ಕೆರೆಗಳು ಇವೆ ಎಂಬುದೇ ಗೊತ್ತಿಲ್ಲ ಎಂದು ಕಾಂಗ್ರೆಸ್ ಅಭ್ಯರ್ಥಿ ಹೇಳಿದ್ದಾರೆ. ಆದರೆ, ನಾನು ಏನು ಮಾಡಿದ್ದೇನೆ ಎಂಬುದು ಹಳ್ಳಿಗಳಿಗೆ ಹೋಗಿ ನೋಡಿದರೆ ಗೊತ್ತಾಗುತ್ತದೆ ಎಂದು ಕುಮಾರಸ್ವಾಮಿ ತಿರುಗೇಟು ನೀಡಿದರು.

ನಿಮಗೆ ನೀಡಲಾಗಿರುವ ನಿವೇಶನಗಳನ್ನು ಹಾಗೆಯೇ ಇಟ್ಟುಕೊಳ್ಳಿ. ಉಳಿದ ಗ್ರಾಮಸ್ಥರಿಗೂ ಹಕ್ಕುಪತ್ರ ಕೊಡಿಸಲಾಗುವುದು. ಮನೆಗಳನ್ನು ಕಟ್ಟಿಕೊಳ್ಳಲು ಸರ್ಕಾರದಿಂದ ನೆರವು ಕೊಡಿಸಲಾಗುವುದು ಎಂದು ಕುಮಾರಸ್ವಾಮಿ ಭರವಸೆ ನೀಡಿದರು.

ನಿಖಿಲ್ ಒಳ್ಳೆಯ ನಾಯಕರಾಗುತ್ತಾರೆ:

ಚನ್ನಪಟ್ಟಣದಲ್ಲಿ ನಡೆದ ಪ್ರಚಾರದಲ್ಲಿ ಕುಮಾರಸ್ವಾಮಿ ಅವರಿಗೆ ಸಾಥ್ ನೀಡಿದ ಮೈಸೂರು ಕೊಡಗು ಕ್ಷೇತ್ರದ ಸಂಸದ ಯದುವೀರ್ ಒಡೆಯರ್, ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತ ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ. ಅವರ ಸಂಪುಟದಲ್ಲಿ ಕುಮಾರಸ್ವಾಮಿ ಅವರು ಅತ್ಯಂತ ಕ್ರಿಯಾಶೀಲರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.

ರಾಜ್ಯ ಕಾಂಗ್ರೆಸ್ ಸರ್ಕಾರ ಬರೀ ಭ್ರಷ್ಟಾಚಾರದಲ್ಲಿ ನಿರತವಾಗಿದೆ. ಅಧಿಕಾರಕ್ಕೆ ಬಂದಾಗಿನಿಂದ ಹಗರಣಗಳಲ್ಲಿಯೇ ಮುಳುಗಿದೆ. ಅದರಲ್ಲಿ ಮುಡಾ ಹಗರಣದ ವಿರುದ್ಧ ಬೆಂಗಳೂರಿನಿಂದ ಮೈಸೂರುವರೆಗೂ ನಡೆದ ಪಾದಯಾತ್ರೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರೂ ಪ್ರಮುಖ ಪಾತ್ರ ವಹಿಸಿದ್ದರು. ಅವರಿಗೆ ಮುಂದೆ ಒಳ್ಳೆಯ ನಾಯಕನಾಗಿ ಬೆಳೆಯುವ ಎಲ್ಲಾ ಅವಕಾಶಗಳು ಇವೆ. ಅಂತಹ ಅವಕಾಶಕ್ಕೆ ಚನ್ನಪಟ್ಟಣದ ಜನರೇ ನಾಂದಿ ಹಾಡಬೇಕು ಎಂದು ಒಡೆಯರ್ ಮನವಿ ಮಾಡಿದರು.

ಇದಕ್ಕೂ ಮೊದಲು ಕೇಂದ್ರ ಸಚಿವರು ಯದುವೀರ್ ಅವರೊಂದಿಗೆ ಪಕ್ಷದ ಹಿರಿಯ ಮುಖಂಡ ಟಿ.ಪಿ.ಪುಟ್ಟಸಿದ್ದೇಗೌಡ ಅವರ ಮನೆಗೆ ಭೇಟಿ ನೀಡಿ ಮತಯಾಚನೆ ಮಾಡಿದರು.

28ಕೆಆರ್ ಎಂಎನ್ 1.ಜೆಪಿಜಿ

ಚನ್ನಪಟ್ಟಣ ಕ್ಷೇತ್ರ ವ್ಯಾಪ್ತಿಯ ಕೂಡ್ಲೂರು ಗ್ರಾಮದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಭಾಷಣ ಮಾಡಿದರು.