: ನೀಟ್‌ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ಮಾಡಿರುವುದನ್ನು ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಯುವ ಕಾಂಗ್ರೆಸ್‌ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ, ಎನ್‌ಎಸ್‌ಯುಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಮಂಗಳೂರಿನ ಮಲ್ಲಿಕಟ್ಟೆಯ ಕದ್ರಿ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆ ವೇಳೆ ಹೆದ್ದಾರಿಗೆ ತಡೆಗೆ ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದ ಘಟನೆಯೂ ನಡೆದಿದೆ.

ಮಂಗಳೂರು: ನೀಟ್‌ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ಮಾಡಿರುವುದನ್ನು ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಯುವ ಕಾಂಗ್ರೆಸ್‌ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ, ಎನ್‌ಎಸ್‌ಯುಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಮಂಗಳೂರಿನ ಮಲ್ಲಿಕಟ್ಟೆಯ ಕದ್ರಿ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆ ವೇಳೆ ಹೆದ್ದಾರಿಗೆ ತಡೆಗೆ ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದ ಘಟನೆಯೂ ನಡೆದಿದೆ.

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಬಿ.ರಮಾನಾಥ ರೈ, ಪ್ರಶ್ನೆ ಪತ್ರಿಕೆ ಸೋರಿಕೆ ಇದು ಮೊದಲ ಬಾರಿಯಲ್ಲ. ಸರ್ಕಾರ ತನಿಖೆ ಮಾಡುತ್ತೇವೆ ಎನ್ನುತ್ತಾರೆ, ಆದರೆ ಈ ವರೆಗೆ ಸೋರಿಕೆ ಮಾಡಿದ ಯಾವೊಬನ್ನಿಗೂ ಶಿಕ್ಷೆ ಆಗಿಲ್ಲ. ಸಿಬಿಐ ತನಿಖೆಯಲ್ಲಿ ನಮಗೆ ಭರವಸೆ ಇಲ್ಲ ಎಂದರು.ಪ್ರಶ್ನೆ ಪತ್ರಿಕೆ ಸೋರಿಕೆಗೆ ಸರ್ಕಾರದ ಜೊತೆಗೆ ಇರುವವರು, ಕೋಚಿಂಗ್‌ ಸೆಂಟರ್‌ಗಳು ಕಾರಣ. ಸೋರಿಕೆ ಬಗ್ಗೆ ಕೇಂದ್ರ ಸರ್ಕಾರ, ಶಿಕ್ಷಣ ಸಚಿವರು ಸಮರ್ಪಕವಾಗಿ ಉತ್ತರಿಸುತ್ತಿಲ್ಲ. ಪರಿಣಾಮ ಲಕ್ಷಾಂತರ ವಿದ್ಯಾರ್ಥಿಗಳು ಅನ್ಯಾಯಕ್ಕೆ ಒಳಗಾಗಿದ್ದಾರೆ. ವಿದ್ಯಾರ್ಥಿ ಸಂಘಟನೆಯಾಗಿರುವ ಎಬಿವಿಪಿ ಯಾಕೆ ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ, ಅನ್ಯಾಯದ ಬಗ್ಗೆ ಮೌನವಾಗಿದೆ ಎಂದು ಪ್ರಶ್ನಿಸಿದ ಅವರು, ಪತ್ರಿಕೆ ಸೋರಿಕೆ ಬಗ್ಗೆ ಸೂಕ್ತ ತನಿಖೆ ನಡೆಸಿ, ಆರೋಪಿಗಳಿಗೆ ಶಿಕ್ಷೆ ವಿಧಿಸಬೇಕು ಎಂದರು. ಇಂಧನ ಬೆಲೆ ಏರಿಸುವ ಮೂಲಕ ಕೇಂದ್ರ ಬಡವರನ್ನು ಸಂಕಷ್ಟಕ್ಕೆ ದೂಡಿದೆ. ಇದರ ವಿರುದ್ಧ ಮುಂದೆ ತೀವ್ರ ಹೋರಾಟ ಮಾಡುವ ಎಚ್ಚರಿಕೆ ನೀಡಿದರು.

ದ.ಕ.ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್‌ ಮಾತನಾಡಿ, ವಿದ್ಯಾರ್ಥಿಗಳೊಂದಿಗೆ ಕೇಂದ್ರ ಸರ್ಕಾರ ನಡೆಸಿಕೊಳ್ಳುತ್ತಿರುವ ರೀತಿಯನ್ನು ಜಿಲ್ಲಾ ಕಾಂಗ್ರೆಸ್‌ ಖಂಡಿಸುತ್ತದೆ. ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದ್ದು, ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಪಕ್ಷದ ಪ್ರಮುಖರಾದ ಇಬ್ರಾಹಿಂ, ಸುಹೈಲ್‌ ಕೆ., ಅಖಿಲಾ, ಬಶೀರ್‌, ಸುಹಾನ್‌ ಆಳ್ವ ಸೇರಿದಂತೆ ಪಕ್ಷದ ನಾಯಕರು, ಕಾರ್ಯಕರ್ತರು ಹಾಗೂ ಎನ್‌ಎಸ್‌ಯುಐ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಹೆದ್ದಾರಿ ತಡೆಗೆ ಯತ್ನ-ಪೊಲೀಸ್‌ ವಶಕ್ಕೆ: ಪ್ರತಿಭಟನೆ ಕೊನೆಗೆ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ, ಹೆದ್ದಾರಿ ತಡೆಗೆ ಯತ್ನಿಸಿದ ಕಾರ್ಯಕರ್ತರನ್ನು ಸ್ಥಳದಲ್ಲಿದ್ದ ಪೊಲೀಸರು ತಡೆದು ವಶಕ್ಕೆ ಪಡೆದರು.