ಕನ್ನಡಪ್ರಭ ವಾರ್ತೆ ಬೆಳಗಾವಿವಿಧಾನ ಮಂಡಲದ ಚಳಿಗಾಲ ಅಧಿವೇಶನ ಡಿಸೆಂಬರ್ 2ರಿಂದ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ಗುರುವಾರ ಸುವರ್ಣ ವಿಧಾನ ಸೌಧಕ್ಕೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಭೇಟಿ ನೀಡಿ ಅಧಿವೇಶನದ ಅಗತ್ಯ ಸಿದ್ಧತೆಗಳನ್ನು ಪರಿಶೀಲಿಸಿದರು.
ಕನ್ನಡಪ್ರಭ ವಾರ್ತೆ ಬೆಳಗಾವಿ
ವಿಧಾನ ಮಂಡಲದ ಚಳಿಗಾಲ ಅಧಿವೇಶನ ಡಿಸೆಂಬರ್ 2ರಿಂದ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ಗುರುವಾರ ಸುವರ್ಣ ವಿಧಾನ ಸೌಧಕ್ಕೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಭೇಟಿ ನೀಡಿ ಅಧಿವೇಶನದ ಅಗತ್ಯ ಸಿದ್ಧತೆಗಳನ್ನು ಪರಿಶೀಲಿಸಿದರು.ಈ ವೇಳೆ ಮಾತನಾಡಿದ ಅವರು, ಮಾಧ್ಯಮ ಕೊಠಡಿ, ಬ್ಯಾಂಕ್ವೆಟ್ ಹಾಲ್ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಆಸನ ವ್ಯವಸ್ಥೆ, ಸ್ವಚ್ಛತೆ ಹಾಗೂ ಇತರೆ ಸೌಲಭ್ಯಗಳನ್ನು ಸುಸಜ್ಜಿತವಾಗಿ ಮಾಡಬೇಕು. ಪ್ರತಿಯೊಂದು ಪ್ರದೇಶದಲ್ಲಿಯೂ ಸಿಸಿ ಟಿವಿ ಕ್ಯಾಮೆರಾಗಳು ಕಡ್ಡಾಯವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು ಎಂದರು.
ಯಾವುದೇ ರೀತಿಯ ವಿದ್ಯುತ್ ವ್ಯತ್ಯಯ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಲಿಪ್ಟ್ ಗಳು ಸುಗಮವಾಗಿ ಕಾರ್ಯನಿರ್ವಹಿಸುವಂತೆ ನಿರ್ವಹಣೆ ಮಾಡಬೇಕು ಎಂದು ಸೂಚಿಸಿದರು. ಸಚಿವರು, ಅಧಿಕಾರಿಗಳು, ಸಿಬ್ಬಂದಿ, ಮಾಧ್ಯಮ ಪ್ರತಿನಿಧಿಗಳು, ಮಾರ್ಷಲ್ಗಳು ಹಾಗೂ ಇತರೆ ಸಿಬ್ಬಂದಿಗೆ ಊಟದ ವ್ಯವಸ್ಥೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು.ಅಧಿವೇಶನದ ವೇಳೆ ಭದ್ರತೆ ಹಾಗೂ ಸಂಚಾರ ವ್ಯವಸ್ಥೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಪೊಲೀಸ್ ಇಲಾಖೆಯೊಂದಿಗೆ ಇತರೆ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ, ಅಗತ್ಯ ಸ್ಥಳಗಳಲ್ಲಿ ಸೂಕ್ತ ಭದ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ವಾಹನಗಳ ಸಂಚಾರ ಹಾಗೂ ಪಾರ್ಕಿಂಗ್ ವ್ಯವಸ್ಥೆಯನ್ನು ಸುಗಮಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಮಹಿಳಾ ಶಾಸಕರು, ಸಚಿವರು, ಅಧಿಕಾರಿಗಳು ಹಾಗೂ ಸಿಬ್ಬಂದಿ ಬಳಕೆ ಮಾಡುವ ಶೌಚಾಲಯಗಳ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಅಗತ್ಯವಿರುವ ಎಲ್ಲ ವ್ಯವಸ್ಥೆಗಳನ್ನು ಮುಂಚಿತವಾಗಿಯೇ ಪೂರ್ಣಗೊಳಿಸಿ, ಯಾವುದೇ ಕೊರತೆಯಾಗದಂತೆ ಸಂಬಂಧಿಸಿದ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.ಈ ವೇಳೆ ನಗರ ಪೊಲೀಸ್ ಆಯುಕ್ತ ಪ್ರಕಾಶ ನಿಕ್ಕಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಆಹಾರ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ ನಾಯಕ, ಲೋಕೋಪಯೋಗಿ, ಹೆಸ್ಕಾಂ, ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.