ಸಾಗರ: ಮುಂದಿನ ಎರಡು ಮೂರು ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ. ರಾಜ್ಯ ಪ್ರಮುಖರು ಭಾನುವಾರ ಸಂಜೆ ನವದೆಹಲಿಗೆ ತೆರಳಲಿದ್ದು ಪಟ್ಟಿ ಅಂತಿಮಗೊಳ್ಳುವ ಸಾಧ್ಯತೆ ಇದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಕುಮಾರ್ ತಿಳಿಸಿದರು.ಪಟ್ಟಣದಲ್ಲಿ ಭಾನುವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನವದೆಹಲಿಯಲ್ಲಿ ನಡೆಯುತ್ತಿದ್ದ ವಿದ್ಯಾರ್ಥಿಗಳ ಪ್ರತಿಭಟನೆ ಹಿನ್ನೆಲೆಯಲ್ಲಿ ಸಭೆ ನಡೆಯದೆ ಸಂಪುಟ ವಿಸ್ತರಣೆ ವಿಳಂಬವಾಗಿದೆ. ಇಲ್ಲವಾದಲ್ಲಿ ಒಂದು ವಾರದ ಹಿಂದೆಯೆ ಸಂಪುಟ ವಿಸ್ತರಣೆಯಾಗುತ್ತಿತ್ತು ಎಂದು ಹೇಳಿದರು.ಶಿವಮೊಗ್ಗ ಜಿಲ್ಲೆಯಲ್ಲಿ ಮೂವರು ಶಾಸಕರು, ಓರ್ವ ವಿಧಾನ ಪರಿಷತ್ ಸದಸ್ಯರು ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದು, ಹೈಕಮಾಂಡ್ ಜಿಲ್ಲೆಗೆ ಒಂದು ಸಚಿವ ಸ್ಥಾನ ಕೊಡುವ ನಿರೀಕ್ಷೆ ಇದೆ. ಪಕ್ಷ ಅರ್ಹರನ್ನು ಗುರುತಿಸಿ ಸಚಿವ ಸ್ಥಾನ ನೀಡುವ ಮೂಲಕ ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ಅವಕಾಶ ಕಲ್ಪಿಸುತ್ತದೆ ಎಂದು ಹೇಳಿದರು.ದೇಶದಲ್ಲಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹೋರಾಟ ಆರಂಭವಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಮೊದಲು ಜಾಗೃತಿ ಮೂಡಿಸಿದ್ದು ಕಾಂಗ್ರೆಸ್ ಪಕ್ಷ. ನವದೆಹಲಿಯಿಂದ ಹಿಡಿದು ಹೋಬಳಿ ಮಟ್ಟದವರೆಗೂ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಪ್ರಧಾನಿ ಮೋದಿ ಅವರ ಮನೆ ಎದುರು ಪ್ರತಿಭಟನೆ ನಡೆಸಿದೆ. ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ ನೀಡಿದ್ದರು. ರಾಹುಲ್ ಗಾಂಧಿಯವರ ಪ್ರವೇಶದ ನಂತರ ಹೋರಾಟ ಸ್ವರೂಪ ಬದಲಾಗಿದ್ದು ಕೇಂದ್ರ ಸರ್ಕಾರ ಎಚ್ಚೆತ್ತುಕೊಂಡು ಪ್ರಧಾನ್ ರಾಜೀನಾಮೆ ತೆಗೆದುಕೊಂಡಿದೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹೋರಾಟದಲ್ಲಿ ಕಾಂಗ್ರೆಸ್ ಪಾತ್ರವೇ ಪ್ರಮುಖವಾದದ್ದು ಎಂದು ಹೇಳಿದರು.ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೋರಾಟ, ಪ್ರತಿಭಟನೆ ಸಹಜ. ಆದರೆ ಪಕ್ಷದ ಕಚೇರಿಗಳಿಗೆ ನುಗ್ಗುವ ಪ್ರವೃತ್ತಿ ಸರಿಯಲ್ಲ. ಜಿಲ್ಲಾ ಕಾಂಗ್ರೆಸ್ ರಾಹುಲ್ ಗಾಂಧಿ ಅವರ ಬಂಧನ ಖಂಡಿಸಿ ಪ್ರತಿಭಟನೆ ನಡೆಸಿತ್ತು. ಅದಕ್ಕೂ ಹಿಂದಿನ ದಿನ ಬಿಜೆಪಿಯವರು ಕಾಂಗ್ರೆಸ್ ಕಚೇರಿಗೆ ನುಗ್ಗಿದ್ದರು. ಆದ್ದರಿಂದ ನಮ್ಮ ಕೆಲವು ಕಾರ್ಯಕರ್ತರು ಬಿಜೆಪಿ ಕಚೇರಿಗೆ ನುಗ್ಗಿದ್ದಾರೆ. ಯಾರೇ ಆಗಲಿ ಪಕ್ಷದ ಕಚೇರಿಗೆ ನುಗ್ಗುವುದು ಸರಿಯಲ್ಲ. ಪಕ್ಷದ ಕಚೇರಿಗೆ ನುಗ್ಗಿ ಅವಾಂತರ ಸೃಷ್ಟಿಸುವುದು, ನಮ್ಮ ಮನೆಗೆ ನುಗ್ಗಿ ಅವಾಂತರ ಸೃಷ್ಟಿಸುವುದು ಎರಡೂ ಒಂದೆ. ಇದನ್ನು ನಾವು ಒಪ್ಪುವುದಿಲ್ಲ ಎಂದು ಹೇಳಿದರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲಸೆ ಚಂದ್ರಪ್ಪ, ವಸೀಂ ದೊಡ್ಮನೆ, ಎಲ್. ಚಂದ್ರಪ್ಪ, ನಾಗೇಂದ್ರ, ಗಣಪತಿ ಮಂಡಗಳಲೆ, ರವಿಕುಮಾರ್ ಇನ್ನಿತರರು ಹಾಜರಿದ್ದರು.