ಹಿರೇಕೆರೂರು: ಸರ್ಕಾರಗಳು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿ, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಜತೆಗೆ ಕಲಿಕೆ ಪೂರಕವಾಗುವಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ನೀಡುತ್ತಿದೆ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.

ತಾಲೂಕಿನ ಬಾವಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ನೂತನವಾಗಿ ನಿರ್ಮಿಸಿದ ಅಡುಗೆ ಕೊಠಡಿ ಹಾಗೂ ಶಾಲಾ ಆವರಣದ ಕಾಂಪೌಂಡ್‌ ಗೋಡೆಯನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು.ದೇಶದ ಅಭಿವೃದ್ಧಿಯಲ್ಲಿ ಶಿಕ್ಷಣದ ಪಾತ್ರ ಬಹುಮುಖ್ಯವಾಗಿದ್ದು, ಪ್ರತಿಯೊಬ್ಬರಿಗೂ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಸರ್ಕಾರ ಹತ್ತಾರು ಸೌಲಭ್ಯ ನೀಡುವ ಮೂಲಕ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುವ ಕಾರ್ಯ ಮಾಡುತ್ತಿದೆ. ಸರ್ಕಾರದ ಎಲ್ಲ ಸೌಲಭ್ಯಗಳನ್ನು ಪಡೆದುಕೊಂಡು ಶಿಕ್ಷಣವಂತರಾಗಿ ಸಮಾಜವನ್ನು ಸರಿದಾರಿಯಲ್ಲಿ ಮುನ್ನಡೆಸುವಂತಹ ಕಾರ್ಯ ಮಾಡಬೇಕು. ಶಿಕ್ಷಣ ಕ್ಷೇತ್ರಕ್ಕೆ ಬಹಳಷ್ಟು ಆದ್ಯತೆ ನೀಡಿ, ಹಲವಾರು ಯೋಜನೆಗಳನ್ನು ಜಾರಿಗೊಳಿಸಿ ಮಕ್ಕಳ ಕಲಿಕೆಗೆ ಉತ್ತೇಜನ ನೀಡುವಕಾರ್ಯ ಮಾಡುತ್ತಿವೆ. ಪಾಲಕರು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಮುತುವರ್ಜಿ ವಹಿಸಿ ಅವರ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಬೇಕು ಎಂದರು.ಬಿಇಒ ಎನ್. ಶ್ರೀಧರ ಮಾತನಾಡಿ, ಮಕ್ಕಳ ಶೈಕ್ಷಣಿಕ ಚಟುವಟಿಗಳ ಮೇಲೆ ಪಾಲಕರು ಸದಾ ನಿಗಾ ವಹಿಸಿ ಅವರ ಶೈಕ್ಷಣಿಕ ಜೀವನಕ್ಕೆ ಭದ್ರ ಅಡಿಪಾಯ ಹಾಕಬೇಕು. ಸರ್ಕಾರಗಳು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಹೆಚ್ಚು ಆದ್ಯತೆ ನೀಡಿ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಒತ್ತು ನೀಡುತ್ತಿದೆ ಎಂದರು.

ಈ ವೇಳೆ ಹಾವೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಎನ್. ಸುರೇಶ್‌ಕುಮಾರ್ ಪ್ರಧಾನ ಮಂತ್ರಿ ಪೋಷಣ ಅಭಿಯಾನ ನಿರ್ದೇಶಕ ಎಚ್.ಎಚ್. ಜಾಡರ್, ಎಸ್‌ಡಿಎಂಸಿ ಅಧ್ಯಕ್ಷರಾದ ಸಂತೋಷ್ ನಾಯಕ್, ಎಚ್.ಸಿ. ಪಾಟೀಲ್, ಬಿ.ಆರ್‌. ತೇವರಿ, ರಮೇಶ್ ಪೂಜಾರ್, ಬಿ.ಎಸ್. ಹುಲ್ಲತ್ತಿ , ಜೆ.ಬಿ. ಜೋಗಿಹಳ್ಳಿ ಸೇರಿದಂತೆ ಎಸ್‌ಡಿಎಂಸಿ ಪದಾಧಿಕಾರಿಗಳು, ಗ್ರಾಮಸ್ಥರು, ಶಾಲಾ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಗ್ರಾಮದ ಮುಖಂಡರು ಇದ್ದರು.