ಎಗ್ಗಿಲ್ಲದೆ ಪ್ರಸಾರ ಆಗುವ ಸುಳ್ಳು ಸುದ್ದಿಗಳ ಮೇಲೆ ನಿಗಾ ಅಗತ್ಯ: ಸಚಿವ ದಿನೇಶ್‌ ಗುಂಡೂರಾವ್‌

| Published : Sep 04 2024, 02:09 AM IST / Updated: Sep 04 2024, 11:03 AM IST

ಸಾರಾಂಶ

ಸುಳ್ಳು ಸುದ್ದಿಗಳು ಮಾಧ್ಯಮ, ಸಾಮಾಜಿಕ ಜಾಲತಾಣದಲ್ಲಿ ಎಗ್ಗಿಲ್ಲದೆ ಪ್ರಸಾರ ಆಗುತ್ತಿವೆ. ಇವುಗಳ ಬಗ್ಗೆ ಗಮನ ಹರಿಸಬೇಕಿದೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

 ಬೆಂಗಳೂರು :  ಕೆಲ ಮಾಧ್ಯಮಗಳು, ಜಾಲತಾಣಗಳು ಉದ್ದೇಶಪೂರ್ವಕವಾಗಿ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಇಂತಹ ಸುದ್ದಿಗಳ ಮೇಲೆ ನಿಗಾ ವಹಿಸುವ ಅವಶ್ಯಕತೆ ಇದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್ ಹೇಳಿದರು.

ಮಂಗಳವಾರ ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತು ಗಾಂಧಿ ಸ್ಮಾರಕ ಭವನದ ಸಹಯೋಗದಲ್ಲಿ ಗಾಂಧಿ ಭವನದಲ್ಲಿ ನಡೆದ ‘ಸುಳ್ಳು ಸುದ್ದಿ - ಸಾಮಾಜಿಕ ನ್ಯಾಯದ ಮೇಲೆ ಪರಿಣಾಮ’ ಕುರಿತು ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

ಕೆಲವು ಮಾಧ್ಯಮಗಳು ಸುಳ್ಳು ಸುದ್ದಿ ಪ್ರಸಾರ ಮಾಡುವ ಮೂಲಕ ಜನರ ಮನಸ್ಸಿನ ಮೇಲೆ ಪ್ರಭಾವ ಬೀರುತ್ತದೆ. ಸುಳ್ಳನೇ ಸತ್ಯವಾಗಿ ಬಿಂಬಿಸಿ ಜನರನ್ನು ದಾರಿ ತಪ್ಪಿಸುವ ಕಾರ್ಯ ನಡೆಸುತ್ತಿವೆ. ಜನರಿಗೆ ಯಾವುದು ಸತ್ಯ, ಯಾವುದು ಸುಳ್ಳು ಎಂಬುದರ ಬಗ್ಗೆ ಕೆಲವೊಮ್ಮೆ ಗೊಂದಲ ಮೂಡಿಸುತ್ತದೆ. ಆದ್ದರಿಂದ ಇದರ ವಸ್ತು ಪರಿಶೀಲನೆ ಮಾಡುವುದರ ಮೂಲಕ ಗೃಹ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗಳು ನಿಗಾ ವಹಿಸಬೇಕು. ಇದರಿಂದ ಇಂತಹ ಸುದ್ದಿಗಳು ಹರಡುವುದನ್ನು ತಡೆಯಬಹುದು ಎಂದು ಸಲಹೆ ನೀಡಿದರು.

ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಕೆ.ರವಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾದ ಆಯೇಶಾ ಖಾನಂ, ಕಾರ್ಯದರ್ಶಿ ಸಿ.ರೂಪಾ ಉಪಸ್ಥಿತರಿದ್ದರು.