ಅಂಬೇಡ್ಕರ್ ಪ್ರತಿಮೆ ಮುಂದೆ ಧರಣಿ । ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ
ಕನ್ನಡಪ್ರಭ ವಾರ್ತೆ ಹಾಸನರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್-ಯುಜಿ-೨೦೨೬ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ದೇಶದಾದ್ಯಂತ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಉಂಟಾಗಿರುವ ಆತಂಕವನ್ನು ಗಂಭೀರವಾಗಿ ಪರಿಗಣಿಸಿ, ಪ್ರಕರಣದ ಕುರಿತು ಉನ್ನತ ಮಟ್ಟದ ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸಂಸದರಾದ ಶ್ರೇಯಸ್ ಎಂ. ಪಟೇಲ್ ನೇತೃತ್ವದಲ್ಲಿ ನಗರದ ಅಂಬೇಡ್ಕರ್ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ರವಾನಿಸಿದರು.
ಇದೆ ವೇಳೆ ಸಂಸದರು ಮಾತನಾಡಿ, ವೈದ್ಯಕೀಯ ಶಿಕ್ಷಣ ಕ್ಷೇತ್ರಕ್ಕೆ ಪ್ರವೇಶ ಪಡೆಯಲು ಪ್ರತಿವರ್ಷ ಲಕ್ಷಾಂತರ ವಿದ್ಯಾರ್ಥಿಗಳು ಹಲವು ವರ್ಷಗಳ ಕಾಲ ಕಠಿಣ ಪರಿಶ್ರಮದೊಂದಿಗೆ ಸಿದ್ಧತೆ ನಡೆಸುತ್ತಾರೆ. ಆದರೆ ಪರೀಕ್ಷೆಯ ಪಾವಿತ್ರ್ಯಕ್ಕೆ ಧಕ್ಕೆ ಉಂಟುಮಾಡುವ ರೀತಿಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಂತಹ ಗಂಭೀರ ಆರೋಪಗಳು ಕೇಳಿಬಂದಿರುವುದು ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಗಾಢ ಪರಿಣಾಮ ಬೀರಿದೆ ಎಂದರು.ಸುಮಾರು ೨೩ ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೀಟ್ ಪರೀಕ್ಷೆಗೆ ಹಾಜರಾಗಿದ್ದು, ಪರೀಕ್ಷೆ ರದ್ದುಗೊಂಡಿರುವ ಪರಿಣಾಮ ವಿದ್ಯಾರ್ಥಿಗಳು ಮಾನಸಿಕ ಒತ್ತಡ, ಅನಿಶ್ಚಿತತೆ ಮತ್ತು ಭವಿಷ್ಯದ ಆತಂಕವನ್ನು ಎದುರಿಸುವಂತಾಗಿದೆ. ಮರು ಪರೀಕ್ಷೆಯ ಸಾಧ್ಯತೆ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿ ಉಂಟಾಗಿರುವ ಗೊಂದಲ ವಿದ್ಯಾರ್ಥಿಗಳು ಮತ್ತು ಪೋಷಕರನ್ನು ತೀವ್ರ ಸಂಕಷ್ಟಕ್ಕೆ ತಳ್ಳಿದೆ.
ಪರೀಕ್ಷಾ ವ್ಯವಸ್ಥೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯ ಮೇಲೆ ದೇಶದ ಜನರಲ್ಲಿ ಅನುಮಾನ ಮೂಡಿರುವ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸ್ವತಂತ್ರ ನ್ಯಾಯಾಂಗ ತನಿಖೆ ನಡೆಸಬೇಕು. ಅಲ್ಲದೆ ಪ್ರಕರಣದಲ್ಲಿ ಭಾಗಿಯಾಗಿರುವ ಅಧಿಕಾರಿಗಳು, ಮಧ್ಯವರ್ತಿಗಳು ಹಾಗೂ ಇತರ ಸಂಬಂಧಿತ ವ್ಯಕ್ತಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಿ, ಇಂತಹ ಕೃತ್ಯಗಳಿಗೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿದರು.ಇದರ ಜೊತೆಗೆ, ರಾಷ್ಟ್ರೀಯ ಪರೀಕ್ಷಾ ವ್ಯವಸ್ಥೆಯಲ್ಲಿನ ಲೋಪದೋಷಗಳನ್ನು ಸಮಗ್ರವಾಗಿ ಪರಿಶೀಲಿಸಿ, ಭವಿಷ್ಯದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಅಥವಾ ಇತರ ಅಕ್ರಮಗಳು ಮರುಕಳಿಸದಂತೆ ಅತ್ಯಾಧುನಿಕ ಭದ್ರತಾ ಕ್ರಮಗಳನ್ನು ಜಾರಿಗೆ ತರಬೇಕು. ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಮತ್ತು ಶೈಕ್ಷಣಿಕ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ಬೆಂಬಲ ವ್ಯವಸ್ಥೆ ಕಲ್ಪಿಸುವುದರ ಜೊತೆಗೆ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗಳ ಕಾರ್ಯವೈಖರಿಯನ್ನು ಪುನರ್‌ವ್ಯವಸ್ಥೆಗೊಳಿಸಿ ಸಂಪೂರ್ಣ ಪಾರದರ್ಶಕ ಹಾಗೂ ವಿಶ್ವಾಸಾರ್ಹ ಪರೀಕ್ಷಾ ವ್ಯವಸ್ಥೆಯನ್ನು ರೂಪಿಸುವ ಅಗತ್ಯವಿದೆ ಎಂದು ಹೇಳಿದರು.
ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಮತ್ತು ಶಿಕ್ಷಣ ವ್ಯವಸ್ಥೆಯ ಮೇಲಿನ ಸಾರ್ವಜನಿಕರ ನಂಬಿಕೆಯನ್ನು ಉಳಿಸಿಕೊಳ್ಳುವ ದೃಷ್ಟಿಯಿಂದ ಕೇಂದ್ರ ಸರ್ಕಾರ ತ್ವರಿತ ಹಾಗೂ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಈ ಪ್ರಕರಣದ ಸತ್ಯಾಸತ್ಯತೆಯನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದರು.ಈ ವೇಳೆ ಕಾಂಗ್ರೆಸ್ ಯೂತ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಂಜಿತ್, ಮುಖಂಡರಾದ ದೇವರಾಜೇಗೌಡ, ತಾರಾಚಂದನ್, ರಘು ದಾಸರ ಕೊಪ್ಪಲು, ರಾಮಚಂದ್ರ, ಇಸ್ಮಾಯಿಲ್ ಇತರರು ಉಪಸ್ಥಿತರಿದ್ದರು.