ಸಾರಾಂಶ
ಕನ್ನಡಪ್ರಭ ವಾರ್ತೆ ಮದ್ದೂರು
ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ತಾಲೂಕಿನ ರೈತರಿಗೆ ಬಿತ್ತನೆ ಬೀಜ ವಿತರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಕೆ.ಎಂ.ಉದಯ್ ಗುರುವಾರ ಹೇಳಿದರು.ಪಟ್ಟಣದ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಆವರಣದಲ್ಲಿ ಕೃಷಿ ಇಲಾಖೆಯಿಂದ ರಾಜೇಗೌಡನ ದೊಡ್ಡಿ ಗ್ರಾಮದ ರೈತರಿಗೆ ಭತ್ತ ಮತ್ತು ರಾಗಿ ಬಿತ್ತನೆ ಬೀಜವನ್ನು ಸಾಂಕೇತಿಕವಾಗಿ ವಿತರಣೆ ಮಾಡಿ ಮಾತನಾಡಿದರು.
ಮಂಡ್ಯ ಜಿಲ್ಲೆಯ ರೈತರು ಕೃಷಿಯನ್ನೇ ನಂಬಿ ಬದುಕುತ್ತಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ ಬರಗಾಲ, ಮಳೆ ಕೊರತೆ ಕಾರಣ ಬೆಳೆಯಲು ಸಾಧ್ಯವಾಗಿಲ್ಲ. ಈ ಬಾರಿ ವರುಣನ ಕೃಪೆಯಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಮಳೆಯಾಗಿ ಕೆ ಆರ್ ಎಸ್ ಜಲಾಶಯ ಭರ್ತಿಯಾಗಿ ರೈತರು ಬೆಳೆ ಬೆಳೆಯಲು ಅನುಕೂಲಕರ ವಾತಾವರಣ ನಿರ್ಮಾಣವಾಗಿದೆ ಎಂದರು.ಮುಂಗಾರು ಹಂಗಾಮಿನಲ್ಲಿ ರೈತರಿಗೆ ಅಗತ್ಯ ಬಿದ್ದರೆ ಬೀಜ ವಿತರಿಸುವ ಸಂಬಂಧ ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಇಲಾಖೆ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಿದ್ದಾರೆ. ಅಧಿಕಾರಿಗಳು ಬಿತ್ತನೆ ಬೀಜ ವಿತರಣೆಯಲ್ಲಿ ಯಾವುದೇ ಲೋಪವಾಗದಂತೆ ಕ್ರಮ ವಹಿಸಬೇಕು ಎಂದು ತಾಕಿತು ಮಾಡಿದರು.
ಜಿಲ್ಲಾ ಕೃಷಿ ಉಪ ನಿರ್ದೇಶಕಿ ಕೆ.ಮಾಲತಿ ಮಾತನಾಡಿ, ರಾಷ್ಟ್ರೀಯ ಆಹಾರ ಭದ್ರತಾ ಯೋಜನೆ ಅಡಿ ರೈತರಿಗೆ ಉಚಿತವಾಗಿ ಕೃಷಿ ಪರಿಕರಗಳನ್ನು ವಿತರಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದರು.ತಾಲೂಕು ಸಹಾಯಕ ಕೃಷಿ ನಿರ್ದೇಶಕಿ ಎಚ್.ಜಿ. ಪ್ರತಿಭಾ ಅವರು ಪ್ರಸಕ್ತ ಸಾಲಿನಲ್ಲಿ ಕೃಷಿ ಇಲಾಖೆ ವತಿಯಿಂದ ರೈತರಿಗೆ ವಿತರಣೆ ಮಾಡಲು ಒಂದು ಸಾವಿರ ಕ್ವಿಂಟಲ್ ಭತ್ತ ಮತ್ತು 47.35 ಕ್ವಿಂಟಲ್ ರಾಗಿ ದಾಸ್ತಾನು ಮಾಡಲಾಗಿದೆ. ಕಸಬಾ, ಕೆಸ್ತೂರು, ಕೊಪ್ಪ, ಭಾರತೀನಗರ ಹಾಗೂ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲೂ ಸಹ ಬಿತ್ತನೆ ಬೀಜ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಕೃಷಿ ಅಧಿಕಾರಿಗಳಾದ ದಯಾನಂದ ಕುಮಾರ್, ಎನ್. ರೂಪಶ್ರೀ, ಕೆ.ಎನ್.ಕರುಣಾ, ಎನ್. ವಿ. ಕೃಷ್ಣೆಗೌಡ, ಗವಾಸ್ಕರ್ ಮತ್ತಿತರರು ಇದ್ದರು.