ಕೆಎಫ್‌ಡಿ ಶಂಕಿತ ಪ್ರಕರಣಗಳು ಕಂಡುಬಂದಲ್ಲಿ ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆ, ಸುಬ್ಬಯ್ಯ ಮೆಡಿಕಲ್ ಕಾಲೇಜು ಮತ್ತು ಕೆ.ಎಂ.ಸಿ. ಮಣಿಪಾಲ್‌ನಲ್ಲಿ ಒಳರೋಗಿಯಾಗಿ ದಾಖಲಾದ ಪ್ರಕರಣಗಳಿಗೆ ಉಚಿತವಾಗಿ ಚಿಕಿತ್ಸೆಯನ್ನು ನೀಡಲು ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು.
ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಕೆಎಫ್‌ಡಿ ಶಂಕಿತ ಪ್ರಕರಣಗಳು ಕಂಡುಬಂದಲ್ಲಿ ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆ, ಸುಬ್ಬಯ್ಯ ಮೆಡಿಕಲ್ ಕಾಲೇಜು ಮತ್ತು ಕೆ.ಎಂ.ಸಿ. ಮಣಿಪಾಲ್‌ನಲ್ಲಿ ಒಳರೋಗಿಯಾಗಿ ದಾಖಲಾದ ಪ್ರಕರಣಗಳಿಗೆ ಉಚಿತವಾಗಿ ಚಿಕಿತ್ಸೆಯನ್ನು ನೀಡಲು ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು.ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆರೋಗ್ಯ ಇಲಾಖೆ ವತಿಯಿಂದ ಅನುಷ್ಟಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳ ಕುರಿತು ಏರ್ಪಡಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿ, ಕಳೆದ ಜನವರಿ ಮಾಹೆಯಿಂದೀಚೆಗೆ ಜಿಲ್ಲೆಯಲ್ಲಿ 7380ರಕ್ತದ ಮಾದರಿಗಳನ್ನು ಪರೀಕ್ಷಿಸಿದ್ದು, 76 ಪ್ರಕರಣಗಳನ್ನು ಗುರುತಿಸಿ, ಸಕಾಲಿಕವಾಗಿ ಚಿಕಿತ್ಸೆ ನೀಡಲಾಗಿದೆ. ಎರಡು ಜೀವಹಾನಿ ಪ್ರಕರಣಗಳು ದಾಖಲಾಗಿವೆ. ಅಸಹಜವಾಗಿ 185 ಮಂಗಗಳ ಸಾವನ್ನೂ ಗುರುತಿಸಿ, ಎಚ್ಚರಿಕೆ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.
ಎಲ್ಲಾ ತಾಲೂಕುಗಳ ವೈದ್ಯಾಧಿಕಾರಿಗಳು ತಮ್ಮ ಕಾರ್ಯಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ತಾಲೂಕು ಮಟ್ಟದ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸಭೆಗಳನ್ನು ಕರೆದು, ಅಗತ್ಯ ಕ್ರಮಗಳನ್ನು ನಿರ್ವಹಿಸಲು ಇಲಾಖೆಯ ಅಧೀನ ಅಧಿಕಾರಿ-ಸಿಬ್ಬಂದಿಗೆ ಸೂಚನೆ ರವಾನಿಸಬೇಕು. ಸಮಸ್ಯಾತ್ಮಕ ಪ್ರದೇಶಗಳನ್ನು ಗುರುತಿಸಿ, ವಿಶೇಷ ಗಮನಹರಿಸುವ ಮೂಲಕ ಆರೋಗ್ಯ ಇಲಾಖೆಯ ಸಿಬ್ಬಂದಿ ಯಾವುದೇ ಸಾವು-ನೋವುಗಳು ಸಂಭವಿಸದಂತೆ ಕ್ರಮ ವಹಿಸಬೇಕು. ಕಾಯಿಲೆಯ ನಿಯಂತ್ರಣಕ್ಕೆ ಅಗತ್ಯವಿರುವ ಅನುದಾನವನ್ನು ಬಿಡುಗಡೆಗೊಳಿಸುವುದಾಗಿ ಸೂಚಿಸಿದರು.ತೀರ್ಥಹಳ್ಳಿ, ಹೊಸನಗರ, ಸಾಗರ ಮಲೆನಾಡು ತಾಲೂಕುಗಳು ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಪ್ರಸಕ್ತ ಬೇಸಿಗೆಯಲ್ಲಿ ಕಂಡುಬರುವ ಮಂಗನಕಾಯಿಲೆಯ ನಿಯಂತ್ರಣಕ್ಕೆ ಜಿಲ್ಲಾಡಳಿತ ಜಿಲ್ಲಾ ಪಂಚಾಯಿತಿ, ಆರೋಗ್ಯ ಇಲಾಖೆ ಹಾಗೂ ಇತರೆ ಇಲಾಖೆಗಳ ಸಮನ್ವಯದೊಂದಿಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಎಲ್ಲಾ ಪ್ರಾಥಮಿಕ ಕೇಂದ್ರಗಳ ವೈದ್ಯಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಪ್ರಸಕ್ತ ಸಾಲಿನ ಪಲ್ಸ್‌ಪೋಲಿಯೋ ಕಾರ್ಯಕ್ರಮದ ಮೊದಲ ಸುತ್ತಿನ ಲಸಿಕಾ ಆಂದೋಲನವು ಡಿ.21ರಂದು ಬೆಳಗ್ಗೆ 8 ರಿಂದ ಸಂಜೆ 5ಗಂಟೆಯವರೆಗೆ ಜಿಲ್ಲೆಯಾದ್ಯಂತ ನಡೆಯುತ್ತಿದ್ದು, ಕಾರ್ಯಕ್ರಮದ ಯಶಸ್ಸಿಗೆ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ ಎಂದರು.ಜಿಲ್ಲೆಯಾದ್ಯಂತ 5ವರ್ಷದೊಳಗಿನ 1,23,338 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದ್ದು, 1016 ಬೂತ್‌ಗಳನ್ನು ತೆರೆಯಲು ಸಿದ್ದತೆ ಮಾಡಿಕೊಳ್ಳಲಾಗಿದೆ. 1905 ತಂಡಗಳನ್ನು ನೇಮಿಸಿದ್ದು, 193 ಜನರನ್ನು ಉಸ್ತುವಾರಿಗಾಗಿ ನಿಯೋಜಿಸಲಾಗಿದೆ. ಈ ಮಹತ್ವದ ಕಾರ್ಯದಲ್ಲಿ ಭಾಗವಹಿಸುವ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ತರಬೇತಿ ನೀಡಲು ಸೂಚಿಸಲಾಗಿದೆ ಎಂದರು.
ಸಭೆಯಲ್ಲಿ ಜಿಪಂ ಸಿಇಒ ಎನ್.ಹೇಮಂತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಟರಾಜ್, ಡಾ. ನಾಗರಾಜ್ ನಾಯ್ಕ್, ಡಾ. ಸಿದ್ಧನಗೌಡಪಾಟೀಲ್, ಡಾ. ಮಲ್ಲಪ್ಪ, ಡಾ. ಸ್ಮೃತಿ ಸಿ.ರಾಜ್, ಡಾ. ಜಿ.ಕೆ.ಅನುಷಾ , ಡಾ. ಶಾಂತಕುಮಾರ್, ಡಾ. ಪ್ರಶಾಂತ್, ಡಾ.ನಾರಾಯಣ್ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳ ವೈದ್ಯಾಧಿಕಾರಿಗಳು, ಆರೋಗ್ಯ ಇಲಾಖೆಯ ಅಧಿಕಾರಿ ಸಿಬ್ಬಂದಿ ಉಪಸ್ಥಿತರಿದ್ದರು.-----
ಜಿಲ್ಲೆಯಲ್ಲಿ ಬಾಣಂತಿ ಸಾವಿನ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಅದಕ್ಕೆ ಸೂಕ್ತ ಕಾರಣಗಳನ್ನು ಗುರುತಿಸಿ, ನಿಯಂತ್ರಣ ಕ್ರಮ ಅನುಸರಿಸಬೇಕಾದ ಅಗತ್ಯವಿದೆ. ಆದ್ದರಿಂದ ಜಿಲ್ಲೆಯಲ್ಲಿ ಕಳೆದ ಮೂರು ತಿಂಗಳಲ್ಲಿ ಮೃತರಾದ ಗರ್ಭಿಣಿ, ಬಾಣಂತಿ ಸಾವಿನ ಪ್ರಕರಣಗಳ ಕುರಿತು ತಜ್ಞ ವೈದ್ಯಾಧಿಕಾರಿಗಳ ತಂಡವನ್ನು ರಚಿಸಿ, ಪರಿಶೀಲನೆ ನಡೆಸಿ, ಮುಂದಿನ 15 ದಿನಗಳೊಳಗಾಗಿ ವರದಿ ನೀಡುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಸೂಚಿಸಲಾಗಿದೆ.- ಗುರುದತ್ತ ಹೆಗಡೆ, ಜಿಲ್ಲಾಧಿಕಾರಿ