ಕನ್ನಡಪ್ರಭ ವಾರ್ತೆ ಮಡಿಕೇರಿಮುಂಗಾರು ಪ್ರಾರಂಭವಾಗುವ ಲಕ್ಷಣಗಳು ಕಾಣುತ್ತಿದ್ದು, ಅಗತ್ಯ ಪೂರ್ವ ತಯಾರು ಮಾಡಿಕೊಳ್ಳುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್ ಸೂಚಿಸಿದ್ದಾರೆ. ಪೊನ್ನಂಪೇಟೆ ತಾಲೂಕು ಪಂಚಾಯಿತಿಯ ಸಾಮರ್ಥ್ಯ ಸೌಧದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಮಾತನಾಡಿದರು.
ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಲ್ಲಿ ಅಗತ್ಯ ಎಚ್ಚರ ವಹಿಸಬೇಕು. ಪ್ರವಾಹ ಪೀಡಿತ ಪ್ರದೇಶಗಳ ಕುಟುಂಬಗಳಿಗೆ ಕಾಲಕಾಲಕ್ಕೆ ಮಾಹಿತಿ ನೀಡುವಂತಾಗಬೇಕು. ಕಾಳಜಿ ಕೇಂದ್ರದಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಕೆಲಸ ನಿರ್ವಹಿಸಿ ಎಂದು ನಿರ್ದೇಶನ ನೀಡಿದರು.ಜಿಲ್ಲೆಯಲ್ಲಿ ಅಪಾಯ ಶಿಥಿಲ ಸ್ಥಿತಿಯಲ್ಲಿರುವ ಶಾಲಾ ಹಾಗೂ ಅಂಗನವಾಡಿ ಕಟ್ಟಡಗಳ ಕಾಮಗಾರಿಗಳನ್ನು ಪೂರ್ಣಗೊಳಿಸಿ ಯಾವುದೇ ಅವಘಡಗಳು ಬಾರದ ರೀತಿಯಲ್ಲಿ ನೋಡಿಕೊಳ್ಳಲು ನಿರ್ದೇಶನ ನೀಡಿದರು.
ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದಂತೆ ಯಾವೆಲ್ಲಾ ಕಾಮಗಾರಿಗಳು ಪೂರ್ಣಗೊಂಡಿದೆ ಹಾಗೂ ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಜೆಜೆಎಂ ಯೋಜನೆಯಡಿ ಅಪೂರ್ಣಗೊಂಡಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು ತಿಳಿಸಿದರು. ಮಳೆಗಾಲ ಪ್ರಾರಂಭವಾಗುತ್ತಿರುವ ಹಿನ್ನೆಲೆ ಕೃಷಿ ಇಲಾಖೆಯಡಿ ರೈತರಿಗೆ ಸಮರ್ಪಕವಾಗಿ ರಸಗೊಬ್ಬರ ಮತ್ತು ಬಿತ್ತನೆ ಬೀಜ, ಯೂರಿಯ, ಕೃಷಿ ಯಂತ್ರೋಪಕರಣಗಳ ಬಗ್ಗೆ ಮಾಹಿತಿ ಪಡೆದು ರೈತರಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಸಲಹೆ ನೀಡಿದರು.ಜಿಲ್ಲೆಯಲ್ಲಿ ಈಗಾಗಲೇ ಮಳೆಗಾಲಕ್ಕೆ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಸಹಾಯವಾಣಿ ಕೇಂದ್ರ ತೆರೆಯಲಾಗಿದ್ದು, ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಮುಂಗಾರು ಸಂಬಂಧ ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದು ಕೊಡಗು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ತಿಳಿಸಿದರು.
ಪಶುಸಂಗೋಪನೆ, ತೋಟಗಾರಿಕೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ಹಲವು ವಿಷಯಗಳ ಕುರಿತು ಮಾತನಾಡಿದರು.
ಉಪ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ್ ಎನ್.ಹೆಚ್, ವಿರಾಜಪೇಟೆ ತಹಸೀಲ್ದಾರ್ ಪ್ರವೀಣ್ ಕುಮಾರ್, ಪೊನ್ನಂಪೇಟೆ ತಹಶೀಲ್ದಾರ್ ಸಿ.ಎಸ್.ಸಂಜನಾ, ವಿರಾಜಪೇಟೆ ತಾ.ಪಂ.ಇಒ ರಾಜೇಶ್ ಕೆ.ಆರ್, ಮಡಿಕೇರಿ ತಾ.ಪಂ.ಇಒ ಶೇಖರ್, ವಿವಿಧ ಇಲಾಖೆಯ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಕಂದಾಯ ಇಲಾಖೆಯ ಸಿಬ್ಬಂದಿ ವರ್ಗದವರು ಹಾಗೂ ಇತರರು ಉಪಸ್ಥಿತರಿದ್ದರು.