ಕನ್ನಡಪ್ರಭ ವಾರ್ತೆ ವಿಜಯಪುರನೀಟ್ ಯುಜಿಸಿ-2026 ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳ ಕುರಿತು ನಿಪಕ್ಷಪಾತ ತನಿಖೆ ನಡೆಸಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ನಗರದ ಡಾ.ಅಂಬೇಡ್ಕರ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ನೀಟ್ ಯುಜಿಸಿ-2026 ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳ ಕುರಿತು ನಿಪಕ್ಷಪಾತ ತನಿಖೆ ನಡೆಸಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ನಗರದ ಡಾ.ಅಂಬೇಡ್ಕರ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಎಬಿವಿಪಿ ಕೇಂದ್ರೀಯ ಕಾರ್ಯಸಮಿತಿ ಸದಸ್ಯ ಸಚಿನ ಕುಳಗೇರಿ ಮಾತನಾಡಿ, ನೀಟ್ ಪರೀಕ್ಷೆಯನ್ನು ಬರೆದು ವೈದ್ಯರಾಗಬೇಕು ಎಂಬ ಕನಸನ್ನು ಇಟ್ಟುಕೊಂಡು ದೇಶದ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಆದರೆ, ಎನ್‌ಟಿಎ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ನಿರ್ಲಕ್ಷ್ಯದಿಂದ ಇಂದು ವಿದ್ಯಾರ್ಥಿಗಳ ಜೀವನ ಜೊತೆ ಚೆಲ್ಲಾಟವಾಡಿದಂತಾಗಿದೆ. ಪ್ರವೇಶ ಪರೀಕ್ಷೆಗಳ ವಿಶ್ವಾಸಾರ್ಹರ್ತೆ ಕಳೆದುಕೊಳ್ಳುವ ರೀತಿಯಲ್ಲಿ ಪರೀಕ್ಷಾ ಸಂಸ್ಥೆಯು ನಡೆದುಕೊಳ್ಳುತ್ತಿರುವುದು ಖಂಡನೀಯ. ದೇಶದ ಲಕ್ಷಾಂತರ ವಿದ್ಯಾರ್ಥಿಗಳು ನೀಟ್ ನಂತಹ ಪರೀಕ್ಷೆಗಳಿಗೆ ಹಲವು ವರ್ಷಗಳ ಪರಿಶ್ರಮದೊಂದಿಗೆ ಹಾಜರಾಗಿರುತ್ತಾರೆ. ಇಂತಹ ಸಂದರ್ಭದಲ್ಲಿ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಅಕ್ರಮಗಳು ನಡೆದರೆ ವಿದ್ಯಾರ್ಥಿಗಳ ಮನೋಬಲ ಮತ್ತು ಅವರ ಭವಿಷ್ಯದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಭಾಗಿಯಾದವರ ವಿರುದ್ಧ ಹಾಗೂ ಎನ್‌ಟಿಎ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಎಬಿವಿಪಿ ರಾಜ್ಯ ಸಹಕಾರ್ಯದರ್ಶಿ ಸಜ್ಞಾತಾ ಕುಲಕರ್ಣಿ ಮಾತನಾಡಿ, ರಾಷ್ಟ್ರೀಯ ಮಟ್ಟದ ಪರೀಕ್ಷೆಗಳಲ್ಲಿ ತಾಂತ್ರಿಕ ಭದ್ರತೆ ಪ್ರಶ್ನೆ ಪತ್ರಿಕೆಯ ಗೌಪ್ಯತೆ ಪರೀಕ್ಷಾ ಕೇಂದ್ರಗಳ ಮೇಲ್ವಿಚಾರಣೆ ಇಂತಹವುಗಳನ್ನು ಬಹಳ ಜಾಗೃತೆಯಿಂದ ಮಾಡಬೇಕಾದ ಜವಾಬ್ದಾರಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ಮೇಲೆ ಇರುತ್ತದೆ. ಹಾಗಾಗಿ ಇಂತಹ ಸಂದರ್ಭದಲ್ಲಿ ಪರೀಕ್ಷಾ ಸಂಸ್ಥೆಯು ಸಿಬಿಐ ತನಿಖೆಗೆ ಸಂಪೂರ್ಣ ಸಹಕಾರ ನೀಡಿ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಎಬಿವಿಪಿ ವಿಭಾಗ ಸಂಘಟನಾ ಕಾರ್ಯದರ್ಶಿ ಹರ್ಷ ನಾಯಕ, ಜಿಲ್ಲಾ ಸಂಚಾಲಕ ಸಂದೀಪ ಅರಳಗುಂಡಿ, ಬಾಲಾಜಿ ಬಿರಾದಾರ, ಬಸನಗೌಡ ಕೊನರಡ್ಡಿ, ಶಶಿ ಮಾಲಿಪಾಟೀಲ, ನಾಗರಾಜ ದೇಸಾಯಿ, ಅಕ್ಷಯಕುಮಾರ, ನೀಲಮ್ಮ ತಳವಾರ ಸೇರಿದಂತೆ ಇತರರು ಭಾಗವಹಿಸಿದ್ದರು.